ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಡ್ಡಾ ಭೇಟಿ ವೇಳೆ ಭದ್ರತಾ ವೈಫಲ್ಯ: ವರದಿ ನೀಡಲು ಪಶ್ಚಿಮಬಂಗಾಳ ಸರ್ಕಾರಕ್ಕೆ ಸೂಚನೆ

Last Updated 10 ಡಿಸೆಂಬರ್ 2020, 11:08 IST
ಅಕ್ಷರ ಗಾತ್ರ

ನವದೆಹಲಿ: ಪಶ್ಚಿಮ ಬಂಗಾಳಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಭೇಟಿ ನೀಡಿದ ವೇಳೆ ಭದ್ರತಾ ವೈಫಲ್ಯದ ಆರೋಪ ಕುರಿತಂತೆ ವರದಿ ಸಲ್ಲಿಸುವಂತೆ ಪಶ್ಷಿಮ ಬಂಗಾಳ ಸರ್ಕಾರಕ್ಕೆ ಕೇಂದ್ರವು ಗುರುವಾರ ಸೂಚನೆ ನೀಡಿದೆ.

ಕೋಲ್ಕತ್ತದಿಂದ ದಕ್ಷಿಣ 24 ಪರಗಣ ಜಿಲ್ಲೆಯ ಡೈಮಂಡ್ ಹಾರ್ಬರ್ ಪ್ರದೇಶಕ್ಕೆ ತೆರಳುತ್ತಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ಬೆಂಗಾವಲು ಪಡೆಯ ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿದೆ ಎಂದು ಆರೋಪಿಸಲಾಗಿದೆ.

ನಡ್ಡಾ ಅವರ ಜತೆಗಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಅವರ ಕಾರಿನ ಮೇಲೂ ದಾಳಿ ಮಾಡಲಾಯಿತು ಎಂದು ಬಿಜೆಪಿ ಮೂಲಗಳು ತಿಳಿಸಿವೆ.‌ ಬಿಜೆಪಿ ಮುಖಂಡರ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಮಾಧ್ಯಮದವರಿದ್ದ ವಾಹನಗಳಿಗೂ ಹಾನಿಯಾಗಿದೆ ಎಂದೂ ಮೂಲಗಳು ತಿಳಿಸಿವೆ.

ಈ ಘಟನೆ ಬಗ್ಗೆ ಬಿಜೆಪಿಯ ಪಶ್ಚಿಮ ಬಂಗಾಳ ಘಟಕದ ಅಧ್ಯಕ್ಷ ದಿಲೀಪ್‌ ಘೋಷ್‌ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಸೂಚನೆ ನೀಡಿದೆ.

ಕಳವಳ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಬೆಂಗಾವಲು ವಾಹನಗಳ ಮೇಲೆ ನಡೆದಿದೆ ಎನ್ನಲಾದ ದಾಳಿ ಕುರಿತಂತೆ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್‌ ಧನಕರ್‌ ಅವರು ಕಳವಳ ವ್ಯಕ್ತಪಡಿಸಿದ್ದಾರೆ.

‘ಇಂಥ ಘಟನೆಗಳ ಬಗ್ಗೆ ಹಲವು ಬಾರಿ ಎಚ್ಚರಿಕೆ ನೀಡಿದ್ದರೂ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ‘ ಎಂದು ಅವರು ಗುರುವಾರ ಮಾಡಿರುವ ಟ್ವೀಟ್‌ನಲ್ಲಿ ಟೀಕಿಸಿದ್ದಾರೆ.

‘ಡೈಮಂಡ್‌ ಹಾರ್ಬರ್‌ನಲ್ಲಿ ನಡೆಯಲಿರುವ ಬಿಜೆಪಿ ಕಾರ್ಯಕ್ರಮದ ವೇಳೆ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವ ಸಾಧ್ಯತೆಯ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಡಿಜಿಪಿ ಅವರಿಗೆ ಪತ್ರ ಬರೆದಿದ್ದೆ’ ಎಂದೂ ಅವರು ಟ್ವೀಟ್‌ನಲ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT