ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಕಾಯ್ದೆ ಹಿಂದಕ್ಕೆ: ಮಸೂದೆಗೆ ಬುಧವಾರ ಒಪ್ಪಿಗೆ?

29ರಿಂದ ಶುರುವಾಗುವ ಚಳಿಗಾಲದ ಅಧಿವೇಶನದಲ್ಲಿ ಮಂಡನೆ ಸಾಧ್ಯತೆ
Last Updated 21 ನವೆಂಬರ್ 2021, 20:06 IST
ಅಕ್ಷರ ಗಾತ್ರ

ನವದೆಹಲಿ: ಮೂರು ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯುವ ಮಸೂದೆಗೆ ಕೇಂದ್ರ ಸಚಿವ ಸಂಪುಟವು ಬುಧವಾರ ಒಪ್ಪಿಗೆ ನೀಡುವ ಸಾಧ್ಯತೆ ಇದೆ. ಮೂರೂ ಕಾಯ್ದೆಗಳನ್ನು ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಹಿಂದಕ್ಕೆ ಪಡೆಯಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಸುದ್ದಿವಾಹಿನಿಯಲ್ಲಿ ಪ್ರಸಾರವಾದ ಭಾಷಣದಲ್ಲಿ ಘೋಷಿಸಿದ್ದರು.

ಕೃಷಿ ಉತ್ಪನ್ನಗಳ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ನೆರವು) ಕಾಯ್ದೆ, ದರ ಭರವಸೆ ಮತ್ತು ಕೃಷಿ ಸೇವೆಗಳಿಗೆ ರೈತರ (ಸಬಲೀಕರಣ ಮತ್ತು ರಕ್ಷಣೆ) ಒಪ್ಪಿಗೆ ಕಾಯ್ದೆ ಮತ್ತು ಅಗತ್ಯ ವಸ್ತುಗಳ (ತಿದ್ದುಪಡಿ) ಕಾಯ್ದೆಗಳನ್ನು ಹಿಂದಕ್ಕೆ ಪಡೆಯಲು ಅಗತ್ಯವಾದ ಮಸೂದೆಗಳನ್ನು ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲಾಗುವುದು. ಅಧಿವೇಶನವು ಇದೇ 29ರಂದು ಆರಂಭ ಆಗಲಿದೆ.

ಮೂರೂ ಕಾಯ್ದೆಗಳನ್ನು ರದ್ದುಪಡಿಸಬೇಕು ಮತ್ತು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಕಾನೂನುಬದ್ಧ ಖಾತರಿ ನೀಡಬೇಕು ಎಂದು ಒತ್ತಾಯಿಸಿ ರೈತರು ದೆಹಲಿಯಲ್ಲಿ ಸುಮಾರು ಒಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಯ್ದೆಗಳನ್ನು ಹಿಂದಕ್ಕೆ ಪಡೆಯುವುದು ಸಾಧ್ಯವಿಲ್ಲ ಎಂದು ಸರ್ಕಾರ ಪಟ್ಟು ಹಿಡಿದಿತ್ತು.

ರೈತ ಮಹಾಪಂಚಾಯಿತಿ ಇಂದು

ರೈತರ ಪ್ರಮುಖ ಬೇಡಿಕೆಗಳ ಬಗೆಗಿನ ಚರ್ಚೆಗಾಗಿ, ಲಖನೌದಲ್ಲಿ ಸೋಮವಾರ ರೈತರ ಮಹಾಪಂಚಾಯಿತಿ ನಡೆಯಲಿದೆ. ಕನಿಷ್ಠ ಬೆಂಬಲ ಬೆಲೆ ಖಾತರಿ, ವರ್ಷವಿಡೀ ನಡೆದ ರೈತ ಪ್ರತಿಭಟನೆಯಲ್ಲಿ ಮೃತಪಟ್ಟ ರೈತರ ಕುಟುಂಬದವರಿಗೆ ಪರಿಹಾರ, ರೈತರ ವಿರುದ್ಧದ ಪ್ರಕರಣಗಳನ್ನು ಹಿಂದೆಗೆದುಕೊಳ್ಳಲು ಆಗ್ರಹಿಸುವ ಪ್ರಮುಖ ವಿಷಯಗಳು ಚರ್ಚೆಗೆ ಬರಲಿವೆ.

27ರಂದು ರೈತರ ಸಭೆ

ಮುಂದಿನ ಹೋರಾಟದ ರೂಪುರೇಷೆ ಕುರಿತು ಇದೇ 27ರಂದು ಮತ್ತೊಂದು ಸುತ್ತಿನ ಸಭೆ ನಡೆಸಿ ನಿರ್ಧಾರ ತೆಗೆದುಕೊಳ್ಳಲು ರೈತ ಸಂಘಟನೆಗಳು ನಿರ್ಧರಿಸಿವೆ. 29ರಂದು ಆರಂಭವಾಗಲಿರುವ ಸಂಸತ್‌ ಅಧಿವೇಶನದಲ್ಲಿ ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ವಾಪಸ್ ಪಡೆಯುವ ನಿರೀಕ್ಷೆಯಿದ್ದು, ಇದಕ್ಕೂ ಮುನ್ನ ಈ ಸಭೆ ಜರುಗಲಿದೆ.

ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಸೇರಿದಂತೆ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರಧಾನಿಗೆ ಬಹಿರಂಗ ಪತ್ರ ಬರೆಯಲು ಭಾನುವಾರದ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ರೈತ ಮುಖಂಡ ಬಲ್ಬೀರ್ ಸಿಂಗ್ ರಾಜೇವಾಲ್ ತಿಳಿಸಿದ್ದಾರೆ. ಪೂರ್ವ ನಿಗದಿಯಂತೆ, 29ರಂದು ಸಂಸತ್‌ಗೆ ಟ್ರ್ಯಾಕ್ಟರ್‌ ಜಾಥಾ ನಡೆಯಲಿದೆ.

‘ಪಿಎಂ ಕೇರ್ಸ್‌ನಿಂದ ಪರಿಹಾರ ನೀಡಿ’

ಕೃಷಿ ಕಾಯ್ದೆಗಳ ವಿರುದ್ಧ ಹೋರಾಡುವ ವೇಳೆ ಮೃತಪಟ್ಟ ರೈತರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಶಿವಸೇನಾ ಸಂಸದ ಸಂಜಯ್ ರಾವುತ್‌ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಕೇಂದ್ರ ಸರ್ಕಾರಕ್ಕೆ ಈಗ ತನ್ನ ತಪ್ಪಿನ ಅರಿವಾಗಿದ್ದು, ಕೃಷಿ ಕಾಯ್ದೆಗಳನ್ನು ಹಿಂಪಡೆದಿದೆ. ಹೋರಾಟದಲ್ಲಿ ಪ್ರಾಣ ಕಳೆದುಕೊಂಡ ರೈತರ ಕುಟುಂಬಗಳಿಗೆ ಪರಿಹಾರ ನೀಡಬೇಕು ಎಂಬ ಒತ್ತಾಯ ದೇಶದ ಹಲವು ಭಾಗಗಳಿಂದ ಕೇಳಿ ಬರುತ್ತಿದೆ. ಪಿಎಂ ಕೇರ್ಸ್‌ನಲ್ಲಿ ಲೆಕ್ಕ ಕೊಡದ ಹಣವಿದೆ. ಅದರಲ್ಲೇ ಪರಿಹಾರ ನೀಡಿ. ರೈತರಲ್ಲಿ ಕೇವಲ ಕ್ಷಮೆ ಕೇಳಿದರೆ ಸಾಲುವುದಿಲ್ಲ. ಅವರ ಕುಟುಂಬಗಳಿಗೆ ನೆರವು ನೀಡುವುದು ಮುಖ್ಯವಾಗಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT