ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'5 ಲಕ್ಷ ಉದ್ಯೋಗ, ಸಿಎಎಗೆ ನಿರ್ಬಂಧ': ಅಸ್ಸಾಂ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆ

Last Updated 20 ಮಾರ್ಚ್ 2021, 14:57 IST
ಅಕ್ಷರ ಗಾತ್ರ

ಗುವಾಹಟಿ: ಅಸ್ಸಾಂ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಪ್ರಣಾಳಿಕೆಯನ್ನು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಶನಿವಾರ ಬಿಡುಗಡೆ ಮಾಡಿದ್ದಾರೆ.

ಕಳೆದ ವರ್ಷ ಅಸ್ಸಾಂ ಸೇರಿದಂತೆ ದೇಶದಾದ್ಯಂತ ಭಾರಿ ಪ್ರತಿಭಟನೆಗೆ ಕಾರಣವಾಗಿದ್ದ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ನಿರ್ಬಂಧಿಸುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ತಿಳಿಸಿದೆ.

ರಾಜ್ಯದ ಪ್ರತಿ ಗೃಹಿಣಿಗೆ ತಿಂಗಳಿಗೆ ₹ 2,000 ನೀಡುವುದು, ಐದು ಲಕ್ಷ ಸರ್ಕಾರಿ ಉದ್ಯೋಗಗಳನ್ನು ಸೃಷ್ಟಿಸುವುದು ಮತ್ತು 200 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ.

ಗುವಾಹಟಿಯಲ್ಲಿರುವ ಪಕ್ಷದ ಕಚೇರಿಯಲ್ಲಿ ಪ್ರಣಾಳಿಕೆ ಬಿಡುಗಡೆಗೊಳಿಸಿದ ನಂತರ ಮಾತನಾಡಿರುವ ರಾಹುಲ್‌ ಗಾಂಧಿ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

'ಅಸ್ಸಾಂನ ಭಾಷೆ, ಸಂಸ್ಕೃತಿ, ಸಹೋದರತ್ವ ಮತ್ತು ಇತಿಹಾಸದ ಮೇಲೆ ಬಿಜೆಪಿ ಮತ್ತು ಆರ್‌ಎಸ್‌ಎಸ್ ದಾಳಿ ನಡೆಸುತ್ತಿವೆ. ಅಸ್ಸಾಂ ಮಾತ್ರವಲ್ಲ ದೇಶದ ಪ್ರತಿಯೊಂದು ರಾಜ್ಯದಲ್ಲೂ ಅವರು ದಾಳಿ ನಡೆಸುತ್ತಿದ್ದಾರೆ' ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಕಾಂಗ್ರೆಸ್ ಪಕ್ಷವು ಅಸ್ಸಾಂನ ಸಂಸ್ಕೃತಿ, ಭಾಷೆ ಮತ್ತು ಇತಿಹಾಸವನ್ನು ರಕ್ಷಿಸಲು ಬದ್ಧವಿದೆ ಎಂದು ಅವರು ಇದೇ ವೇಳೆ ಹೇಳಿದ್ದಾರೆ.

'ನೋಟು ಅಮಾನ್ಯ ಮತ್ತು ಜಿಎಸ್‌ಟಿ ಅನುಷ್ಠಾನದ ನಂತರ ಭಾರತದಲ್ಲಿ ಸಣ್ಣ ಮತ್ತು ಮಧ್ಯಮ ಗಾತ್ರದ ವ್ಯಾಪಾರ-ವಹಿವಾಟುಗಳು ನಾಶವಾಗಿವೆ' ಎಂದು ರಾಹುಲ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

'ಬಿಜೆಪಿ ಮತ್ತು ಆರ್‌ಎಸ್‌ಎಸ್‌ನವರು ಇಡೀ ರಾಜ್ಯವನ್ನು ಹೊರಗಿನವರಿಗೆ ನೀಡುತ್ತಿದ್ದಾರೆ. ಅವರು ಗುವಾಹಟಿ ವಿಮಾನ ನಿಲ್ದಾಣವನ್ನು ಅದಾನಿಗೆ ನೀಡಿದ್ದಾರೆ' ಎಂದು ಹರಿಹಾಯ್ದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT