ಹಣ ಅಕ್ರಮ ವರ್ಗಾವಣೆ ಪ್ರಕರಣ: ದೆಹಲಿ ಸಚಿವ ಸತ್ಯೇಂದ್ರ ಜೈನ್ ಬಂಧನ

ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ಸಚಿವ ಸತ್ಯೇಂದ್ರ ಜೈನ್ ಅವರನ್ನು ಜಾರಿ ನಿರ್ದೇಶನಾಲಯವು (ಇ.ಡಿ.) ಸೋಮವಾರ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಬಂಧನವು ರಾಜಕೀಯ ತಿರುವು ಪಡೆದುಕೊಂಡಿದೆ. ‘ಎಂಟು ವರ್ಷ ಹಳೆಯ ‘ಹುಸಿ’ ಪ್ರಕರಣದಲ್ಲಿ ಸತ್ಯೇಂದ್ರ ಜೈನ್ ಅವರನ್ನು ಬಂಧಿಸಲಾಗಿದೆ. ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಎಎಪಿ ಉಸ್ತುವಾರಿಯಾಗಿ ಸತ್ಯೇಂದ್ರ ಅವರು ಇದ್ದಾರೆ. ಅಲ್ಲಿ ಚುನಾವಣೆ ಸೋಲುವ ಭೀತಿಯಲ್ಲಿರುವ ಬಿಜೆಪಿ, ಹೀಗೆ ಮಾಡಿದೆ’ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಟೀಕಿಸಿದ್ದಾರೆ.
ಜೈನ್ ಮತ್ತು ಅವರ ಕುಟುಂಬದ ಒಡೆತನದ ಕಂಪನಿಗಳಿಗೆ ಸೇರಿದ ₹4.81 ಕೋಟಿ ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಇ.ಡಿ. ಇತ್ತೀಚೆಗೆ ಹೇಳಿತ್ತು.
ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿ ಜೈನ್ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಜೈನ್ ಅವರು ದೆಹಲಿಯ ಆರೋಗ್ಯ, ಕೈಗಾರಿಕೆ, ವಿದ್ಯುತ್, ಗೃಹ, ನಗರಾಭಿವೃದ್ಧಿ ಮತ್ತು ಜಲಸಂಪನ್ಮೂಲ ಸಚಿವರಾಗಿದ್ದಾರೆ.
ಹಿಮಾಚಲ ಪ್ರದೇಶ ವಿಧಾನಸಭೆಗೆ ಈ ವರ್ಷ ಚುನಾವಣೆ ನಡೆಯಲಿದೆ. ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಭಾರಿ ಗೆಲುವು ಪಡೆದಿರುವ ಎಎಪಿ, ಹಿಮಾಚಲದಲ್ಲಿಯೂ ಛಾಪು ಮೂಡಿಸುವ ನಿರೀಕ್ಷೆಯಲ್ಲಿದೆ. ಪಂಜಾಬ್ ಚುನಾವಣೆಗೆ ಮೊದಲೇ ಜೈನ್ ಅವರನ್ನು ಇ.ಡಿ. ಬಂಧಿಸಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಜನವರಿಯಲ್ಲಿಯೇ ಹೇಳಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.