ನವದೆಹಲಿ: ಆರ್‌ಜೆಡಿ ವರಿಷ್ಠ ಲಾಲು ಪ್ರಸಾದ್ ಮತ್ತು ಅವರ ಕುಟುಂಬ ಸದಸ್ಯರ ನಿವಾಸಗಳಲ್ಲಿ ಶೋಧ ನಡೆಸಿ ದಾಖಲೆ ಇಲ್ಲದ ₹ 1 ಕೋಟಿ ನಗದು ಜಪ್ತಿ ಮಾಡಿದ್ದು, ₹ 600 ಕೋಟಿ ಅಕ್ರಮ ವಹಿವಾಟು ನಡೆಸಿರುವುದನ್ನು ಪತ್ತೆ ಹಚ್ಚಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ತಿಳಿಸಿದ್ದಾರೆ.
ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಸಿಬಿಐ ವಿಚಾರಣೆಗೆ ಎರಡನೇ ಬಾರಿಗೆ ಗೈರು ಹಾಜರಾಗಿದ್ದು, ವೈಯಕ್ತಿಕ ಕಾರಣ ಉಲ್ಲೇಖಿಸಿ ಹೊಸ ದಿನಾಂಕ ಕೋರಿದ್ದಾರೆ ಎಂದು ಶನಿವಾರ ಅಧಿಕಾರಿಗಳು ತಿಳಿಸಿದ್ದಾರೆ.
ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ 24 ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿ, 1900 ಡಾಲರ್, 540 ಗ್ರಾಂ ಚಿನ್ನದ ಗಟ್ಟಿ ಮತ್ತು 1.5 ಕೆ.ಜಿ.ಗೂ ಹೆಚ್ಚು ಚಿನ್ನಾಭರಣ ಸೇರಿದಂತೆ ವಿದೇಶಿ ಕರೆನ್ಸಿಯನ್ನು ವಶಪಡಿಸಿಕೊಳ್ಳಲಾಗಿದೆ.
‘ಸುಮಾರು ₹ 600 ಕೋಟಿ ಅಕ್ರಮ ವಹಿವಾಟು ನಡೆಸಿರುವುದು ಪತ್ತೆ ಹಚ್ಚಲಾಗಿದೆ’ ಎಂದು ಇ.ಡಿ ಟ್ವೀಟ್ ಮಾಡಿದೆ.
ಮಾರ್ಚ್ 4 ರಂದು ವಿಚಾರಣೆಗೆ ಗೈರು ಹಾಜರಾದ ಹಿನ್ನಲೆಯಲ್ಲಿ ಶನಿವಾರ ಹಾಜರಾಗುವಂತೆ ತೇಜಸ್ವಿಗೆ ಸಿಬಿಐ ನೋಟಿಸ್ ಜಾರಿಗೊಳಿಸಿತ್ತು.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗಷ್ಟೇ ಸಿಬಿಐ ಆರ್‌ಜೆಡಿ ವರಿಷ್ಠ ಲಾಲು ಪ್ರಸಾದ್ ಮತ್ತು ಅವರ ಪತ್ನಿ ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ಡಿ ದೇವಿ ಅವರನ್ನು ವಿಚಾರಣೆಗೆ ಒಳಪಡಿಸಿತ್ತು.
ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಲಾಲು ಪ್ರಸಾದ್ , ‘ತಮ್ಮ ಹೆಣ್ಣುಮಕ್ಕಳು, ಮೊಮ್ಮಕ್ಕಳು ಮತ್ತು ಗರ್ಭಿಣಿ ಸೊಸೆಯನ್ನು ಆಧಾರರಹಿತ ಸೇಡಿನ ಪ್ರಕರಣಗಳಲ್ಲಿ 15 ಗಂಟೆ ಕಾಲ ಸುಮ್ಮನೆ ಕೂರಿಸುವ ಮೂಲಕ ಬಿಜೆಪಿ ಕೀಳು ಮಟ್ಟಕ್ಕೆ ಇಳಿದಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.