'ಎಸ್‌ಪಿ, ಬಿಎಸ್‌ಪಿ ಮೈತ್ರಿ ಇಲ್ಲದೇ ಉತ್ತರ ಪ್ರದೇಶ ಚುನಾವಣೆ ಗೆಲ್ಲುತ್ತೇವೆ'

ನವದೆಹಲಿ: ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಬಹುಜನ ಸಮಾಜವಾದಿ ಪಕ್ಷಗಳೊಂದಿಗೆ (ಬಿಎಸ್‌ಪಿ) ಮೈತ್ರಿ ಇಲ್ಲದೇ, ಕಾಂಗ್ರೆಸ್ ಪಕ್ಷಕ್ಕೆ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯನ್ನು ಗೆಲ್ಲುವ ಸಾಮರ್ಥ್ಯವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಕಾಂಗ್ರೆಸ್ ಮುಖಂಡ ಅಜಯ್ ಕುಮಾರ್ ಲಲ್ಲು, ‘ನಾವು ಸ್ವಂತ ಬಲದ ಮೇಲೆ ಸರ್ಕಾರ ರಚಿಸುತ್ತೇವೆ‘ ಎಂದು ಹೇಳಿದ್ದಾರೆ.
ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಗಳ ಜತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಎಸ್‌ಪಿ ಮತ್ತು ಬಿಎಸ್‌ಪಿ ಪಕ್ಷಗಳು ನಿರ್ಧಾರ ಪ್ರಕಟಿಸಿದ ಬೆನ್ನಲ್ಲೇ, ಅಜಯ್ ಕುಮಾರ್ ಲಲ್ಲು ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.
‘ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ನೇತೃತ್ವದಲ್ಲಿ ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ಚುನಾವಣೆಯನ್ನು ಎದುರಿಸಲಿದ್ದು, ಮೂರು ದಶಕಗಳ ನಂತರ, ನಮ್ಮ ಪಕ್ಷ ಮತ್ತೆ ರಾಜ್ಯದಲ್ಲಿ ಅಧಿಕಾರ ಹಿಡಿಯಲಿದೆ‘ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಈ ವಿಷಯ ಪ್ರಸ್ತಾಪಿಸಿದ ಅಜಯ್ ಕುಮಾರ್ ಲಲ್ಲು, ‘ಉತ್ತರ ಪ್ರದೇಶದಲ್ಲಿ ಐವರು ಶಾಸಕರನ್ನು ಹೊಂದಿರುವ ಕಾಂಗ್ರೆಸ್ ಪಕ್ಷ, 49 ಶಾಸಕರನ್ನು ಹೊಂದಿರುವ ಸಮಾಜವಾದಿ ಪಕ್ಷಕ್ಕಿಂತ ಪರಿಣಾಮಕಾರಿ ವಿರೋಧ ಪಕ್ಷವಾಗಿ ಕೆಲಸ ಮಾಡುತ್ತಿದೆ‘ ಎಂದು ತಮ್ಮ ಪಕ್ಷದ ಕಾರ್ಯವೈಖರಿಯನ್ನು ಸಮರ್ಥಿಸಿಕೊಂಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.