ಗುರುವಾರ , ಜೂನ್ 30, 2022
25 °C

ಪಕ್ಷ ಸಂಘಟನೆ ಬಗ್ಗೆ ಚರ್ಚೆ: ನಡ್ಡಾ ಭೇಟಿ ಮಾಡಿದ ವಿಜಯೇಂದ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಮೂರು ದಿನಗಳಿಂದ ದೆಹಲಿಯಲ್ಲೇ ಬೀಡು ಬಿಟ್ಟಿರುವ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಗುರುವಾರ ಸಂಜೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.

ರಾಜ್ಯದಲ್ಲಿನ ಕೋವಿಡ್‌–19 ಸ್ಥಿತಿಗತಿ ಹಾಗೂ ಪಕ್ಷ ಸಂಘಟನೆ ಕುರಿತು ನಡ್ಡಾ ಅವರೊಂದಿಗೆ ಚರ್ಚಿಸಲಾಯಿತು ಎಂದು ಅವರು ಟ್ವೀಟ್‌ ಮಾಡಿದ್ದಾರೆ.

‘ಕೋವಿಡ್‌–19ರಿಂದ ಪೀಡಿತರಾದ ಜನರ ದುಃಖ– ದುಮ್ಮಾನಗಳಿಗೆ ಪಕ್ಷದ ಕಾರ್ಯಕರ್ತರು ಸ್ಪಂದಿಸಬೇಕಾದ ಅಗತ್ಯದ ಕುರಿತು ನಡ್ಡಾ ಸಲಹೆ, ಮಾರ್ಗದರ್ಶನ ನೀಡಿದ್ದಾರೆ. ಈ ಭೇಟಿಯು ನನ್ನಲ್ಲಿ ಇನ್ನಷ್ಟು ಉತ್ಸಾಹ ಹಾಗೂ ಆತ್ಮವಿಶ್ವಾಸ ಹೆಚ್ಚಿಸಿದೆ’ ಎಂದು ಅವರು ತಿಳಿಸಿದ್ದಾರೆ.

ಉಭಯ ಮುಖಂಡರು ಅರ್ಧ ಗಂಟೆ ಮಾತುಕತೆ ನಡೆಸಿದ್ದಾರೆ. ನಾಯಕತ್ವ ಬದಲಾವಣೆಗೆ ಆಗ್ರಹಿಸುತ್ತ, ಭಿನ್ನಮತೀಯ ಚಟುವಟಿಕೆಯಲ್ಲಿ ಪಾಲ್ಗೊಂಡಿರುವ ಸಚಿವರು, ಶಾಸಕರ ವಿರುದ್ಧ ಶಿಸ್ತು ಕ್ರಮ ಕೈಗೊಂಡು ಗೊಂದಲ ನಿವಾರಿಸಬೇಕು ಎಂದು ವಿಜಯೇಂದ್ರ ಮನವಿ ಸಲ್ಲಿಸಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳು ಹೇಳಿವೆ.

‘ನಮ್ಮ ಕುಟುಂಬ ಸದಸ್ಯರ ವಿರುದ್ಧ ಮಾಡಲಾದ ಭ್ರಷ್ಟಾಚಾರದ ಆರೋಪಗಳಿಗೆ ಪೂರಕ ಸಾಕ್ಷಾಧಾರಗಳಿಲ್ಲ. ಅಂಥ ಆಧಾರ ರಹಿತ ಆರೋಪಗಳನ್ನು ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಕೋರಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳವಾರ ಹಾಗೂ ಬುಧವಾರ ಪಕ್ಷದ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಅವರನ್ನು ಭೇಟಿ ಮಾಡಿದ್ದ ವಿಜಯೇಂದ್ರ ರಹಸ್ಯ ಮಾತುಕತೆ ನಡೆಸಿದ್ದರು. ರಾಜ್ಯ ಸಚಿವ ಸಂಪುಟದ ಪುನರ್ ರಚನೆ ಹಾಗೂ ಪಕ್ಷದ ರಾಜ್ಯ ಘಟಕದ ಪುನಶ್ಚೇತನದ ಬಗ್ಗೆ ಈ ವೇಳೆ ಚರ್ಚಿಸಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು