ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತ್ರಿವರ್ಣ ಧ್ವಜಕ್ಕೆ ಅಗೌರವ ನೋವಿನ ಸಂಗತಿ–ಮೋದಿ

ಮಾಸಿಕ ಬಾನುಲಿ ಕಾರ್ಯಕ್ರಮ ‘ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ
Last Updated 31 ಜನವರಿ 2021, 7:35 IST
ಅಕ್ಷರ ಗಾತ್ರ

ನವದೆಹಲಿ: ‘ಗಣರಾಜ್ಯೋತ್ಸವ ದಿನದಂದು ಕೆಂಪುಕೋಟೆಯ ಆವರಣದಲ್ಲಿ ದೇಶದ ತ್ರಿವರ್ಣ ಧ್ವಜಕ್ಕೆ ಅಗೌರವ ತೋರಿದಂತಹ ಘಟನೆಯಿಂದ ದೇಶದ ಜನರಿಗೆ ತೀವ್ರ ನೋವನ್ನುಂಟು ಮಾಡಿದೆ‘ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಕೃಷಿ ಕಾಯ್ದೆಗಳನ್ನು ಹಿಪಡೆಯುವಂತೆ ಒತ್ತಾಯಿಸಿ ವಿವಿಧ ರೈತ ಸಂಘಟನೆಗಳು ಜ.26ರಂದು ಆಯೋಜಿಸಿದ್ದ ಟ್ರ್ಯಾಕ್ಟರ್‌ ರ‍್ಯಾಲಿ ವೇಳೆ ನಡೆದ ಘಟನೆಯನ್ನು ಅವರು ತಮ್ಮ ಜನಪ್ರಿಯ ಬಾನುಲಿ ಕಾರ್ಯಕ್ರಮ ‘ಮನ್‌ ಕಿ ಬಾತ್‌‘ನಲ್ಲಿ ಈ ವಿಷಯ ಪ್ರಸ್ತಾಪಿಸಿದರು.

ವರ್ಷದ ಮೊದಲ ಕಂತಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸರ್ಕಾರ ಕೃಷಿ ಕ್ಷೇತ್ರವನ್ನು ಆಧುನೀಕರಣ ಗೊಳಿಸುವತ್ತ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ‘ ಎಂದು ಹೇಳುವ ಮೂಲಕ ಪರೋಕ್ಷವಾಗಿ ವಿವಾದಿತ ಕೃಷಿ ಕಾಯ್ದೆಗಳನ್ನು ಸಮರ್ಥಿಸಿಕೊಂಡರು.

ಇದೇ ವೇಳೆ, ಕೊರೊನಾ ವಿರುದ್ಧದ ಲಸಿಕಾ ಅಭಿಯಾನವನ್ನು ಪ್ರಸ್ತಾಪಿಸಿದ ಪ್ರಧಾನಿಯವರು ‘ಭಾರತ ವಿಶ್ವದ ಬೃಹತ್ ಲಸಿಕಾ ಅಭಿಯಾನವನ್ನು ಆರಂಭಿಸಿದ್ದು, ಎಲ್ಲ ನಾಗರಿಕರಿಗೆ ಶೀಘ್ರಗತಿಯಲ್ಲಿ ಲಸಿಕೆ ಪೂರೈಸಲು ಮುಂದಾಗಿದೆ‘ ಎಂದರು.

ಕಳೆದ ಹದಿನೈದು ದಿನಗಳಲ್ಲಿ ದೇಶದಾದ್ಯಂತ 30 ಲಕ್ಷ ಕೊರೊನಾ ವಾರಿಯರ್‌ಗಳಿಗೆ ಲಸಿಕೆ ಹಾಕಲಾಗಿದೆ ಎಂದು ಹೇಳಿದ ಪ್ರಧಾನಿ, ಅಮೆರಿಕ ಮತ್ತು ಬ್ರಿಟನ್‌ನಲ್ಲಿ ಇಷ್ಟು ಮಂದಿಗೆ ಲಸಿಕೆ ಹಾಕಲು 18 ರಿಂದ 36 ದಿನಗಳಷ್ಟು ಸಮಯ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.

ಕಳೆದ ವಾರ ಪ್ರಕಟಿಸಿದ ಪದ್ಮ ಪ್ರಶಸ್ತಿ ಪುರಸ್ಕೃತರ ಬಗ್ಗೆ ಪ್ರಸ್ತಾಪಿಸಿದ ಅವರು, ‘ನಮ್ಮ ಸರ್ಕಾರ ತೆರೆಮರೆಯ ಸಾಧಕರನ್ನು ಗುರುತಿಸಿ, ಪದ್ಮ ಪ್ರಶಸ್ತಿಗೆ ಆಯ್ಕೆ ಮಾಡುತ್ತಿದೆ‘ ಎಂದು ಉಲ್ಲೇಖಿಸಿದರು.

ಇತ್ತೀಚೆಗೆ ಭಾರತದ ಕ್ರಿಕೆಟ್ ತಂಡ ಆಸ್ಟ್ರೇಲಿಯಾದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ತೋರಿದ ಸಾಧನೆಯ ಬಗ್ಗೆಯೂ ಪ್ರಸ್ತಾಪಿಸಿದ ಪ್ರಧಾನಿಯವರು, ‘ತಂಡದ ಪರಿಶ್ರಮ ಹಾಗೂ ಸಾಧನೆ ಇತರರಿಗೆ ಸ್ಪೂರ್ತಿಯಾಗುವಂತದ್ದು‘ ಎಂದು ಶ್ಲಾಘಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT