ನವದೆಹಲಿ: ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಚುನಾವಣೆಯಲ್ಲಿ ಸೋತ ಹಿನ್ನೆಲೆಯಲ್ಲಿ ದೆಹಲಿ ಬಿಜೆಪಿ ಘಟಕದ ಅಧ್ಯಕ್ಷ ಆದೇಶ್ ಗುಪ್ತಾ ಅವರು ಭಾನುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸೋಲಿನ ನೈತಿಕ ಹೊಣೆ ಹೊತ್ತು ಆದೇಶ್ ಅವರು ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆ ಅಂಗೀಕರವಾಗಿದೆ. ವೀರೇಂದ್ರ ಸಚ್‌ದೇವ ಅವರು ಹಂಗಾಮಿ ಅಧ್ಯಕ್ಷರಾಗಿರಲಿದ್ದಾರೆ.
‘ನಾನು ನಿನ್ನೆ (ಶನಿವಾರ) ರಾಜೀನಾಮೆ ನೀಡಿದ್ದೇನೆ. ನಮ್ಮ ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ನನ್ನ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಎಂಸಿಡಿ ಚುನಾವಣೆಯಲ್ಲಿನ ಸೋಲಿನ ನೈತಿಕ ಹೊಣೆ ಹೊತ್ತುಕೊಂಡಿದ್ದೇನೆ. ನಾವು ಎಂಸಿಡಿಯಲ್ಲಿ ಹೆಚ್ಚಿನ ಸ್ಥಾನಗಳನ್ನು ನಿರೀಕ್ಷಿಸಿದ್ದೆವು. ಆದರೆ, ಅದು ಸಾಧ್ಯವಾಗಲಿಲ್ಲ. ಹೀಗಾಗಿ ನಾನು ಈ ನಿರ್ಧಾರ ಕೈಗೊಳ್ಳಬೇಕಾಯಿತು‘ ಎಂದು ಆದೇಶ್ ತಿಳಿಸಿದರು.
ಪಕ್ಷಕ್ಕಾಗಿ ದುಡಿಯುವ ನನ್ನ ಸಮರ್ಪಣೆ ಮುಂದುವರಿಯಲಿದೆ. ಜನರ ಕಲ್ಯಾಣಕ್ಕಾಗಿ ನಾನು ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದರು.
ಆದೇಶ್ ಗುಪ್ತಾ ಅವರ ರಾಜೀನಾಮೆಯ ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ವೀರೇಂದ್ರ ಸಚ್‌ದೇವ ಅವರನ್ನು ದೆಹಲಿ ಬಿಜೆಪಿಯ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ.
ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆ ಫಲಿತಾಂಶ ಕಳೆದ ಬುಧವಾರ ಪ್ರಕಟವಾಗಿತ್ತು. ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷವು 250 ವಾರ್ಡ್‌ಗಳ ಪೈಕಿ 134ರಲ್ಲಿ ಜಯಗಳಿಸಿತ್ತು. ಬಿಜೆಪಿ 104 ಸ್ಥಾನಗಳಲ್ಲಿ ಮಾತ್ರ ಗೆದ್ದು ಸೋಲುಂಡಿತು. ಅದರೊಂದಿಗೆ, ಪಾಲಿಕೆಯಲ್ಲಿನ ತನ್ನ 15 ವರ್ಷಗಳ ಆಡಳಿತವನ್ನು ಅಂತ್ಯಗೊಳಿಸಿತು.
ಇವುಗಳನ್ನೂ ಓದಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.