ಶನಿವಾರ, ಅಕ್ಟೋಬರ್ 16, 2021
22 °C
ಪ್ರತಿಪಕ್ಷಗಳನ್ನು ಗುರಿಯಾಗಿಸಿಕೊಂಡು ದಾಳಿ

ಕೇಂದ್ರ ಸರ್ಕಾರದಿಂದ ತನಿಖಾ ಸಂಸ್ಥೆಗಳ ದುರ್ಬಳಕೆ: ಶರದ್ ಪವಾರ್ ಆರೋಪ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ‘ಪ್ರತಿಪಕ್ಷಗಳನ್ನು ಗುರಿಯಾಗಿಸಿಕೊಂಡು ಸಿಬಿಐ, ಜಾರಿ ನಿರ್ದೇಶನಾಲಯ (ಇ.ಡಿ), ಮಾದಕ ವಸ್ತುಗಳ ನಿಯಂತ್ರಣ ಸಂಸ್ಥೆ (ಎನ್‌ಸಿಬಿ) ಸೇರಿದಂತೆ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ’ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ.

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಜೊತೆ ಸಂಬಂಧ ಹೊಂದಿರುವ ಸಂಸ್ಥೆಗಳ ಮೇಲೆ ನಡೆದ ಆದಾಯ ತೆರಿಗೆ ಇಲಾಖೆಯ ದಾಳಿಗಳನ್ನು ಉಲ್ಲೇಖಿಸಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತನಿಖಾ ಸಂಸ್ಥೆಯ ಸಿಬ್ಬಂದಿ ಆರನೇ ದಿನವಾದ ಬುಧವಾರವೂ ದಾಳಿ ಮುಂದುವರಿಸಿದ್ದಾರೆ. ಇದು ಅಸಹಜವಾದದ್ದು. ಎನ್‌ಸಿಬಿಗಿಂತ ಮುಂಬೈನ ಮಾದಕದ್ರವ್ಯ ವಿರೋಧಿ ಘಟಕವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ’ ಎಂದರು.

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮತ್ತು ಶಿವಸೇನೆಯೊಂದಿಗೆ ಅಧಿಕಾರ ಹಂಚಿಕೊಂಡಿರುವ ಎನ್‌ಸಿಪಿಯು ಈ ಹಿಂದೆ ತನ್ನ ನಾಯಕರು ಮತ್ತು ಕಾರ್ಯಕರ್ತರ ಮೇಲೆ ಕೇಂದ್ರ ತನಿಖಾ ಸಂಸ್ಥೆಗಳು ನಡೆಸುವ ದಾಳಿಗಳನ್ನು ಎದುರಿಸುವುದಾಗಿ ತಿಳಿಸಿತ್ತು.

ಎನ್‌ಸಿಪಿ ಹಿರಿಯ ನಾಯಕ ಅಜಿತ್ ಪವಾರ್ ಅವರ ಸಂಬಂಧಿಕರ ಮನೆಗಳ ಮೇಲೂ ಆದಾಯ ತೆರಿಗೆ ಇಲಾಖೆಯು ದಾಳಿ ನಡೆಸಿದೆ. ಅಂತೆಯೇ ಹಲವು ಪ್ರಕರಣಗಳ ಆರೋಪದಲ್ಲಿ ಎನ್‌ಸಿಪಿಯ ಮತ್ತೊಬ್ಬ ಹಿರಿಯ ನಾಯಕ ಅನಿಲ್ ದೇಶ್‌ಮುಖ್ ಅವರ ವಿರುದ್ಧವೂ ಕೇಂದ್ರ ತನಿಖಾ ಸಂಸ್ಥೆಗಳು ತನಿಖೆ ಕೈಗೊಂಡಿವೆ.

ಎನ್‌ಸಿಬಿಯು ಇತ್ತೀಚೆಗೆ ಹಲವು ದಾಳಿಗಳನ್ನು ಕೈಗೊಂಡಿದ್ದು, ಅದರಲ್ಲಿ ಮುಂಬೈನ ಸಮುದ್ರ ತೀರದ ಪ್ರತಿಷ್ಠಿತ ಹಡಗೊಂದರಲ್ಲಿ ನಡೆಯುತ್ತಿದ್ದ ಮಾದಕ ವಸ್ತು ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಬಾಲಿವುಡ್ ನಟ ಶಾರುಕ್ ಖಾನ್ ಮಗ ಆರ್ಯನ್ ಖಾನ್ ಅವರನ್ನು ಬಂಧಿಸಲಾಗಿತ್ತು. ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣವು ಮಾದಕ ವಸ್ತು ಪ್ರಕರಣಗಳ ಜೊತೆಗೆ ಥಳಕು ಹಾಕಿಕೊಂಡಿದ್ದರಿಂದ ಇದಕ್ಕೆ ಸಂಬಂಧಿಸಿದಂತೆ ಎನ್‌ಸಿಬಿಯು ಹಲವು ಉನ್ನತ ವ್ಯಕ್ತಿಗಳ ಮೇಲೂ ಕಣ್ಣಿಟ್ಟಿದೆ.‌

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು