ಗುರುವಾರ , ನವೆಂಬರ್ 26, 2020
20 °C
ಹೈಕೋರ್ಟ್‌ ತೀರ್ಪು ಆಧರಿಸಿ ಫಲಿತಾಂಶ: ‘ಸುಪ್ರೀಂ’

ನಿಗದಿಯಂತೆ ಸ್ಥಳೀಯ ಸಂಸ್ಥೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ನಿಗದಿಯಂತೆಯೇ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್‌ ಬುಧವಾರ ಸೂಚಿಸಿದೆ.

ಆದರೆ, ರಾಜ್ಯ ಸರ್ಕಾರದ ಮೀಸಲಾತಿ ಪಟ್ಟಿಯನ್ನು ವಿರೋಧಿಸಿ ಸಲ್ಲಿಸಲಾದ ರಿಟ್‌ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್‌ನ ಏಕ ಸದಸ್ಯ ಪೀಠ ತೀರ್ಪು ನೀಡುವವರೆಗೆ ಚುನಾವಣೆಯ ಫಲಿತಾಂಶ ಪ್ರಕಟಿಸದಂತೆ ನ್ಯಾಯಮೂರ್ತಿಗಳಾದ ಎ.ಎಂ. ಖನ್ವಿಲ್ಕರ್‌ ನೇತೃತ್ವದ ತ್ರಿಸದಸ್ಯ ಪೀಠವು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ಒಂದು ತಿಂಗಳೊಳಗೆ ರಿಟ್‌ ಅರ್ಜಿಯ ವಿಚಾರಣೆ ಪೂರ್ಣಗೊಳಿಸುವಂತೆ ಹೈಕೋರ್ಟ್‌ನ ಏಕ ಸದಸ್ಯ ಪೀಠಕ್ಕೆ ಸೂಚಿಸಿರುವ ಪೀಠ, ನಿಗದಿಯಂತೆ ಚುನಾವಣೆ ನಡೆಯಲಿ. ಆದರೆ, ಹೈಕೋರ್ಟ್‌ನ ತೀರ್ಪನ್ನು ಆಧರಿಸಿ ಚುನಾವಣೆಯ ಫಲಿತಾಂಶವನ್ನು ಪ್ರಕಟಿಸುವ ನಿರ್ಧಾರ ಕೈಗೊಳ್ಳಬೇಕು ಎಂದು ಹೇಳಿದೆ.

ಹೈಕೋರ್ಟ್‌ನ ದ್ವಿಸದಸ್ಯ ಪೀಠದ ಆದೇಶಕ್ಕೆ ಸಂಬಂಧಿಸಿದಂತೆ ಮಧ್ಯಸ್ಥಿಕೆ ವಹಿಸಲಾಗದು ಎಂದೂ ನ್ಯಾಯಮೂರ್ತಿಗಳಾದ ದಿನೇಶ್‌ ಮಾಹೇಶ್ವರಿ ಹಾಗೂ ಸಂಜೀವ್‌ ಖನ್ನಾ ಅವರಿದ್ದ ಪೀಠ ಅಭಿಪ್ರಾಯಪಟ್ಟಿದೆ.

ನವೆಂಬರ್‌ 2ರೊಳಗೆ ಅಧ್ಯಕ್ಷ– ಉಪಾಧ್ಯಕ್ಷ ಸ್ಥಾನದ ಚುನಾವಣೆ ನಡೆಸಲು ಅನುಮತಿ ನೀಡಿ ರಾಜ್ಯ ರ್ಹೈಕೋರ್ಟ್‌ನ ವಿಭಾಗೀಯ ಪೀಠ ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.

ರಾಜ್ಯದ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯ್ತಿಗಳ ಅಧ್ಯಕ್ಷ– ಉಪಾಧ್ಯಕ್ಷ ಸ್ಥಾನದ ಮೀಸಲು ನಿಗದಿಪಡಿಸಿ ಸರ್ಕಾರ ಅಕ್ಟೋಬರ್‌ 8ರಂದು ಆದೇಶ ಹೊರಡಿಸಿತ್ತು. ಆದರೆ, ಹಾಸನ ಮತ್ತು ಅರಸೀಕೆರೆ ನಗರಸಭೆಗಳ ಮೀಸಲು ನಿಗದಿ ವೇಳೆ ರೋಟೇಷನ್‌ ಪದ್ಧತಿ ಅನುಸರಿಸಿಲ್ಲ ಎಂದು ದೂರಿ ದಿನೇಶ್‌ ಬಾಬು, ಚಂದ್ರೇಗೌಡ, ಪಂಕಜಾ ಹಾಗೂ ಸಮೀವುಲ್ಲಾ ಮತ್ತಿತರರು ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದರು.

ಹೈಕೋರ್ಟ್‌ನ ಏಕ ಸದಸ್ಯ ಪೀಠವು ಮೀಸಲು ಪಟ್ಟಿಗೆ ತಡೆ ನೀಡಿತ್ತು. ಆದರೆ, ವಿಭಾಗೀಯ ಪೀಠವು ತಡೆಯನ್ನು ರದ್ದುಗೊಳಿಸಿ ಚುನಾವಣೆ ನಡೆಸುವಂತೆ ಅಕ್ಟೋಬರ್‌ 21ರಂದು ಆದೇಶಿಸಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು