ನವದೆಹಲಿ: ದೆಹಲಿ ಅಬಕಾರಿ ಹಗರಣದಲ್ಲಿ ಹಣ ಅಕ್ರಮ ವರ್ಗಾವಣೆ ಆರೋಪ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಸಹಾಯಕ ವಿಭವ್ ಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.
ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿ ವಿಭವ್ ಕುಮಾರ್ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಗರಣದಲ್ಲಿ ಸಾವಿರಾರು ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಡೆದುಕೊಂಡಿರುವ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ, ವಿಭವ್ ಕುಮಾರ್ ಸೇರಿ 36 ಆರೋಪಿಗಳು ಸಾಕ್ಷ್ಯಗಳನ್ನು ಮುಚ್ಚಿ ಹಾಕಲು 170 ಫೋನ್‌ಗಳನ್ನು ನಾಶ ಮಾಡಿದ್ದಾರೆ ಎಂದು ಇ.ಡಿ, ನ್ಯಾಯಾಲಯದ ಮುಂದೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಈ ವಿಚಾರಣೆ ನಡೆದಿದೆ.
ಪ್ರಕರಣ ಸಂಬಂಧ ಈವರೆಗೆ ಎರಡು ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿರುವ ಜಾರಿ ನಿರ್ದೇಶನಾಲಯವು, 9 ಮಂದಿಯನ್ನು ಬಂಧಿಸಿದೆ.
ಪ್ರಕರಣದಲ್ಲಿ ₹100 ಕೋಟಿ ಕಿಕ್ ಬ್ಯಾಕ್ ಪಡೆದು ಆ ಹಣವನ್ನು 2022ರ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಕೇಜ್ರಿವಾಲ್ ನೇತೃತ್ವದ ಎಎಪಿ ಪ್ರಚಾರಕ್ಕೆ ಬಳಸಲಾಗಿದೆ ಎಂದು ದೋಷಾರೋಪ ಪಟ್ಟಿಯಲ್ಲಿ ಇ.ಡಿ ಉಲ್ಲೇಖಿಸಿತ್ತು.
2021–22ರ ಅಬಕಾರಿ ನೀತಿಯನ್ನು ಕಳೆದ ವರ್ಷದ ಆಗಸ್ಟ್ ತಿಂಗಳಲ್ಲಿ ರದ್ದು ಮಾಡಲಾಗಿತ್ತು. ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ದೆಹಲಿಯ ಲೆಫ್ಟಿನೆಂಟ್ ಗವರ್ನರ್, ಸಿಬಿಐಗೆ ಸೂಚಿಸಿದ್ದರು.
ಸಿಬಿಐ ಎಫ್‌ಐಆರ್ ಆಧರಿಸಿ ಇ.ಡಿ ತನಿಖೆ ನಡೆಸುತ್ತಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.