ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಳ ಚುನಾವಣೋತ್ತರ ಹಿಂಸೆ: ಸಿಬಿಐ ತನಿಖೆಗೆ ಆದೇಶ

Last Updated 19 ಆಗಸ್ಟ್ 2021, 21:45 IST
ಅಕ್ಷರ ಗಾತ್ರ

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಂತರ ನಡೆದ ಕೊಲೆಗಳು ಮತ್ತು ಅತ್ಯಾಚಾರ ಪ್ರಕರಣಗಳ ಕುರಿತು ಸಿಬಿಐ ತನಿಖೆಗೆ ಕಲ್ಕತ್ತಾ ಹೈಕೋರ್ಟ್ ಗುರುವಾರ ಆದೇಶಿಸಿದೆ.

ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದ ಇತರ ಪ್ರಕರಣಗಳ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲುಹೈಕೋರ್ಟ್‌ನ ಐವರು ನ್ಯಾಯಮೂರ್ತಿಗಳ ಪೀಠ ಆದೇಶಿಸಿದೆ.ನ್ಯಾಯಾಲಯವು ತನಿಖೆಯ ಮೇಲ್ವಿಚಾರಣೆ ಮಾಡುತ್ತದೆ ಎಂದು ಪೀಠವು ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ.

ಚುನಾವಣೋತ್ತರ ಹಿಂಸಾಚಾರ ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರಚಿಸಿದ್ದ ಸಮಿತಿ ಈ ಹಿಂದೆಶಿಫಾರಸು ಮಾಡಿತ್ತು.

‘ಕೊಲೆ ಮತ್ತು ಅತ್ಯಾಚಾರ ಅಥವಾ ಅತ್ಯಾಚಾರಕ್ಕೆ ಯತ್ನ ಮೊದಲಾದ ಮಹಿಳೆಯರ ವಿರುದ್ಧದ ಅಪರಾಧಗಳ ಕುರಿತ ಎಲ್ಲಾ ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸುವಂತೆ ಶಿಫಾರಸು ಮಾಡಲಾಗಿದೆ’ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಸಮಿತಿಗಳು, ಎನ್‌ಎಚ್‌ಆರ್‌ಸಿ, ಯಾವುದೇ ಇತರ ಆಯೋಗಗಳು, ಪ್ರಾಧಿಕಾರ ಅಥವಾ ರಾಜ್ಯ ಸರ್ಕಾರಗಳು ಈ ಎಲ್ಲ ಪ್ರಕರಣಗಳ ಸಂಪೂರ್ಣ ದಾಖಲೆಗಳನ್ನು ತಕ್ಷಣವೇ ಸಿಬಿಐಗೆ ಹಸ್ತಾಂತರಿಸಬೇಕು ಎಂದು ಕೋರ್ಟ್ ಸೂಚಿಸಿದೆ.

ಯಾರೇ ಆಗಲಿ ತನಿಖೆಯ ಸಮಯದಲ್ಲಿ ಯಾವುದೇ ಅಡಚಣೆ ಮಾಡಿದಲ್ಲಿ ಅದನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಅರಾಜಕತೆಗೆ ಸ್ಥಾನವಿಲ್ಲ: ಬಿಜೆಪಿ

ಪಶ್ಚಿಮ ಬಂಗಾಳದ ಚುನಾವಣೋತ್ತರ ಹಿಂಸಾಚಾರ ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಿರುವ ಕಲ್ಕತ್ತಾ ಹೈಕೋರ್ಟ್ ಆದೇಶವನ್ನು ಬಿಜೆಪಿ ಶ್ಲಾಘಿಸಿದೆ. ದೇಶದಲ್ಲಿ ಅರಾಜಕತೆಗೆ ಸ್ಥಾನವಿಲ್ಲ ಎಂಬ ಬಲವಾದ ಸಂದೇಶವನ್ನು ಈ ಆದೇಶ ನೀಡಿದೆ ಎಂದು ಹೇಳಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಆತ್ಮಾವಲೋಕನ ಮಾಡಿಕೊಳ್ಳುವಂತೆ ಸಲಹೆ ನೀಡಿದೆ.

ಹಿಂಸಾಚಾರದ ನಂತರ ಜನರ ದೂರುಗಳನ್ನು ರಾಜ್ಯ ಪೊಲೀಸರು ಆಲಿಸಲಿಲ್ಲ ಎಂದುಬಿಜೆಪಿ ವಕ್ತಾರ ಗೌರವ್ ಭಾಟಿಯಾ ಆರೋಪಿಸಿದ್ದಾರೆ.ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ವರದಿಯನ್ನು ಅವರು ಉಲ್ಲೇಖಿಸಿದ್ದಾರೆ.

ಮೇಲ್ಮನವಿಗೆ ಟಿಎಂಸಿ ನಿರ್ಧಾರ

‘ನ್ಯಾಯಾಲಯದ ಆದೇಶವನ್ನು ಗೌರವಿಸುತ್ತೇವೆ. ಆದೇಶವನ್ನು ಪರಿಶೀಲಿಸಿ, ಅಗತ್ಯವಿದ್ದಲ್ಲಿ ಉನ್ನತ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸುವ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದು ಟಿಎಂಸಿ ನಾಯಕ ಮತ್ತು ಸಂಸದ ಸೌಗತ ರಾಯ್ ಹೇಳಿದರು.

ಟಿಎಂಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕುನಾಲ್ ಘೋಷ್ ಅವರು ರಾಜ್ಯದಲ್ಲಿ ಹಿಂಸಾಚಾರವನ್ನು ಪ್ರಚೋದಿಸುತ್ತಿರುವುದಕ್ಕೆ ಬಿಜೆಪಿಯನ್ನು ದೂಷಿಸಿದರು. ‘ನಾವು ನಿಮ್ಮನ್ನು ಕೊಲ್ಲುತ್ತೇವೆ, ನಿಮ್ಮ ಶವ ಸಾಗಿಸಲೂ ಜನರು ಸಿಗುವುದಿಲ್ಲ ಎಂಬಂತಹ ಪ್ರಚೋದನಕಾರಿ ಹೇಳಿಕೆಗಳನ್ನು ಮತದಾನಕ್ಕೂ ಮೊದಲು ಬಿಜೆಪಿ ನಾಯಕರು ನೀಡಿದ್ದರು’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT