ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಬಿಡುಗಡೆ? 

Last Updated 10 ನವೆಂಬರ್ 2022, 4:31 IST
ಅಕ್ಷರ ಗಾತ್ರ

ನವದೆಹಲಿ: ಗುಜರಾತ್ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯ ಸಭೆ ಬುಧವಾರ ನವದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆಯಿತು.

ಚುನಾವಣೆಯಲ್ಲಿ ಸ್ಪರ್ಧಿಸುವ ಪಕ್ಷದ 182 ಅಭ್ಯರ್ಥಿಗಳ ಹೆಸರನ್ನು ಸಿಇಸಿ ಚರ್ಚಿಸಿ ನಿರ್ಧರಿಸಿದೆ. ಮೂಲಗಳ ಪ್ರಕಾರ, ಅಭ್ಯರ್ಥಿಗಳ ಮೊದಲ ಪಟ್ಟಿಗುರುವಾರ ಬಿಡುಗಡೆಯಾಗುವ ಸಾಧ್ಯತೆಯಿದೆ.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಗುಜರಾತ್ ಬಿಜೆಪಿ ಮುಖ್ಯಸ್ಥ ಸಿ.ಆರ್.ಪಾಟೀಲ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಕೇಂದ್ರ ಸಚಿವ ಭೂಪೇಂದರ್ ಯಾದವ್ ಮತ್ತು ಕರ್ನಾಟಕದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವರು ಇದ್ದರು.

ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತು ಮಾಜಿ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಸೇರಿದಂತೆ ಹಲವಾರು ನಾಯಕರು ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಬಿಜೆಪಿಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಯುವ ನಾಯಕರಿಗೆ ಆದ್ಯತೆ ಸಿಗುವ ಸಾಧ್ಯತೆಗಳಿವೆ.ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಹೆಚ್ಚಿನ ಯುವಕರಿಗೆ ಸ್ಥಾನ ಸಿಗಬಹುದು ಎಂಬ ನಿರೀಕ್ಷೆ ಇದೆ.

ಇದಲ್ಲದೇ, ಹಲವು ಹಿರಿಯ ನಾಯಕರಿಗೆ ಟಿಕೆಟ್ ನೀಡದಿರಲು ಮತ್ತು ಯುವ ನಾಯಕರಿಗೆ ಆದ್ಯತೆ ನೀಡಲು ಬುಧವಾರ ನಡೆದ ಮ್ಯಾರಥಾನ್ ಸಭೆಗಳಲ್ಲಿ ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಚುನಾವಣಾ ಸಮಿತಿಯ ಸಭೆಯ ನಂತರ ಗೃಹ ಸಚಿವ ಅಮಿತ್‌ ಶಾ ಅವರು ಗುಜರಾತ್ ಮುಖ್ಯಮಂತ್ರಿ ಮತ್ತು ಗುಜರಾತ್ ಬಿಜೆಪಿ ಮುಖ್ಯಸ್ಥರೊಂದಿಗೆ ಪ್ರತ್ಯೇಕ ಸಭೆ ನಡೆಸಿದರು.

ಡಿ. 1ರಂದು ಮೊದಲ ಹಂತದ ಮತದಾನ ನಡೆಯಲಿರುವ 89 ಕ್ಷೇತ್ರಗಳೂ ಸೇರಿದಂತೆ 100 ಕ್ಷೇತ್ರಗಳ ಅಭ್ಯರ್ಥಿಗಳನ್ನು ಇಂದು ಘೋಷಿಸಲಾಗುತ್ತದೆ ಎಂದು ಬಿಜೆಪಿಯ ಮೂಲಗಳು ತಿಳಿಸಿವೆ.

ರಾಜ್ಯದ 89 ವಿಧಾನಸಭಾ ಸ್ಥಾನಗಳಿಗೆ ಡಿಸೆಂಬರ್ 1 ರಂದು ಮತ್ತು 93 ಸ್ಥಾನಗಳಿಗೆ ಡಿಸೆಂಬರ್ 5 ರಂದು ಮತದಾನ ನಡೆಯಲಿದೆ. ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ನವೆಂಬರ್ 14 ಕೊನೆ ದಿನವಾಗಿರಲಿದೆ. ಡಿಸೆಂಬರ್ 5ರಂದು ಮತದಾನ ನಡೆಯಲಿರುವ 93 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ನ. 17 ಕೊನೆ ದಿನವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT