ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೂಪುರ್ ಅಮಾನತು: ಭಾರತೀಯ ಉತ್ಪನ್ನ ಬಹಿಷ್ಕಾರದ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಕ್ರಮ?

ಪ್ರವಾದಿ ಮೊಹಮ್ಮದ್ ಕುರಿತು ಹೇಳಿಕೆ–ಬಿಜೆಪಿಯಿಂದ ಶಿಸ್ತಿನ ಕ್ರಮ
Last Updated 5 ಜೂನ್ 2022, 15:33 IST
ಅಕ್ಷರ ಗಾತ್ರ

ನವದೆಹಲಿ: ಖಾಸಗಿ ಸುದ್ದಿ ಚಾನೆಲ್‌ನ ಚರ್ಚೆಯೊಂದರಲ್ಲಿ ಪ್ರವಾದಿ ಮೊಹಮ್ಮದ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಪಕ್ಷದ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬಿಜೆಪಿ ಅಮಾನತುಗೊಳಿಸಿ, ಎಲ್ಲ ಜವಾಬ್ದಾರಿಗಳಿಂದ ಮುಕ್ತಗೊಳಿಸಿದೆ.

ದೆಹಲಿ ಘಟಕದ ಮಾಧ್ಯಮ ವಿಭಾಗದ ನೇತೃತ್ವ ವಹಿಸಿದ್ದ ನವೀನ್ ಕುಮಾರ್ ಜಿಂದಾಲ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಅವರು ವ್ಯಕ್ತಪಡಿಸಿರುವ ಅಭಿಪ್ರಾಯಗಳು ಕೋಮು ಸೌಹಾರ್ದಕ್ಕೆ ಧಕ್ಕೆ ತರುವುದಲ್ಲದೆ, ಪಕ್ಷದ ಸಂವಿಧಾನಕ್ಕೂ ವಿರುದ್ಧವಾಗಿದೆ ಎಂದು ಬಿಜೆಪಿ ಹೇಳಿದೆ.

'ಶರ್ಮಾ ಅವರು ವಿವಿಧ ವಿಷಯಗಳ ಬಗ್ಗೆ ಪಕ್ಷದ ನಿಲುವಿಗೆ ವಿರುದ್ಧವಾದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ, ಇದು ಪಕ್ಷದ ಸಂವಿಧಾನದ ಸ್ಪಷ್ಟ ಉಲ್ಲಂಘನೆಯಾಗಿದೆ’ ಎಂದು ಪಕ್ಷದ ಶಿಸ್ತು ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಇದಕ್ಕೂ ಮುನ್ನ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್‌ ಸಿಂಗ್‌ ಪ್ರಕಟಣೆ ಬಿಡುಗಡೆ ಮಾಡಿ, ‘ಪಕ್ಷವು ಎಲ್ಲಾ ಧರ್ಮಗಳನ್ನು ಗೌರವಿಸುತ್ತದೆ. ಯಾವುದೇ ಧರ್ಮ, ವ್ಯಕ್ತಿ ಅವಮಾನಿಸುವುದನ್ನು ಬಲವಾಗಿ ಖಂಡಿಸುತ್ತದೆ.ಯಾವುದೇ ಧರ್ಮವನ್ನು ಅವಹೇಳನ ಮಾಡುವ ಅಥವಾ ಕೀಳಾಗಿ ಕಾಣುವ ಸಿದ್ಧಾಂತಗಳಿಗೆ ಪ್ರಕ್ಷದ ವಿರೋಧವಿದೆ. ಬಿಜೆಪಿ ಅಂಥ ವ್ಯಕ್ತಿಗಳನ್ನು ಅಥವಾ ಚಿಂತನೆಗಳನ್ನು ಪ್ರಚುರಪಡಿಸುವುದಿಲ್ಲ’ ಎಂದು ತಿಳಿಸಿದ್ದರು.

ಶರ್ಮಾ ಮತ್ತು ನವೀನ್ ಅವರ ಹೇಳಿಕೆಗಳ ಬಳಿಕ, ಕೆಲ ದೇಶಗಳಲ್ಲಿ ಭಾರತೀಯ ಉತ್ಪನ್ನಗಳನ್ನು ಬಹಿಷ್ಕರಿಸಲು ಕರೆ ನೀಡಿ, ಟ್ವಿಟರ್ ಅಭಿಯಾನ ನಡೆದಿದೆ. ಈ ಕಾರಣಕ್ಕಾಗಿಯೇ ಬಿಜೆಪಿ ಈ ಕ್ರಮ ಕೈಗೊಂಡಿದೆ ಎಂದು ಹೇಳಲಾಗಿದೆ.

ಪ್ರವಾದಿ ಮೊಹಮ್ಮದ್ ಅವರನ್ನು ಅವಮಾನಿಸಿದ ಆರೋಪದ ಮೇಲೆ ಉತ್ತರಪ್ರದೇಶದ ಕಾನ್ಪುರದಲ್ಲಿ ಉದ್ರಿಕ್ತ ಜನರ ಗುಂಪು ಬಲವಂತವಾಗಿ ಅಂಗಡಿಗಳನ್ನು ಬಂದ್‌ ಮಾಡಿಸಲು ಯತ್ನಿಸಿದಾಗ ಹಿಂಸಾಚಾರ ಭುಗಿಲೆದ್ದು, ಎರಡು ಗುಂಪುಗಳು ಪರಸ್ಪರ ಬಾಂಬ್‌ ಎಸೆದು, ಕಲ್ಲು ತೂರಾಟ ನಡೆಸಿದ್ದರು. ಘಟನೆಯಲ್ಲಿ ಹತ್ತಾರು ಮಂದಿ ಗಾಯಗೊಂಡಿದ್ದರು.

ಬಿಜೆಪಿ ಹೇಳಿಕೆ ಹೊರ ಬಿದ್ದ ಬೆನ್ನಲ್ಲೆಶ್ರೀನಗರದಲ್ಲಿ ಮಾತನಾಡಿರುವ ನ್ಯಾಷನಲ್‌ ಕಾನ್ಫರೆನ್ಸ್ ಉಪಾಧ್ಯಕ್ಷ ಒಮರ್ ಅಬ್ದುಲಾ, ದೇಶದಲ್ಲಿರುವ ಮುಸ್ಲಿಮರ ಭಾವನೆಗಳಿಗೆ ಧಕ್ಕೆಯಾದ ಕಾರಣಕ್ಕೆ ಬಿಜೆಪಿ ಈ ರೀತಿ ಹೇಳಿಕೆ ನೀಡಿಲ್ಲ. ಬದಲಿಗೆ ಅಂತರರಾಷ್ಟ್ರೀಯ ಒತ್ತಡಕ್ಕೆ ಮಣಿದು, ದಿಢೀರ್ ಎಚ್ಚೆತ್ತುಕೊಂಡು ಈ ಹೇಳಿಕೆ ನೀಡಿದೆ ಎಂದು ಟೀಕಿಸಿದ್ದಾರೆ.

'ನೂಪುರ್ ಶರ್ಮಾ ಮತ್ತು ನವೀನ್ ಕುಮಾರ್ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ಪಕ್ಷ ತನ್ನ ನಿಜವಾದ ಮುಖವನ್ನು ತೋರಿಸಿದೆ.ಸಬ್‌ಕಾ ಸಾಥ್‌, ಸಬ್‌ಕಾ ವಿಕಾಸ್‌ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಮಂತ್ರವನ್ನು ಉಲ್ಲಂಘಿಸಲು ಯಾರಿಗೂ ಬಿಡುವುದಿಲ್ಲ'ಎಂದು ಬಿಜೆಪಿ ಅಲ್ಪಸಂಖ್ಯಾತ ಘಟಕದ ಮುಖ್ಯಸ್ಥ ಜಮಾಲ್‌ ಸಿದ್ಧಿಖಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT