ಮನೆ ಮನೆಗೆ ತೆರಳಿ ಲಸಿಕೆ ನೀಡುವ ಅಗತ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಸ್ತುತ ಮನೆ ಮನೆಗೆ ತೆರಳಿ ಕೋವಿಡ್ ಲಸಿಕೆ ನೀಡುವ ಅಭಿಯಾನದ ಅಗತ್ಯವಿದೆ ಎಂದು ಪ್ರತಿಪಾದಿಸಿರುವ ಪ್ರಧಾನಿ ನರೇಂದ್ರ ಮೋದಿ, ಲಸಿಕೆ ನೀಡಿಕೆಯ ಪ್ರಮಾಣವನ್ನು ಹೆಚ್ಚಿಸಲು ನವ –ನವೀನ ವಿಧಾನಗಳನ್ನು ಅಳವಡಿಸಿಕೊಳ್ಳುವಂತೆ ಲಸಿಕೆ ನೀಡಿಕೆಯಲ್ಲಿ ಹಿಂದುಳಿದಿರುವ ಜಿಲ್ಲೆಗಳ ಅಧಿಕಾರಿಗಳಿಗೆ ಸಲಹೆ ನೀಡಿದರು.
ದೇಶದಲ್ಲಿ ಲಸಿಕೆ ನೀಡಿಕೆಯಲ್ಲಿ ಹಿಂದಿರುವ 40ಕ್ಕೂ ಹೆಚ್ಚು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಬುಧವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ನಡೆದ ಸಭೆಯಲ್ಲಿ ಪ್ರಧಾನಿ ಮೋದಿಯವರು ಮಾತನಾಡಿದರು.
‘ಇಲ್ಲಿವರೆಗೂ ನೀವು ಲಸಿಕಾ ಕೇಂದ್ರದ ಬಳಿಗೆ ಜನರನ್ನು ಕರೆತರುತ್ತಿದ್ದಿರಿ. ಈಗ ನೀವೇ ಪ್ರತಿ ಮನೆಗೂ ತೆರಳಿ ಲಸಿಕೆ ನೀಡುವ ಮೂಲಕ ‘ಹರ್ ಘರ್ ದಸ್ತಕ್ ಆಂದೋಲನ‘ದೊಂದಿಗೆ ಕೈಜೋಡಿಸಬೇಕು‘ ಎಂದು ಮೋದಿ ಹೇಳಿದರು.
ಇತ್ತೀಚೆಗೆ ವ್ಯಾಟಿಕನ್ ಸಿಟಿಯಲ್ಲಿ ಪೋಪ್ ಫ್ರಾನ್ಸಿಸ್ ಅವರ ಭೇಟಿಯನ್ನು ಉಲ್ಲೇಖಿಸಿ ಮಾತನಾಡಿದ ಮೋದಿ, ‘ಲಸಿಕೆ ಅಗತ್ಯ ಕುರಿತು ಧಾರ್ಮಿಕ ನಾಯಕರ ಮೂಲಕ ಜನರಿಗೆ ಅರಿವು ಮೂಡಿಸುವ ವಿಶೇಷ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು‘ ಎಂದು ಅವರು ಹೇಳಿದರು.
ಈ ಹಿನ್ನೆಲೆಯಲ್ಲಿ ಸ್ಥಳೀಯ ಧಾರ್ಮಿಕ ನಾಯಕರ ನೆರವು ಪಡೆದು ಲಸಿಕೆ ಕುರಿತು ಜನರಲ್ಲಿ ಜಾಗೃತಿ ಮೂಡಿಸುವಂತೆ ಸಭೆಯಲ್ಲಿ ಪಾಲ್ಗೊಂಡಿದ್ದ ಜಿಲ್ಲಾಧಿಕಾರಿಗಳಿಗೆ ಪ್ರಧಾನಿ ಸೂಚಿಸಿದರು. ಲಸಿಕೆ ನೀಡಿಕೆ ಪ್ರಕ್ರಿಯೆಯನ್ನು ಚುರುಕುಗೊಳಿಸುವುದಕ್ಕೆ ನೂತನ ವಿಧಾನಗಳನ್ನು ಅನಸುರಿಸುವ ಕುರಿತೂ ಅವರು ಒತ್ತಿ ಹೇಳಿದರು.
ಶೇ 50ಕ್ಕಿಂತ ಕಡಿಮೆ ಪ್ರಮಾಣದಲ್ಲಿ ಮೊದಲ ಡೋಸ್ ಪಡೆದಿರುವ ಮತ್ತು ಕಡಿಮೆ ಪ್ರಮಾಣದಲ್ಲಿ ಎರಡನೇ ಡೋಸ್ ಪಡೆದಿರುವ ಜಿಲ್ಲೆಗಳ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಜಾರ್ಖಂಡ್, ಮಣಿಪುರ, ನಾಗಾಲ್ಯಾಂಡ್, ಅರುಣಾಚಲ ಪ್ರದೇಶ, ಮಹಾರಾಷ್ಟ್ರ ಮತ್ತು ಮೇಘಾಲಯ ಸೇರಿದಂತೆ ಕೆಲವು ರಾಜ್ಯಗಳ 40 ಜಿಲ್ಲೆಗಳಲ್ಲಿ ಲಸಿಕೆ ನೀಡಿಕೆ ಪ್ರಮಾಣ ಶೇ 50ಕ್ಕಿಂತ ಕಡಿಮೆ ಇದೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ತಿಳಿಸಿದೆ.
ಮಹಾರಾಷ್ಟ್ರದ ಉದ್ಧವ್ ಠಾಕ್ರೆ ಮತ್ತು ಛತ್ತೀಸ್‌ಗಡದ ಭೂಪೇಶ್ ಬಘೇಲ್ ಸೇರಿದಂತೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೂ ಸಭೆಯಲ್ಲಿ ಉಪಸ್ಥಿತರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.