ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುಪಿ: ಎಲ್ಲ ಸ್ಥಾನಗಳಲ್ಲಿ ಸ್ಪರ್ಧಿಸುವುದು ಕಾಂಗ್ರೆಸ್‌ಗೆ ದೊಡ್ಡ ಲಾಭ; ಪ್ರಿಯಾಂಕಾ

Last Updated 31 ಜನವರಿ 2022, 14:09 IST
ಅಕ್ಷರ ಗಾತ್ರ

ನವದೆಹಲಿ: ಸುಮಾರು ಮೂರು ದಶಕಗಳ ನಂತರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷವು ಎಲ್ಲ 403 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಇದು 'ದೊಡ್ಡ ಸಾಧನೆ' ಎಂದು ಬಣ್ಣಿಸಿದ್ದಾರೆ.

ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಹೋರಾಟ ನಡೆಸುವ ಪ್ರಯತ್ನದಲ್ಲಿ ಎಫ್‌ಐಆರ್‌ಗಳು, ನ್ಯಾಯಾಲಯದ ಪ್ರಕರಣಗಳು ಅಥವಾ ಜೈಲು ಶಿಕ್ಷೆಯನ್ನು ಎದುರಿಸಲು ತಾವು ಮಾನಸಿಕವಾಗಿ ಸಿದ್ಧರಾಗಿರುವುದಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಉತ್ತರ ಪ್ರದೇಶದ ಪಕ್ಷದ ಉಸ್ತುವಾರಿ ಹೇಳಿದ್ದಾರೆ.

ಗೌತಮ್ ಬುದ್ಧ ನಗರ ಜಿಲ್ಲೆಯ ನೋಯ್ಡಾಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಸುಮಾರು ಮೂರು ದಶಕಗಳ ನಂತರ ಕಾಂಗ್ರೆಸ್ ಉತ್ತರ ಪ್ರದೇಶದ ಎಲ್ಲಾ 403 ವಿಧಾನಸಭೆ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದು, ಚುನಾವಣೆಯಲ್ಲಿ ಹೋರಾಡುತ್ತಿದೆ. ಇದು ದೊಡ್ಡ ಸಾಧನೆ ಎಂದು ನಾನು ಭಾವಿಸುತ್ತೇನೆ. ನಾವು ಎಲ್ಲ ಸ್ಥಾನಗಳಲ್ಲೂ ಸ್ಪರ್ಧಿಸಿ ಉತ್ತಮ ಪೈಪೋಟಿ ನೀಡುತ್ತೇವೆ' ಎಂದಿದ್ದಾರೆ.

ಕಾಂಗ್ರೆಸ್ 2017 ರ ಉತ್ತರ ಪ್ರದೇಶ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಜೊತೆ ಮೈತ್ರಿ ಮಾಡಿಕೊಂಡಿತ್ತು. ಆದರೆ ಬಿಜೆಪಿ 403 ಸ್ಥಾನಗಳ ಪೈಕಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದುಕೊಂಡಿತು. ಕಾಂಗ್ರೆಸ್-ಎಸ್‌ಪಿ ಮೈತ್ರಿಯು 60ಕ್ಕಿಂತ ಕಡಿಮೆ ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.

ಫೆ. 10 ರಂದು ಮತದಾನ ನಡೆಯಲಿರುವ ನೋಯ್ಡಾದಲ್ಲಿರುವ ಪ್ರಿಯಾಂಕಾ ಗಾಂಧಿ ಅವರು ಕಾಂಗ್ರೆಸ್ ಅಭ್ಯರ್ಥಿ ಪಂಖುರಿ ಪಾಠಕ್ ಅವರ ಪರ ಪ್ರಚಾರ ನಡೆಸುತ್ತಿದ್ದಾರೆ.

ಚುನಾವಣಾ ಪ್ರಚಾರದ ವೇಳೆ ಛತ್ತೀಸ್‌ಗಡ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರಂತಹ ಕಾಂಗ್ರೆಸ್ ನಾಯಕರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಎಫ್‌ಐಆರ್ ದಾಖಲಿಸಿರುವ ಕುರಿತು ಮಾತನಾಡಿದ ಅವರು, 'ಉತ್ತರ ಪ್ರದೇಶದಲ್ಲಿ ಕೆಲಸ ಮಾಡಲು ಪ್ರಾರಂಭಿಸಿದಾಗಿನಿಂದ ನಾನು ಮಾನಸಿಕವಾಗಿ ಸಿದ್ಧಳಾಗಿದ್ದೇನೆ. ಅವರು ನನ್ನ ವಿರುದ್ಧ ಪ್ರಕರಣಗಳನ್ನು ದಾಖಲಿಸಬಹುದು, ನನ್ನನ್ನು ಬಂಧಿಸಬಹುದು ಅಥವಾ ಜೈಲಿಗೆ ಹಾಕಬಹುದು. ಆದರೆ ನಾವು ಜನರಿಗಾಗಿ ಹೋರಾಡಲು ಸಿದ್ಧರಿದ್ದೇವೆ' ಎಂದರು.

ತಮ್ಮ ಪಕ್ಷದ ರಾಜಕೀಯ ಪ್ರತಿಸ್ಪರ್ಧಿಗಳು ತಮ್ಮ ರಾಜಕೀಯವನ್ನು ಜಾತಿ ಮತ್ತು ಕೋಮುವಾದದ ಮೇಲೆ ಕೇಂದ್ರೀಕರಿಸಿದ್ದಾರೆ ಎಂದು ಆರೋಪಿಸಿದ ಅವರು, ಮುಂಬರುವ ಚುನಾವಣೆಯಲ್ಲಿ ಅಭಿವೃದ್ಧಿ ಮತ್ತು ಸ್ಥಳೀಯ ಸಮಸ್ಯೆಗಳ ಬಗ್ಗೆ ಗಮನಹರಿಸುವಂತೆ ಜನರಿಗೆ ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT