ಶುಕ್ರವಾರ, ಸೆಪ್ಟೆಂಬರ್ 17, 2021
22 °C
ಬಿ.ವೈ. ವಿಜಯೇಂದ್ರ ಅವರ ಆಪ್ತರೂ ಕರ್ತವ್ಯದಿಂದ ಬಿಡುಗಡೆ

ಮುಖ್ಯಮಂತ್ರಿ ಸಚಿವಾಲಯದ ಆಯಕಟ್ಟಿನ ಹುದ್ದೆಗಳಲ್ಲಿದ್ದ ಬಿಎಸ್‌ವೈ ಆಪ್ತರು ಹೊರಕ್ಕೆ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಯಡಿಯೂರಪ್ಪ ಅವರ ಅವಧಿಯಲ್ಲಿ ಮುಖ್ಯಮಂತ್ರಿಯವರ ಸಚಿವಾಲಯದಲ್ಲಿ ಆಯಕಟ್ಟಿನ ಹುದ್ದೆಗಳಲ್ಲಿದ್ದ 19 ಮಂದಿಯನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಶನಿವಾರ ಆದೇಶ ಹೊರಡಿಸಲಾಗಿದೆ.

ತಮ್ಮೊಂದಿಗೆ ಅತ್ಯಂತ ನಿಕಟ ವಾಗಿದ್ದ ಹಲವರನ್ನು ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸಚಿವಾಲಯಕ್ಕೆ ನೇಮಿಸಿಕೊಂಡಿದ್ದರು. ಯಡಿಯೂರಪ್ಪ ಅವರ ಮಗ ಬಿ.ವೈ. ವಿಜಯೇಂದ್ರ ಅವರ ಆಪ್ತರೂ ಹಲವು ಮಂದಿ ಸಚಿವಾಲಯದಲ್ಲಿದ್ದರು. ಬಹುತೇಕ ಎಲ್ಲರನ್ನೂ ಸಚಿವಾಲಯದಿಂದ ಹೊರ ಕಳುಹಿಸುವ ಆದೇಶ ಹೊರಡಿಸಲಾಗಿದೆ.

ಮುಖ್ಯಮಂತ್ರಿಯವರ ಕಾರ್ಯದರ್ಶಿಯಾಗಿದ್ದ ಐಎಎಸ್‌ ಅಧಿಕಾರಿ ಡಾ.ಎಸ್‌. ಸೆಲ್ವಕುಮಾರ್‌ ಅವರನ್ನು ಕೌಶಲ ಅಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಕರ್ನಾಟಕ ವಿದ್ಯುತ್‌ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಯಲ್ಲಿದ್ದ ಐಎಎಸ್‌ ಅಧಿಕಾರಿ ವಿ. ಪೊನ್ನುರಾಜ್‌ ಅವರನ್ನು ಮುಖ್ಯಮಂತ್ರಿಯವರ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ. ಪೊನ್ನುರಾಜ್‌ ಅವರಿಗೆ ವಿದ್ಯುತ್‌ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಯನ್ನೂ ಹೆಚ್ಚುವರಿಯಾಗಿ ನೀಡಲಾಗಿದೆ.

ಹಿಂದಿನ ಸರ್ಕಾರದಲ್ಲಿ ಮುಖ್ಯಮಂತ್ರಿಯವರ ಸಲಹೆಗಾರರಾಗಿದ್ದ ನಿವೃತ್ತ ಐಎಎಸ್‌ ಅಧಿಕಾರಿ ಎಂ. ಲಕ್ಷ್ಮೀನಾರಾಯಣ ಅವರನ್ನು ಬಿಡುಗಡೆ ಮಾಡಲಾಗಿದೆ. ವಿಶೇಷ ಕರ್ತವ್ಯಾಧಿಕಾರಿಯಾಗಿದ್ದ ಡಾ.ಎ. ಲೋಕೇಶ್‌, ವಿಶೇಷಾಧಿಕಾರಿಗಳಾಗಿದ್ದ ಎಚ್‌.ಎಸ್‌. ಸತೀಶ್, ಟಿ.ಎಂ. ಸುರೇಶ್, ಉಪ ಕಾರ್ಯದರ್ಶಿಯಾಗಿದ್ದ ಎ.ಆರ್‌. ರವಿ ಸೇರಿದಂತೆ ಹಲವು ಅಧಿಕಾರಿಗಳನ್ನು ಕರ್ತವ್ಯದಿಂದ ಬಿಡುಗಡೆ ಮಾಡಿದ್ದು, ಮೂಲ ಸ್ಥಾನಕ್ಕೆ ವರದಿ ಮಾಡಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ.

ಮುಖ್ಯಮಂತ್ರಿಯವರ ಮಾಧ್ಯಮ ಸಮನ್ವಯ ಅಧಿಕಾರಿಗಳಾಗಿದ್ದ ಎಸ್‌. ಶಾಂತಾರಾಂ, ಜಿ.ಎಸ್‌. ಸುನೀಲ್‌, ಸಾಂಸ್ಕೃತಿಕ ಸಮನ್ವಯ ಅಧಿಕಾರಿಯಾಗಿದ್ದ ಗಣೇಶ್‌ ಯಾಜಿ ಅವರನ್ನೂ ಹುದ್ದೆಯಿಂದ ಕೈಬಿಡಲಾಗಿದೆ.ಯಡಿಯೂರಪ್ಪ ಅವಧಿಯಲ್ಲಿದ್ದವರಲ್ಲಿ ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣ ರೆಡ್ಡಿ ಸೇರಿದಂತೆ ಕೆಲವು ಅಧಿಕಾರಿಗಳನ್ನು ಮಾತ್ರ ಮುಂದುವರಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು