ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರು: ಉತ್ತರ ಪ್ರದೇಶ ಸರ್ಕಾರ

ಲಖನೌ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ‘ಮರ್ಯಾದಾ ಪುರುಷೋತ್ತಮ ಶ್ರೀ ರಾಮಚಂದ್ರ ವಿಮಾನ ನಿಲ್ದಾಣ’ ಎಂಬುದಾಗಿ ನಾಮಕರಣ ಮಾಡಲಾಗುವುದು ಎಂದು ಉತ್ತರ ಪ್ರದೇಶ ಸರ್ಕಾರ ತಿಳಿಸಿದೆ.
ರಾಜ್ಯ ಸರ್ಕಾರವು ಸೋಮವಾರ ಮಂಡಿಸಿರುವ ಬಜೆಟ್‌ನಲ್ಲಿ ಈ ಕುರಿತು ಉಲ್ಲೇಖಿಸಲಾಗಿದ್ದು, ವಿಮಾನ ನಿಲ್ದಾಣಕ್ಕಾಗಿ ₹101 ಕೋಟಿ ಮೀಸಲಿಡಲಾಗಿದೆ. ಅಯೋಧ್ಯೆಯಲ್ಲಿ ವಿಮಾನ ನಿಲ್ದಾಣ ನಿರ್ಮಿಸಿ ಮುಂದೆ ಅದನ್ನು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಿ ಮಾಡಲಾಗುವುದು. ಜತೆಗೆ, ಜೆವರ್ ವಿಮಾನ ನಿಲ್ದಾಣದಲ್ಲಿ ರನ್‌ವೇಗಳನ್ನು ಹೆಚ್ಚಿಸಲು ಉದ್ದೇಶಿಸಲಾಗಿದ್ದು, ₹2,000 ಕೋಟಿ ಒದಗಿಸಲಾಗುವುದು ಎಂದು ಹಣಕಾಸು ಸಚಿವ ಸುರೇಶ್ ಖನ್ನಾ ಅವರು ಬಜೆಟ್‌ನಲ್ಲಿ ತಿಳಿಸಿದ್ದಾರೆ.
ಓದಿ: ಉತ್ತರ ಪ್ರದೇಶ: ₹5.50 ಲಕ್ಷ ಕೋಟಿ ಮೊತ್ತದ ಬಜೆಟ್ ಮಂಡನೆ
ಬಜೆಟ್ ಮಂಡನೆಯ ಬಳಿಕ ಪತ್ರಕರ್ತರ ಜತೆ ಮಾತನಾಡಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ‘ಅಲಿಗಡ, ಮೊರಾದಾಬಾದ್, ಮೀರತ್ ನಗರಗಳಿಗೂ ಶೀಘ್ರದಲ್ಲೇ ವಿಮಾನ ಯಾನ ಸೇವೆ ಒದಗಿಸಲಾಗುವುದು’ ಎಂದು ಹೇಳಿದ್ದಾರೆ.
ಪೂರ್ವಾಂಚಲದ ವಿಶೇಷ ಯೋಜನೆಗಳಿಗೆ ₹300 ಕೋಟಿ ಹಾಗೂ ಬುಂದೇಲ್‌ಖಂಡದ ವಿಶೇಷ ಯೋಜನೆಗಳಿಗೆ ₹210 ಕೋಟಿಯನ್ನು ವಿಶೇಷ ಪ್ರದೇಶ ಕಾರ್ಯಕ್ರಮದಡಿ ಪ್ರಸ್ತಾವಿಸಲಾಗಿದೆ ಎಂದು ಬಜೆಟ್‌ನಲ್ಲಿ ತಿಳಿಸಲಾಗಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.