ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಬಿಎಸ್‌ಇ ಪಬ್ಲಿಕ್‌ ಪರೀಕ್ಷೆ ರದ್ದುಗೊಳಿಸಿ: ಪ್ರಿಯಾಂಕಾ ಗಾಂಧಿ ಆಗ್ರಹ

Last Updated 11 ಏಪ್ರಿಲ್ 2021, 11:13 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ನಡೆಸುವ ಪಬ್ಲಿಕ್‌ (ಬೋರ್ಡ್‌) ಪರೀಕ್ಷೆಗಳನ್ನು ರದ್ದುಪಡಿಸುವಂತೆ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಆಗ್ರಹಿಸಿದ್ದಾರೆ.

ಈ ಕುರಿತು ಕೇಂದ್ರ ಶಿಕ್ಷಣ ಸಚಿವ ರಮೇಶ್‌ ಪೋಖ್ರಿಯಾಲ್‌ ನಿಶಾಂಕ್‌ ಅವರಿಗೆ ಭಾನುವಾರ ಪತ್ರ ಬರೆದಿರುವ ಅವರು, ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ದಟ್ಟಣೆ ಹೆಚ್ಚಿರುತ್ತದೆ. ಹಾಗಾಗಿ ಅಲ್ಲಿ ಸುರಕ್ಷತೆಯನ್ನು ಖಚಿತಪಡಿಸುವುದು ಕಷ್ಟಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.

ಸಾಂಕ್ರಾಮಿಕ ರೋಗ ಉಲ್ಬಣಗೊಳ್ಳುತ್ತಿರುವ ಈ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರಗಳಿಗೆ ಬಂದು ಪರೀಕ್ಷೆ ಬರೆಯುವಂತೆ ವಿದ್ಯಾರ್ಥಿಗಳನ್ನು ಒತ್ತಾಯಿಸುವುದು ಸರಿಯಲ್ಲ. ಒಂದು ವೇಳೆ ಯಾವುದೇ ಪರೀಕ್ಷಾ ಕೇಂದ್ರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಸೋಂಕಿಗೆ ಒಳಗಾಗಿ, ಆ ಪ್ರದೇಶವೇ ‘ಹಾಟ್‌ಸ್ಪಾಟ್‌’ ಆಗಿ ಪರಿವರ್ತನೆ ಆದರೆ, ಅದಕ್ಕೆ ಸಿಬಿಎಸ್‌ಇ ಮತ್ತು ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ. ಅದಕ್ಕೆ ಮಂಡಳಿ ಮತ್ತು ಸರ್ಕಾರ ಕಾನೂನುಬದ್ಧವಾಗಿ ಸಿದ್ಧವಿದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.

ದೇಶದಲ್ಲಿ ನಿತ್ಯ ಲಕ್ಷಕ್ಕೂ ಹೆಚ್ಚು ಜನರು ಕೋವಿಡ್‌ ಸೋಂಕಿತರಾಗುತ್ತಿದ್ದಾರೆ. ವೈರಾಣುವಿನ ಎರಡನೇ ಅಲೆ ವ್ಯಾಪಕವಾಗಿರುವ ಇಂಥ ಸಂದರ್ಭದಲ್ಲಿ ಮಕ್ಕಳನ್ನು ಪರೀಕ್ಷಾ ಕೇಂದ್ರಗಳಿಗೆ ಕಳುಹಿಸುವ ವಿಚಾರದಲ್ಲಿ ಪೋಷಕರೂ ಆತಂಕಕ್ಕೆ ಒಳಗಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಸಿಬಿಎಸ್‌ಇ ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ 10ನೇ ತರಗತಿ ಪರೀಕ್ಷೆಗಳು ಮೇ 4ರಿಂದ ಜೂನ್‌ 7ರವರೆಗೆ ಹಾಗೂ 12ನೇ ತರಗತಿ ಪರೀಕ್ಷೆಗಳು ಮೇ 4ರಿಂದ ಜೂನ್‌ 15ರವರೆಗೆ ನಡೆಯಲಿವೆ. ವಿದ್ಯಾರ್ಥಿಗಳಲ್ಲಿ ವೈಯಕ್ತಿಕ ಅಂತರವನ್ನು ಕಾಯ್ದುಕೊಳ್ಳುವ ಉದ್ದೇಶದಿಂದ ದೇಶದಾದ್ಯಂತ ಶೇ 40ರಿಂದ 50ರಷ್ಟು ಪರೀಕ್ಷಾ ಕೇಂದ್ರಗಳನ್ನು ಹೆಚ್ಚಿಸಲಾಗಿದೆ ಎಂದು ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT