ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ಮೋದಿ, ಬಿಜೆಪಿ ನಾಯಕರಿಗೆ ಮಮತಾ ಪ್ರಮಾಣಪತ್ರ ಬೇಕಿಲ್ಲ: ಅಮಿತ್ ಮಾಳವೀಯ

Last Updated 20 ಸೆಪ್ಟೆಂಬರ್ 2022, 12:47 IST
ಅಕ್ಷರ ಗಾತ್ರ

ಕೋಲ್ಕತ್ತ: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯ ಯಾವ ನಾಯಕರಿಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಂದ ಪ್ರಮಾಣಪತ್ರ ಬೇಕಿಲ್ಲ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಉಸ್ತುವಾರಿ ಅಮಿತ್ ಮಾಳವೀಯ ಹೇಳಿದ್ದಾರೆ.

ಮಮತಾ ಅವರ ಇಡೀ ಸರ್ಕಾರ, ಉನ್ನತ ಸಚಿವರು, ಪಕ್ಷದ ಪದಾಧಿಕಾರಿಗಳು ಹಾಗೂ ಆಪ್ತ ಸಂಬಂಧಿಕರು ಕೇಂದ್ರ ತನಿಖಾ ಸಂಸ್ಥೆಗಳ ನಿಗಾದಲ್ಲಿದ್ದಾರೆ. ಯಾಕೆಂದರೆ ನ್ಯಾಯಾಲಯಗಳು ಅವರ ವಿರುದ್ಧ ತನಿಖೆಗೆ ಆದೇಶಿಸಿವೆ ಎಂದು ಮಾಳವೀಯ ಹೇಳಿರುವುದಾಗಿ ‘ಎಎನ್‌ಐ’ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಕೇಂದ್ರದ ತನಿಖಾ ಸಂಸ್ಥೆಗಳ ದುರ್ಬಳಕೆ ವಿರುದ್ಧ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಸೋಮವಾರ ನಿಲುವಳಿ ಮಂಡಿಸಿ ಅನುಮೋದನೆ ಪಡೆಯಲಾಗಿತ್ತು.

ನಿಲುವಳಿ ಮಂಡನೆ ಬಳಿಕ ಮಾತನಾಡಿದ್ದ ಮಮತಾ, ಸಿಬಿಐ, ಜಾರಿ ನಿರ್ದೇಶನಾಲಯ (ಇ.ಡಿ) ಸೇರಿದಂತೆ ಕೇಂದ್ರ ತನಿಖಾ ಸಂಸ್ಥೆಗಳ ದುರ್ಬಳಕೆ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರ ಕೈವಾಡ ಇದೆ ಎಂಬುದಾಗಿ ಭಾವಿಸುವುದಿಲ್ಲ. ಬಿಜೆಪಿಯ ಕೆಲವು ನಾಯಕರು ತಮ್ಮ ಹಿತಾಸಕ್ತಿಗಾಗಿ ಕೇಂದ್ರ ಸಂಸ್ಥೆಗಳ ದುರುಪಯೋಗ ಮಾಡುತ್ತಿದ್ದಾರೆ ಎಂದು ಹೇಳಿದ್ದರು. ಇದರ ರಾಜಕೀಯ ಮಹತ್ವ ಏನೆಂದು ಮಮತಾ ಮಾತ್ರ ಹೇಳಬಲ್ಲರು ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಸುಗತ ರಾಯ್ ಹೇಳಿದ್ದರು. ಇದಕ್ಕೆ ಮಾಳವೀಯ ತಿರುಗೇಟು ನೀಡಿದ್ದಾರೆ.

ಬಿಜೆಪಿಯು ನಿಲುವಳಿಯನ್ನು ವಿರೋಧಿಸಿತ್ತು. ಸಿಬಿಐ ಹಾಗೂ ಇ.ಡಿ ವಿರುದ್ಧ ಟಿಎಂಸಿ ಸರ್ಕಾರ ಮಂಡಿಸಿರುವ ನಿಲುವಳಿ ವಿಧಾನಸಭೆಯ ನಿಯಮಗಳು ಮತ್ತು ನಿಬಂಧನೆಗಳಿಗೆ ವಿರುದ್ಧವಾಗಿದೆ ಎಂದು ಪ್ರತಿಪಕ್ಷ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಹೇಳಿದ್ದರು.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT