ಶುಕ್ರವಾರ, ಅಕ್ಟೋಬರ್ 30, 2020
24 °C

ಕೃಷಿ ಮಸೂದೆಗಳ ವಿರುದ್ಧ ನಿಂತ ಕಾಂಗ್ರೆಸ್‌ಗೆ ಅದರದ್ದೇ ಪ್ರಣಾಳಿಕೆ ಮೂಲಕ ತಿರುಗೇಟು

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ದೆಹಲಿ: ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಮಸೂದೆಗಳ ವಿರುದ್ಧ ನಿಂತಿರುವ ಕಾಂಗ್ರೆಸ್‌ಗೆ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್‌ ಅವರು 2019ರ ಲೋಕಸಭೆ ಚುನಾವಣೆಯ ಕಾಂಗ್ರೆಸ್‌ ಪ್ರಣಾಳಿಕೆಯ ಮೂಲಕವೇ ಮಂಗಳವಾರ ತಿರುಗೇಟು ನೀಡಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ‘2019ರ ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆಯ 7ನೇ ವಿಭಾಗದ, ಪುಟ 9 ರಿಂದ: ಕೃಷಿ ಉತ್ಪಾದನಾ ಮಾರುಕಟ್ಟೆ ಸಮಿತಿಗಳ ಕಾಯ್ದೆಯನ್ನು ಕಾಂಗ್ರೆಸ್ ರದ್ದುಪಡಿಸುತ್ತದೆ ಮತ್ತು ಕೃಷಿ ಉತ್ಪನ್ನಗಳ ರಫ್ತು ಹಾಗೂ ಅಂತರರಾಜ್ಯ ವ್ಯಾಪಾರವನ್ನು ಎಲ್ಲಾ ನಿರ್ಬಂಧಗಳಿಂದ ಮುಕ್ತಗೊಳಿಸುತ್ತದೆ,’ ಎಂದು ಪ್ರಣಾಳಿಕೆಯಲ್ಲಿ ಹೇಳಿದೆ. ಹಾಗಿದ್ದರೆ, ಕಾಂಗ್ರೆಸ್‌ 2019ರ ಲೋಕಸಭೆ ಚುನಾವಣೆಯಲ್ಲಿ ಜನರಿಗೆ ಸುಳ್ಳು ಆಶ್ವಾಸನೆ ನೀಡಿತ್ತೇ? ಎಂದು ಅವರು ಪ್ರಶ್ನೆ ಮಾಡಿದ್ದಾರೆ.

‘2019ರಲ್ಲಿ ಸುಳ್ಳು ಆಶ್ವಾಸನೆ ನೀಡಿದ್ದ ಕಾಂಗ್ರೆಸ್‌, ಕೇಂದ್ರದ ಕಾಯ್ದೆಗಳಿಗೆ ಪ್ರತಿಯಾಗಿ ಕಾನೂನು ರಚಿಸುವಂತೆ ಈಗ ಹೇಳಿ ಜನರನ್ನು ಪ್ರಚೋದಿಸುತ್ತಿದೆಯೇ? ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರಿಗೆ ಯಾರು ಸಲಹೆ ನೀಡುತ್ತಿದ್ದಾರೆ ಎಂಬುದರ ಬಗ್ಗೆ ಆಶ್ಚರ್ಯವಾಗುತ್ತಿದೆ,’ ಎಂದು ನಿರ್ಮಲಾ ಸೀತಾರಾಮನ್‌ ಟ್ವೀಟ್‌ ಮಾಡಿದ್ದಾರೆ.

ಕಾಂಗ್ರೆಸ್‌ ಪ್ರಣಾಳಿಕೆ 

ಸೋನಿಯಾ ನೀಡಿದ್ದ ಸಲಹೆ ಏನು?

ಕೇಂದ್ರ ಸರ್ಕಾರ ರೂಪಿಸಿರುವ ಮೂರು ಕೃಷಿ ಕಾನೂನುಗಳ ವ್ಯಾಪ್ತಿಯಿಂದ ರಾಜ್ಯಗಳನ್ನು ಹೊರಗಿಡಲು ಸಾಧ್ಯವಾಗುವಂತೆ ರಾಜ್ಯಮಟ್ಟದಲ್ಲಿ ಕಾನೂನು ರಚಿಸುವ ಸಾಧ್ಯತೆಗಳ ಬಗ್ಗೆ ಚಿಂತನೆ ನಡೆಸುವಂತೆ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕಾಂಗ್ರೆಸ್‌ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸೋಮವಾರ ಸಲಹೆ ನೀಡಿದ್ದಾರೆ.

‘ಕಾಂಗ್ರೆಸ್‌ ಆಡಳಿತವಿರುವ ಪಂಜಾಬ್‌, ಛತ್ತೀಸ್‌ಗಡ, ರಾಜಸ್ಥಾನ ಹಾಗೂ ಪುದುಚೇರಿ ಸರ್ಕಾರಗಳಿಗೆ ಈ ಬಗ್ಗೆ ಪತ್ರಗಳನ್ನು ಕಳುಹಿಸಲಾಗಿದೆ. ಕೇಂದ್ರ ಸರ್ಕಾರವು ಜಾರಿ ಮಾಡಿರುವ ಕೃಷಿ ಕಾನೂನುಗಳು ರೈತವಿರೋಧಿಯಾಗಿದ್ದು, ಅವು ಜಾರಿಯಾಗದಂತೆ ಸಂವಿಧಾನದ 254(2)ನೇ ವಿಧಿಯಡಿ ಕಾನೂನುಗಳನ್ನು ರಚಿಸಬೇಕು. ಹೀಗೆ ಮಾಡಿದರೆ, ಮೂರು ಕೃಷಿ ಕಾನೂನುಗಳ ರೈತವಿರೋಧಿ ನೀತಿಗಳಿಂದ ರೈತರನ್ನು ರಕ್ಷಿಸಲು ಸಾಧ್ಯವಾಗಲಿದೆ ಎಂದು ಸೋನಿಯಾ ಸಲಹೆ ನೀಡಿದ್ದಾರೆ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು