ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಂ ಕೇರ್ಸ್‌ ಫಂಡ್‌ ನೆರವಿನಲ್ಲಿ 551 ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪನೆ: ಪಿಎಂಒ

Last Updated 25 ಏಪ್ರಿಲ್ 2021, 11:01 IST
ಅಕ್ಷರ ಗಾತ್ರ

ನವದೆಹಲಿ: ‘ಪಿಎಂ ಕೇರ್ಸ್‌ ಫಂಡ್‌’ನ ಹಣಕಾಸು ನೆರವಿನಲ್ಲಿ ದೇಶದಲ್ಲಿ 551 ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲಾಗುವುದು ಎಂದು ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ಭಾನುವಾರ ಹೇಳಿದೆ.

ಕೋವಿಡ್‌–19 ರೋಗಿಗಳಿಗೆ ಚಿಕಿತ್ಸೆಗಾಗಿ ಅಡೆತಡೆ ಇಲ್ಲದೇ ಪ್ರಾಣವಾಯು ಸಿಗುವಂತಾಗಬೇಕು ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನಿರ್ದೇಶನದಂತೆ, ಆಮ್ಲಜನಕ ಉತ್ಪಾದನಾ ಘಟಕಗಳ ಸ್ಥಾಪನೆಗೆ ಹಣಕಾಸು ಒದಗಿಸಲು ಪಿಎಂ ಕೇರ್ಸ್‌ ಫಂಡ್‌ ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಪಿಎಂಒ ಹೇಳಿದೆ.

ವಿವಿಧ ರಾಜ್ಯಗಳ ಆಯ್ದ ಜಿಲ್ಲಾ ಆಸ್ಪತ್ರೆಗಳಲ್ಲಿ ಈ ಘಟಕಗಳನ್ನು ಸ್ಥಾಪಿಸಲಾಗುವುದು. ಇಲ್ಲಿ ಉತ್ಪಾದನೆಯಾಗುವ ಆಮ್ಲಜನಕವನ್ನು ಆರೋಗ್ಯ ಸಚಿವಾಲಯ ಖರೀದಿಸುವುದು ಎಂದು ಪಿಎಂಒ ಪ್ರಕಟಣೆ ತಿಳಿಸಿದೆ.

ವೈದ್ಯಕೀಯ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ₹201.58 ಕೋಟಿ ಮೀಸಲು ಇರಿಸಲಾಗಿದೆ.

'ದ್ರವರೂಪಿ ಆಮ್ಲಜನಕ' (ಲಿಕ್ವಿಡ್ ಆಕ್ಸಿಜನ್) ಉತ್ಪಾದನೆಗೂ ಉತ್ತೇಜನ ನೀಡಲಾಗುವುದು. ಜತೆಗೆ, ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದು ಮತ್ತು ಪ್ರತಿಯೊಂದು ಆಸ್ಪತ್ರೆಯಲ್ಲಿಯೂ ಆಮ್ಲಜನಕ ಉತ್ಪಾದನಾ ಸೌಲಭ್ಯವನ್ನು ಹೊಂದಿದೆಯೆ ಎಂದು ಖಚಿತಪಡಿಸಿಕೊಳ್ಳುವುದು ಮುಖ್ಯ ಉದ್ದೇಶವಾಗಿದೆ ಎಂದು ಹೇಳಲಾಗಿದೆ.

ಜಿಲ್ಲೆಗಳಲ್ಲಿನ ಸರ್ಕಾರಿ ಆಸ್ಪತ್ರೆಗಳು ಆಮ್ಲಜನಕದ ಪೂರೈಕೆಯಂತಹ ಹಠಾತ್ ಅಡೆತಡೆಗಳನ್ನು ಎದುರಿಸುವ ಸಾಮರ್ಥ್ಯ ಹೊಂದಿರುವುದಿಲ್ಲ. ಇದರಿಂದ ಕೋವಿಡ್‌ ರೋಗಿಗಳು ಮತ್ತು ಆಮ್ಲಜನಕ ಅಗತ್ಯವಿರುವ ಇತರ ಅನಾರೋಗ್ಯ ಪೀಡಿತರನ್ನು ಕಾಪಾಡಿಕೊಳ್ಳುವುದು ಕಷ್ಟವಾಗುತ್ತದೆ. ಸದ್ಯದ ಪರಿಸ್ಥಿತಿಯಲ್ಲಿ ಇಂತಹ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಅನಿವಾರ್ಯವಾಗಿದೆ.

ದೇಶದಾದ್ಯಂತ ಕೋವಿಡ್‌ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು, ಕಳೆದ ಒಂದು ವಾರದಿಂದ 3 ಲಕ್ಷಕ್ಕೂ ಹೆಚ್ಚು ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗುತ್ತಿವೆ. ಜತೆಗೆ, ದೆಹಲಿ, ಉತ್ತರಪ್ರದೇಶ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ವೈದ್ಯಕೀಯ ಆಮ್ಲಜನಕ (ಆಕ್ಸಿಜನ್) ಮತ್ತು ಹಾಸಿಗೆಗಳ ಕೊರತೆ ತಲೆದೂರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT