ಗುರುವಾರ , ಮೇ 6, 2021
31 °C

ಉಚಿತ ಲಸಿಕೆ ಕಾರ್ಯಕ್ರಮ: 13 ವಿರೋಧ ಪಕ್ಷಗಳ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೋವಿಡ್‌–19 ಪಿಡುಗಿನ ಈ ಸಂದರ್ಭದಲ್ಲಿ ದೇಶದ ಪ್ರತಿಯೊಬ್ಬರಿಗೂ ಉಚಿತವಾಗಿ ಕೋವಿಡ್‌ ಲಸಿಕೆ ನೀಡಬೇಕು. ಎಲ್ಲ ಆಸ್ಪತ್ರೆಗಳಿಗೆ ನಿರಂತರ ಆಮ್ಲಜನಕ ಪೂರೈಕೆಗೆ ಕ್ರಮ ಕೈಗೊಳ್ಳಬೇಕು ಎಂದು 13 ವಿರೋಧ ಪಕ್ಷಗಳು ಕೇಂದ್ರ ಸರ್ಕಾರವನ್ನು ಭಾನುವಾರ ಒತ್ತಾಯಿಸಿವೆ.

ಐದು ರಾಜ್ಯಗಳ ವಿಧಾಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಿದ್ದ ಬೆನ್ನಲ್ಲೆ ವಿರೋಧ ಪಕ್ಷಗಳ ಮುಖಂಡರು ಈ ಕುರಿತು ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ, ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ, ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಸೇರಿದಂತೆ 13 ಜನ ಮುಖಂಡರು ಈ ಹೇಳಿಕೆಗೆ ಸಹಿ ಹಾಕಿದ್ದಾರೆ.

ಪ್ರಸ್ತುತ ಕೋವಿಡ್‌ ಪಿಡುಗಿನ ಸಂದರ್ಭದಲ್ಲಿ ಕೈಗೊಳ್ಳುವ ನಿರ್ಧಾರಗಳು, ರೂಪಿಸುವ ನೀತಿಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಮೇಲೆ ಪ್ರಭಾವ ಬೀರಲು ವಿರೋಧ ಪಕ್ಷಗಳು ಈ ಜಂಟಿ ಪ್ರಕಟಣೆ ಬಿಡುಗಡೆಯ ತಂತ್ರ ಅನುಸರಿಸಿವೆ ಎಂದು ವಿಶ್ಲೇಷಿಸಲಾಗುತ್ತಿದೆ.

‘ಲಸಿಕೆ ಕಾರ್ಯಕ್ರಮಕ್ಕಾಗಿ ಬಜೆಟ್‌ನಲ್ಲಿ ₹ 35,000 ಕೋಟಿ ಘೋಷಿಸಲಾಗಿತ್ತು. ಈ ಹಣವನ್ನೇ ಬಳಸಿ ಎಲ್ಲರಿಗೂ ಉಚಿತ ಲಸಿಕೆ ನೀಡಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ, ತೃಣಮೂಲ ಕಾಂಗ್ರೆಸ್‌ ನಾಯಕಿ ಮಮತಾ ಬ್ಯಾನರ್ಜಿ, ಜೆಎಂಎಂನ ಹೇಮಂತ್‌ ಸೊರೇನ್‌, ಎನ್‌ಸಿ ವರಿಷ್ಠ ಫಾರೂಕ್‌ ಅಬ್ದುಲ್ಲಾ, ಬಿಎಸ್‌ಪಿ ನಾಯಕಿ ಮಾಯಾವತಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌, ಡಿಎಂಕೆ ನಾಯಕ ಎಂ.ಕೆ.ಸ್ಟಾಲಿನ್‌, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಹಾಗೂ ಸಿಪಿಐನ ಡಿ.ರಾಜಾ, ಸಿಪಿಎಂ ಮುಖಂಡ ಸೀತಾರಾಂ ಯೆಚೂರಿ ಸಹಿ ಹಾಕಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು