ಸೋಮವಾರ, ಸೆಪ್ಟೆಂಬರ್ 21, 2020
22 °C

ಬಿಹಾರ, ಮಹಾರಾಷ್ಟ್ರದಲ್ಲಿ ಪ್ರವಾಹ ಪರಿಸ್ಥಿತಿ: ಎನ್‌ಡಿಆರ್‌ಎಫ್‌ ತಂಡಗಳ ನಿಯೋಜನೆ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

prajavani

ನವದೆಹಲಿ: ಬಿಹಾರ ಮತ್ತು ಮುಂಬೈನಲ್ಲಿ ಭಾರಿ ಮಳೆಯಾಗುತ್ತಿದ್ದು, ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ನಿರಂತರವಾಗಿ ಮಳೆಯು ಜಾಸ್ತಿಯಾಗುತ್ತಲೇ ಇರುವುದರಿಂದಾಗಿ ಪರಿಸ್ಥಿತಿಯನ್ನು ನಿಭಾಯಿಸಲು ಎರಡೂ ಕಡೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) ತಂಡಗಳನ್ನು ನಿಯೋಜಿಸಲಾಗಿದೆ.

ಬಿಹಾರದ ಅನೇಕ ಜಿಲ್ಲೆಗಳಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ಎಸ್‌ಡಿಆರ್‌ಎಫ್ ಸೇರಿದಂತೆ 30 ಕ್ಕೂ ಹೆಚ್ಚು ತಂಡಗಳನ್ನು ನಿಯೋಜಿಸಲಾಗಿದೆ ಎಂದು ರಾಜ್ಯ ಸರ್ಕಾರದ ವಿಪತ್ತು ನಿರ್ವಹಣಾ ವಿಭಾಗ ತಿಳಿಸಿದೆ.

ಇಲಾಖೆ ಬುಧವಾರ ಬಿಡುಗಡೆ ಮಾಡಿದ ಅಂಕಿ ಅಂಶಗಳ ಪ್ರಕಾರ, ರಾಜ್ಯದ 16 ಜಿಲ್ಲೆಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಪ್ರವಾಹದಿಂದಾಗಿ 19 ಜನರು ಪ್ರಾಣ ಕಳೆದುಕೊಂಡಿದ್ದು, 66,60,655 ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬುಧವಾರದವರೆಗೆ ಒಟ್ಟು 12,202 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ಮಹಾರಾಷ್ಟ್ರದಲ್ಲೂ ಎನ್‌ಡಿಆರ್‌ಎಫ್ 16 ತಂಡ ನಿಯೋಜನೆ

ಇನ್ನೊಂದೆಡೆ ಮಹಾರಾಷ್ಟ್ರದಲ್ಲೂ ಭಾರಿ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ಮುನ್ನೆಚ್ಚರಿಕಾ ಕ್ರಮವಾಗಿ 16 ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯನ್ನು ನಿಯೋಜಿಸಲಾಗಿದೆ ಎಂದು ಎನ್‌ಡಿಆರ್‌ಎಫ್ ತಿಳಿಸಿದೆ.

ಇವುಗಳಲ್ಲಿ ಐದು ಮುಂಬೈನಲ್ಲಿ, ನಾಲ್ಕು ಕೊಲ್ಹಾಪುರ, ಎರಡು ಸಾಂಗ್ಲಿ ಮತ್ತು ಸತಾರ, ಥಾಣೆ, ಪಲ್ಘಾರ್, ನಾಗಪುರ ಮತ್ತು ರಾಯ್‌ಗಢದಲ್ಲಿ ತಲಾ ಒಂದೊಂದು ತಂಡವನ್ನು ನಿಯೋಜಿಸಲಾಗಿದೆ. ಈಮಧ್ಯೆ, ನಿರಂತರ ಮಳೆಯಿಂದಾಗಿ ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ಜಲಾವೃತ ಮತ್ತು ಪ್ರವಾಹ ಪರಿಸ್ಥಿತಿ ಎದುರಿಸುತ್ತಿವೆ.

ಭಾರತ ಹವಾಮಾನ ಇಲಾಖೆ (ಐಎಂಡಿ) ಗುರುವಾರ ನೀಡಿರುವ ಮಾಹಿತಿ ಪ್ರಕಾರ, ಥಾಣೆಯಲ್ಲಿ 'ಸಾಮಾನ್ಯವಾಗಿ ಭಾರಿ ಮಳೆಯೊಂದಿಗೆ ಮೋಡ ಕವಿದ ವಾತಾವರಣ' ಇರಲಿದೆ ಎಂದು ಮುನ್ಸೂಚನೆ ನೀಡಿದೆ. ಮುಂದಿನ ಮೂರು ಗಂಟೆಗಳಲ್ಲಿ ಮುಂಬೈನಲ್ಲಿ ತೀವ್ರ ಮಳೆಯಾಗುವ ನಿರೀಕ್ಷೆಯಿದೆ ಎಂದಿದೆ.

ಭಾರಿ ಮಳೆಯಿಂದಾಗಿ ಮುಂಬೈ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಅಗತ್ಯವಿರುವ ಎಲ್ಲ ರೀತಿಯ ನೆರವು ನೀಡುವುದಾಗಿ  ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಭರವಸೆ ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು