ಮಂಗಳವಾರ, ಮಾರ್ಚ್ 28, 2023
32 °C

ಕೋವಿಡ್ ಪರಿಸ್ಥಿತಿ ಪರಿಶೀಲನೆ: 22ನೇ ಸಲ ಡಿಡಿಎಂಎ ಸಭೆ ಕರೆದ ದೆಹಲಿ ಗವರ್ನರ್

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್-19 ಸ್ಥಿತಿಗತಿ ಹಾಗೂ ಮುಂಬರುವ ದಿನಗಳಲ್ಲಿ ಕೈಗೊಳ್ಳಬೇಕಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಲೆಫ್ಟಿನೆಂಟ್‌ ಗವರ್ನರ್‌ ಅನಿಲ್‌ ಬೈಜಲ್‌ ಅವರು 22ನೇ ಬಾರಿಗೆ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಡಿಡಿಎಂಎ) ಸಭೆ ಕರೆದಿದ್ದಾರೆ.

ಸಭೆ ಬಳಿಕ ಸರಣಿ ಟ್ವೀಟ್‌ಗಳನ್ನು ಮಾಡಿರುವ ಬೈಜಲ್‌, ಮುಂಬರುವ ದಿನಗಳಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗದಂತೆ ತಡೆಯುವುದೂ ಸೇರಿದಂತೆ, ತಜ್ಞರ ಸಲಹೆಯಂತೆ ಸಾಕಷ್ಟು ಪ್ರಮಾಣದಲ್ಲಿ ಐಸಿಯು ಮತ್ತು ಆಮ್ಲಜನಕವುಳ್ಳ ಹಾಸಿಕೆಗಳ ಲಭ್ಯತೆ, ಸಿಬ್ಬಂದಿ, ಔಷಧಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವುದಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆಗೆ ಸೂಚಿಸಲಾಗಿದೆ. ಹಾಗೆಯೇ ನಗರದ ಎಲ್ಲರಿಗೂ ಲಸಿಕೆ ಪೂರೈಸಲು ಸಂಪೂರ್ಣ ಪ್ರಯತ್ನ ನಡೆಸುವಂತೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಕೋವಿಡ್‌ ಪ್ರಕರಣ ಹೆಚ್ಚಾಗದಂತೆ ನೋಡಿಕೊಳ್ಳಲು, ಪರೀಕ್ಷೆ ಮತ್ತು ಚಿಕಿತ್ಸೆ ಮುಂದುವರಿಸುವುದರೊಟ್ಟಿಗೆ ಕಂಟೈನ್‌ಮೆಂಟ್‌ ವಲಯಗಳನ್ನು ಸ್ಥಾಪಿಸುವಂತೆ ಸಲಹೆ ನೀಡಲಾಗಿದೆ. ಕೋವಿಡ್‌ ನಿಯಂತ್ರಣದ ಸಲುವಾಗಿ ಸಾರ್ವಜನಿಕರು ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಚ್ಚರ ವಹಿಸುವಂತೆಯೂ ಸೂಚಿಸಲಾಗಿದೆ ಎಂದೂ ಬೈಜಲ್‌ ಮಾಹಿತಿ ನೀಡಿದ್ದಾರೆ.

ವರ್ಚುವಲ್‌ ಸಭೆಯಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌, ಸಚಿವರಾದ ಕೈಲಾಶ್‌ ಗೆಹ್ಲೋಟ್‌, ನೀತಿ ಆಯೋಗದ ಡಾ. ವಿ.ಕೆ.ಪೌಲ್‌, ದೆಹಲಿ ಪೊಲೀಸ್‌ ಆಯುಕ್ತ ಬಾಲಾಜಿ ಶ್ರೀವಾಸ್ತವ, ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್‌) ನಿರ್ದೇಶಕ ಡಾ. ರಣದೀಪ್‌ ಗುಲೇರಿಯಾ, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಪ್ರಧಾನ ನಿರ್ದೇಶಕ ಡಾ. ಬಲರಾಮ್‌ ಭಾರ್ಗವ ಮತ್ತಿತರರು ಭಾಗವಹಿಸಿದ್ದರು.

ರಾಜ್ಯ ಆರೋಗ್ಯ ಇಲಾಖೆ ಶುಕ್ರವಾರ ಪ್ರಕಟಿಸಿರುವ ಮಾಹಿತಿ ಪ್ರಕಾರ, ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 81 ಹೊಸ ಪ್ರಕರಣಗಳು ವರದಿಯಾಗಿದ್ದು, ಮೂರು ಮಂದಿ ಮೃತಪಟ್ಟಿದ್ದಾರೆ. 127 ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಇನ್ನೂ 798 ಪ್ರಕರಣಗಳು ಸಕ್ರಿಯವಾಗಿವೆಯಾದರೂ, ಸೋಂಕು ದೃಢಪಡುವ ಪ್ರಮಾಣ ಶೇ. 0.11ಕ್ಕೆ ತಗ್ಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು