ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ರ‍್ಯಾಲಿ ತಡೆದ ಪೊಲೀಸರು; ಪ್ರಿಯಾಂಕಾ ಗಾಂಧಿ ವಾದ್ರಾ ವಶಕ್ಕೆ

Last Updated 24 ಡಿಸೆಂಬರ್ 2020, 7:31 IST
ಅಕ್ಷರ ಗಾತ್ರ

ನವದೆಹಲಿ: ಮೂರು ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಾಂಗ್ರೆಸ್ ರಾಷ್ಟ್ರಪತಿ ಭವನಕ್ಕೆ ಗುರುವಾರ ಹಮ್ಮಿಕೊಂಡಿರುವ ಪ್ರತಿಭಟನಾ ಮೆರವಣಿಗೆಯನ್ನು ತಡೆ ಹಿಡಿದಿರುವ ಪೊಲೀಸರು, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿವಾದ್ರಾ ಸೇರಿದಂತೆ ಪ್ರಮುಖ ಮುಖಂಡರನ್ನುವಶಕ್ಕೆ ತೆಗೆದುಕೊಂಡರು.

ಕೇಂದ್ರ ಸರಕಾರದ ಮೂರು ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರಾಷ್ಟ್ರ ರಾಜಧಾನಿಯ ಗಡಿ ಭಾಗಗಳಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ 29ನೇ ದಿನಕ್ಕೆ ಕಾಲಿಟ್ಟಿದೆ. ಈ ಸಮಸ್ಯೆಯ ಗಂಭೀರತೆಯನ್ನು ಪರಿಗಣಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಧ್ಯ ಪ್ರವೇಶವನ್ನು ಕೋರಿ ಕಾಂಗ್ರೆಸ್ ನಿಯೋಗವು ಗುರುವಾರ ರಾಷ್ಟ್ರ ಭವನದತ್ತ ಕಾಲ್ನಾಡಿಗೆ ಮೆರವಣಿಗೆಯನ್ನು ಹಮ್ಮಿಕೊಂಡಿತ್ತು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಎರಡು ಕೋಟಿ ಹಸ್ತಾಕ್ಷರವಿರುವ ಪತ್ರವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಕಾಂಗ್ರೆಸ್ ಪಕ್ಷವು ಸಲ್ಲಿಸಲು ನಿರ್ಧರಿಸಿತ್ತು. ಕಾಂಗ್ರೆಸ್‌ನ ಸಂಸದರು ಸೇರಿದಂತೆ ಪ್ರಮುಖ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಆದರೆ ಕಾಂಗ್ರೆಸ್ ನಿಯೋಗವನ್ನು ತಡೆದ ಪೊಲೀಸರು ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಪಕ್ಷದ ಮುಖಂಡರನ್ನು ವಶಕ್ಕೆ ತೆಗೆದುಕೊಂಡರು. ಅಲ್ಲದೆ ಅನುಮತಿ ಪಡೆದ ನಾಯಕರಿಗೆ ಮಾತ್ರ ರಾಷ್ಟ್ರಪತಿ ಭವನಕ್ಕೆ ತೆರಳಲು ಅವಕಾಶ ನೀಡಲಾಗುವುದು ಎಂದು ಪೊಲೀಸ್ ಹೇಳಿದೆ.

ಈ ವೇಳೆ ಪ್ರತಿಕ್ರಿಯೆ ನೀಡಿರುವ ಪ್ರಿಯಾಂಕಾ ಗಾಂಧಿ ವಾದ್ರಾ, ರೈತರು ಹಿಂಜರಿಯಲ್ಲ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಇದನ್ನು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು.

ಸರ್ಕಾರ ವಿರುದ್ಧದ ಯಾವುದೇ ಭಿನ್ನಾಭಿಪ್ರಾಯವನ್ನು ಭಯೋತ್ಪಾದಕ ಕೃತ್ಯ ಎಂದು ಹೇಳಲಾಗುತ್ತಿದೆ. ರೈತರಿಗೆ ನಮ್ಮ ಬೆಂಬಲವನ್ನು ಸೂಚಿಸಲು ಈ ಮೆರವಣಿಗೆಯನ್ನು ಕೈಗೊಳ್ಳುತ್ತಿದ್ದೇವೆ ಎಂದು ಹೇಳಿದರು.

ದೆಹಲಿಯ ವಿಜಯ್ ಚೌಕ್‌ನಿಂದ ರಾಷ್ಟ್ರಪತಿ ಭವನದ ವರೆಗೆ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರೊಂದಿಗೆ ಪಾದಯಾತ್ರೆ ಹಮ್ಮಿಕೊಂಡಿತ್ತು. ಆದರೆ ಕಾಂಗ್ರೆಸ್ ಪಾದಯಾತ್ರೆಗೆ ಪೊಲೀಸ್ ಅನುಮತಿ ನೀಡಿರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT