ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು–ಕಾಶ್ಮೀರ ಕ್ಷೇತ್ರ ಮರುವಿಂಗಡಣೆ ನಂತರ ಚುನಾವಣೆ: ನಾಯಕರಿಗೆ ಪ್ರಧಾನಿ ಭರವಸೆ

Last Updated 24 ಜೂನ್ 2021, 16:12 IST
ಅಕ್ಷರ ಗಾತ್ರ

ನವದೆಹಲಿ: ‘ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಕ್ಷೇತ್ರಗಳ ಮರುವಿಂಗಡಣೆಯ ನಂತರ ಚುನಾವಣೆ ನಡೆಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ’ ಎಂದು ಪೀಪಲ್ಸ್ ಕಾನ್ಫರೆನ್ಸ್ ಮುಖಂಡ ಮುಜಪ್ಫರ್ ಹುಸೇನ್ ಬೇಗ್ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಗುರುವಾರ ನಡೆದ ಜಮ್ಮು ಮತ್ತು ಕಾಶ್ಮೀರದ ಸರ್ವಪಕ್ಷಗಳ ಮುಖಂಡರ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಅವರು ಈ ಮಾಹಿತಿ ನೀಡಿದ್ದಾರೆ.

ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ವಿವಿಧ ರಾಜಕೀಯ ಪಕ್ಷಗಳ 14 ನಾಯಕರು ಭಾಗಿಯಾಗಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಬಾಲ್ ಸಹ ಇದ್ದರು. ಮೂರೂವರೆ ಗಂಟೆ ಸಭೆ ನಡೆಯಿತು.

‘ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನವನ್ನು ಮರಳಿ ನೀಡಬೇಕು ಎಂದು ಗುಪ್ಕಾರ್ ಕೂಟದ ಸದಸ್ಯರೂ ಸೇರಿದಂತೆ ಸಭೆಯಲ್ಲಿ ಭಾಗಿಯಾಗಿದ್ದ ಎಲ್ಲಾ ರಾಜಕೀಯ ಪಕ್ಷಗಳ ನಾಯಕರೂ ಒತ್ತಾಯಿಸಿದರು. ಎಲ್ಲರ ಮಾತನ್ನೂ ಪ್ರಧಾನಿ ಬಹಳ ಗಮನಕೊಟ್ಟು ಕೇಳಿಸಿಕೊಂಡರು’ ಎಂದು ಮಾಹಿತಿ ನೀಡಿದ್ದಾರೆ.

‘ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಜಾಪ್ರಭುತ್ವವನ್ನು ಬಲಪಡಿಸುವುದು ಈ ಸಭೆಯ ಉದ್ದೇಶವಾಗಿತ್ತು. ಇದಕ್ಕಾಗಿ ವಿಧಾನಸಭಾ ಚುನಾವಣೆ ನಡೆಯಬೇಕು. ಅದಕ್ಕೂ ಮುನ್ನ, ವಿಧಾನಸಭಾ ಕ್ಷೇತ್ರಗಳ ಮರುವಿಂಗಡಣೆ ನಡೆಯಬೇಕು. ಇದಕ್ಕೆ ಎಲ್ಲರೂ ಸಹಕಾರ ನೀಡಿ ಎಂದು ಪ್ರಧಾನಿ ಮನವಿ ಮಾಡಿಕೊಂಡರು. 14 ನಾಯಕರೂ ಇದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿದ್ದೇವೆ’ ಎಂದು ಹುಸೇನ್ ಬೇಗ್ ತಿಳಿಸಿದ್ದಾರೆ.

ಚುನಾವಣೆ ನಡೆಸುವುದಕ್ಕೆ ಕೇಂದ್ರ ಸರ್ಕಾರವು ಯಾವುದೇ ಕಾಲಮಿತಿ ಘೋಷಿಸಿಲ್ಲ.

ಜಿಲ್ಲಾಧಿಕಾರಿಗಳ ಸಭೆ: ಕ್ಷೇತ್ರಗಳ ಮರುವಿಂಗಡಣಾ ಆಯೋಗವು ಬುಧವಾರ ಜಮ್ಮು ಮತ್ತು ಕಾಶ್ಮೀರದ ಎಲ್ಲಾ 20 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಿದೆ. ವಿಧಾನಸಭಾ ಕ್ಷೇತ್ರಗಳ ಸಮಗ್ರ ಮಾಹಿತಿ ನೀಡುವಂತೆ ಸೂಚಿಸಿದೆ.

* ಇಲ್ಲಿ ಪರಸ್ಪರ ವಿಶ್ವಾಸ ಕಳೆದುಹೋಗಿದೆ. ಜಮ್ಮು-ಕಾಶ್ಮೀರಕ್ಕೆ ಮರಳಿ ರಾಜ್ಯದ ಸ್ಥಾನಮಾನ ನೀಡುವುದರಿಂದ ವಿಶ್ವಾಸವನ್ನು ಮರುಸ್ಥಾಪಿಸುವ ಕೆಲಸ ಆರಂಭವಾಗಬೇಕು.

-ಫಾರೂಕ್ ಅಬ್ದುಲ್ಲಾ, ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ

* ಕ್ಷೇತ್ರಗಳ ಮರುವಿಂಗಡಣೆ ತ್ವರಿತವಾಗಿ ಆದರೆ, ಚುನಾವಣೆಯೂ ಶೀಘ್ರದಲ್ಲೇ ನಡೆಯಲಿದೆ. ಚುನಾಯಿತ ಸರ್ಕಾರ ಇದ್ದರೆ ಅಭಿವೃದ್ಧಿಗೆ ವೇಗ ದೊರೆಯುತ್ತದೆ.

-ನರೇಂದ್ರ ಮೋದಿ, ಪ್ರಧಾನಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT