ಪಂಜಾಬ್ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಕಾರ್ಯತಂತ್ರಕ್ಕೆ ಪ್ರಶಾಂತ್ ಕಿಶೋರ್?

ನವದೆಹಲಿ: ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ನ ಚುನಾವಣಾ ಪ್ರಚಾರ ಕಾರ್ಯತಂತ್ರವನ್ನು ಅಭಿವೃದ್ಧಿಪಡಿಸಲು ಚುನಾವಣಾ ಕಾರ್ಯತಂತ್ರ ನಿಪುಣ ಪ್ರಶಾಂತ್ ಕಿಶೋರ್ ಅವರ ನೆರವು ಪಡೆಯುವ ಬಗ್ಗೆ ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಸೂಚನೆ ನೀಡಿದ್ದಾರೆ.
ಚನ್ನಿ, ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಮತ್ತು ಎಐಸಿಸಿಯ ರಾಜ್ಯ ವ್ಯವಹಾರಗಳ ಉಸ್ತುವಾರಿ ಹರೀಶ್ ಚೌಧರಿ ಅವರು ಮಂಗಳವಾರ ಸಂಜೆ ಚಂಡೀಗಢದಲ್ಲಿ ಪಕ್ಷದ ಶಾಸಕರು ಮತ್ತು ಇತರ ಹಿರಿಯ ನಾಯಕರ ಸಭೆ ನಡೆಸಿ ಚುನಾವಣೆಯ ಕಾರ್ಯತಂತ್ರದ ಬಗ್ಗೆ ಚರ್ಚಿಸಿದ್ದಾರೆ.
ಪಕ್ಷದ ಸಭೆಯ ಕಿರು ವಿಡಿಯೊದಲ್ಲಿ,‘ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಹರೀಶ್ ಚೌಧರಿಜಿ ಸಹ ಪ್ರಶಾಂತ್ ಕಿಶೋರ್ ಅವರನ್ನು ನೇಮಿಸಿಕೊಳ್ಳಲು ಸಲಹೆ ನೀಡಿದ್ದಾರೆ’ ಎಂದು ಚನ್ನಿ ಹೇಳಿರುವುದು ಕಂಡುಬಂದಿದೆ.
ಇತ್ತೀಚೆಗೆ, ತಮ್ಮ ಸರ್ಕಾರದ ವಿದ್ಯುತ್ ದರ ಕಡಿತದ ನಿರ್ಧಾರ ಮತ್ತು ಅದಕ್ಕೆ ಜನರಿಂದ ಸಿಕ್ಕ ಸಕಾರಾತ್ಮಕ ಪ್ರತಿಕ್ರಿಯೆಯ ಬಗ್ಗೆ ಚನ್ನಿ ಚರ್ಚಿಸುತ್ತಿರುವುದು ಕಂಡುಬಂದಿದೆ.
ಜನರು ಮತ್ತು ಪಕ್ಷದ ಕಾರ್ಯಕರ್ತರಲ್ಲಿ ಚುನಾವಣೆಯ ಉತ್ಸಾಹ ಹೆಚ್ಚಿದೆ ಎಂದು ಚನ್ನಿ ಹೇಳಿದ್ದಾರೆ.
ಈ ವರ್ಷದ ಆರಂಭದಲ್ಲಿ ಪ್ರಶಾಂತ್ ಕಿಶೋರ್ ಅವರು, ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಪ್ರಧಾನ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಕಿಶೋರ್ ಪ್ರಸ್ತುತ ಮುಂಬರುವ ಗೋವಾ ವಿಧಾನಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪರ ಚುನಾವಣಾ ಕಾರ್ಯತಂತ್ರ ರೂಪಿಸುತ್ತಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.