ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಉಪ ಚುನಾವಣೆ ಎದುರಾಗಿರುವ ಭವಾನಿಪುರ ವಿಧಾನಸಭೆ ಕ್ಷೇತ್ರಕ್ಕೆ ಮಮತಾ ವಿರುದ್ಧ ಅಭ್ಯರ್ಥಿಯನ್ನು ಹಾಕದಿರಲು ಕಾಂಗ್ರೆಸ್ ನಿರ್ಧರಿಸಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ವಕ್ಷೇತ್ರ ಭವಾನಿಪುರ ಬಿಟ್ಟು ನಂದಿಗ್ರಾಮ ಕ್ಷೇತ್ರದಿಂದ ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಸ್ಪರ್ಧಿಸಿದ್ದ ಮಮತಾ ಬ್ಯಾನರ್ಜಿ ಅವರು ಚುನಾವಣೆಯಲ್ಲಿ ಸೋತಿದ್ದರು. ಆದರೂ, ಟಿಎಂಸಿ ಬಹುಮತ ಸಾಧಿಸಿದ ಹಿನ್ನೆಲೆಯಲ್ಲಿ ಮೇ 5ರಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. 6 ತಿಂಗಳ ಒಳಗಾಗಿ(ನವೆಂಬರ್ 5ರ ಒಳಗೆ) ಅವರು ವಿಧಾನಸಭೆಗೆ ಆಯ್ಕೆಯಾಗಬೇಕಿದೆ. ಹೀಗಾಗಿ ಮಮತಾ ಅವರಿಗೆ ಸ್ಪರ್ಧಿಸಲು ಅವಕಾಶ ಮಾಡಿಕೊಡುವ ಸಲುವಾಗಿ ಭವಾನಿಪುರದ ಶಾಸಕ ಸ್ಥಾನಕ್ಕೆ ಶೋಭನ್‌ದೇವ್ ಚಟ್ಟೋಪಾಧ್ಯಾಯ ರಾಜೀನಾಮೆ ನೀಡಿದ್ದರು. ಹೀಗಾಗಿ ಭವಾನಿಪುರದಲ್ಲಿ ಉಪಚುನಾವಣೆ ಎದುರಾಗಿದೆ.
ಈ ಕ್ಷೇತ್ರದಿಂದ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವುದೋ ಇಲ್ಲವೋ ಎಂಬುದರ ಬಗ್ಗೆ ಚರ್ಚೆಗಳು ನಡೆದಿದ್ದವು. ಈ ಮಧ್ಯೆ ಸ್ಪಷ್ಟೀಕರಣ ನೀಡಿರುವ ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ, ‘ಮುಂಬರುವ ಭವಾನಿಪುರ ಉಪ ಚುನಾವಣೆಯಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಇರಲು ತೀರ್ಮಾನಿಸಲಾಗಿದೆ,‘ ಎಂದು ತಿಳಿಸಿದ್ದಾರೆ. ಈ ಕುರಿತು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.
ಅಭ್ಯರ್ಥಿಯನ್ನು ಹಾಕಲು ಈ ಮೊದಲು ಎಐಸಿಸಿ ನಿರ್ಧರಿಸಿತ್ತು.
ಸೆ. 30ರಂದು ಉಪಚುನಾವಣೆ ನಡೆಯಲಿದೆ.ಅಕ್ಟೋಬರ್ 3ರಂದು ಮತ ಎಣಿಕೆ ನಡೆಸಲಾಗುವುದು ಎಂದು ಚುನಾವಣಾ ಆಯೋಗ ಶನಿವಾರ ಪ್ರಕಟಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.