ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಬರಿ ಮಸೀದಿ ಧ್ವಂಸ ಪ್ರಕರಣ: 32 ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂಗೆ ಅರ್ಜಿ

ಸಿಬಿಐ ಕೋರ್ಟಿನ ವಿರುದ್ಧ ‘ಸುಪ್ರೀಂ’ ಮೊರೆ ಹೋದ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ
Last Updated 7 ಡಿಸೆಂಬರ್ 2022, 14:00 IST
ಅಕ್ಷರ ಗಾತ್ರ

ಅಯೋಧ್ಯೆ: ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಎಲ್ಲಾ 32 ಆರೋಪಿಗಳನ್ನು ಖುಲಾಸೆಗೊಳಿಸಿರುವ ಸಿಬಿಐನ ವಿಶೇಷ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯು (ಎಐಎಂಪಿಎಲ್‌ಬಿ) ಸುಪ್ರೀಂ ಕೋರ್ಟ್ ಮೊರೆ ಹೋಗಲಿದೆ ಎಂದು ಮಂಡಳಿಯ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಪ್ರಕರಣದಲ್ಲಿ ಮಾಜಿ ಉಪ ಪ್ರಧಾನಿ ಎಲ್‌.ಕೆ. ಅಡ್ವಾಣಿ ಸೇರಿದಂತೆ ಇತರ ಆರೋಪಿಗಳನ್ನು ಸಿಬಿಐನ ವಿಶೇಷ ನ್ಯಾಯಾಲಯವು ಖುಲಾಸೆಗೊಳಿಸಿತ್ತು. ಇದನ್ನು ಪ್ರಶ್ನಿಸಿ 2021ರ ಜ. 8ರಂದು ಅಯೋಧ್ಯೆಯ ನಿವಾಸಿಗಳಾದ ಹಾಜಿ ಮಹಬೂಬ್ ಮತ್ತು ಸಯ್ಯದ್‌ ಅಖ್ಲಾಕ್‌ ಅವರು ಅಲಹಾಬಾದ್ ಹೈಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

ಆದರೆ, ಈ ಅರ್ಜಿಯನ್ನು 2022ರ ನ. 9ರಂದು ಅಲಹಾಬಾದ್ ಹೈಕೋರ್ಟ್‌ನ ದ್ವಿಸದಸ್ಯ ನ್ಯಾಯಪೀಠವು ವಜಾಗೊಳಿಸಿ, ‘ಅರ್ಜಿದಾರರು ಈ ಪ್ರಕರಣದ ಬಲಿಪಶುಗಳಲ್ಲದ ಕಾರಣ, ತೀರ್ಪನ್ನು ಪ್ರಶ್ನಿಸಲು ಸಾಧ್ಯವಿಲ್ಲ’ ಎಂದೂ ಹೇಳಿತ್ತು.

‘ಬಾಬರಿ ಮಸೀದಿ ಧ್ವಂಸವನ್ನು ಕ್ರಿಮಿನಲ್ ಕೃತ್ಯ ಎಂದು ಅಯೋಧ್ಯೆ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ಹಾಗಾಗಿ, ಈ ಪ್ರಕರಣದಲ್ಲಿ ಖುಲಾಸೆಗೊಂಡಿರುವವರ ವಿರುದ್ಧ ನಾವು ಖಂಡಿತವಾಗಿಯೂ ಸುಪ್ರೀಂ ಕೋರ್ಟ್ ಮೆಟ್ಟಿಲೇರಲಿದ್ದೇವೆ’ ಎಂದು ಎಐಎಂಪಿಎಲ್‌ಬಿ ಕಾರ್ಯಕಾರಿ ಸದಸ್ಯ ಮತ್ತು ವಕ್ತಾರ ಸಯ್ಯದ್‌ ಖಾಸಿಲ್ ರಸೂಲ್ ಇಲ್ಯಾಸ್ ಹೇಳಿದ್ದಾರೆ.

‘ಐತಿಹಾಸಿಕ ಅಯೋಧ್ಯೆಯ ತೀರ್ಪು ನೀಡುವಾಗ ಐವರು ನ್ಯಾಯಮೂರ್ತಿಗಳನ್ನೊಳಗೊಂಡ ಸುಪ್ರೀಂ ಕೋರ್ಟ್‌ನ ಪೀಠವು, ಬಾಬರಿ ಮಸೀದಿಯನ್ನು ಧ್ವಂಸಗೊಳಿಸಿದ್ದು ಕಾನೂನಿನ ಗಂಭೀರ ಉಲ್ಲಂಘನೆಯಾಗಿದೆ. ಇದಕ್ಕೆ ಸಂಬಂಧಿಸಿದ ಆರೋಪಿಗಳು ಇನ್ನೂ ಕಾನೂನಿನ ವ್ಯಾಪ್ತಿಯಿಂದ ಹೊರಗಿದ್ದಾರೆ ಎಂಬುದಾಗಿ ಹೇಳಿತ್ತು’ ಎಂದೂ ಅವರು ತಿಳಿಸಿದ್ದಾರೆ.

‘ಅರ್ಜಿದಾರರಾದ ಹಾಜಿ ಮಹಬೂಬ್ ಮತ್ತು ಸಯ್ಯದ್ ಅಖ್ಲಾಕ್ ಅವರು ಸಿಬಿಐಗೆ ಸಾಕ್ಷಿದಾರರಾಗಿದ್ದರು. 1992ರ ಡಿ. 6ರಂದು ಗುಂಪೊಂದು ದಾಳಿ ಮಾಡಿ ಅವರಿಬ್ಬರ ಮನೆಗಳನ್ನು ಸುಟ್ಟು ಹಾಕಿತ್ತು. ಅವರ ಮನೆಗಳು ಬಾಬರಿ ಮಸೀದಿಗೆ ಸಮೀಪದಲ್ಲೇ ಇದ್ದವು’ ಎಂದೂರಸೂಲ್ ಇಲ್ಯಾಸ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT