ಮಂಗಳವಾರ, ಏಪ್ರಿಲ್ 20, 2021
32 °C

ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಹೇರಿಕೆ 'ತಪ್ಪು ನಿರ್ಣಯ': ರಾಹುಲ್ ಗಾಂಧಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: 1975ರಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ದೇಶದಲ್ಲಿ ಹೇರಿದ್ದ ತುರ್ತು ಪರಿಸ್ಥಿತಿಯನ್ನು 'ತಪ್ಪು ನಿರ್ಣಯ' ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ.

ಅಲ್ಲದೆ ಕಾಂಗ್ರೆಸ್ ಯಾವುದೇ ಹಂತದಲ್ಲಿ ದೇಶದ ಸಾಂವಿಧಾನಿಕ ಚೌಕಟ್ಟನ್ನು ವಶಪಡಿಸಲು ಪ್ರಯತ್ನಿಸಲಿಲ್ಲ ಎಂದು ಹೇಳಿದರು.

ಅಮೆರಿಕದ ಕಾರ್ನೆಲ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮತ್ತು ಭಾರತದ ಮಾಜಿ ಮುಖ್ಯ ಆರ್ಥಿಕ ಸಲಹೆಗಾರ ಕೌಶಿಕ್ ಬಸು ಅವರೊಂದಿಗಿನ ಸಂವಾದದಲ್ಲಿ, ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಸಂವಿಧಾನವನ್ನು ನೀಡಿದ, ಸಮಾನತೆಗಾಗಿ ನಿಂತ ಕಾಂಗ್ರೆಸ್‌ನ ಆಂತರಿಕ ಪ್ರಜಾಪ್ರಭುತ್ವವನ್ನು ಬೆಂಬಲಿಸುವುದಾಗಿ ತಿಳಿಸಿದರು.

ತುರ್ತು ಪರಿಸ್ಥಿತಿ ಬಗ್ಗೆ ಅಭಿಪ್ರಾಯ ಕೇಳಿದಾಗ, ಅದು ತಪ್ಪು ನಿರ್ಧಾರ ಎಂದು ನಾನು ಭಾವಿಸುತ್ತೇನೆ. ನಿಸ್ಸಂಶವಾಗಿಯೂ ಅದೊಂದು ತಪ್ಪಾದ ನಿರ್ಣಯ. ನನ್ನ ಅಜ್ಜಿ (ಇಂದಿರಾ ಗಾಂದಿ) ಇದನ್ನೇ ಹೇಳಿದ್ದರು ಎಂದು ಉಲ್ಲೇಖ ಮಾಡಿದರು. 

ಹಾಗಿದ್ದರೂ ಅಂದಿನ ತುರ್ತು ಪರಿಸ್ಥಿತಿ ಹಾಗೂ ಈಗ ದೇಶದಲ್ಲಿ ನಡೆಯುತ್ತಿರುವ ಸನ್ನವೇಶಗಳು ಮೂಲಭೂತವಾಗಿ ವಿಭಿನ್ನವಾಗಿವೆ ಎಂದು ಹೇಳಿದರು.

ಭಾರತದ ಸಾಂವಿಧಾನಿಕ ಚೌಕಟ್ಟನ್ನು ವಶಪಡಿಸಲು ಕಾಂಗ್ರೆಸ್ ಪಕ್ಷವು ಯಾವ ಹಂತದಲ್ಲೂ ಪ್ರಯತ್ನಿಸಲಿಲ್ಲ. ನಿಜವಾಗಿ ಹೇಳಬೇಕೆಂದರೆ ಕಾಂಗ್ರೆಸ್ ಪಕ್ಷಕ್ಕೆ ಅಂತಹ ಸಾಮರ್ಥ್ಯವೂ ಇಲ್ಲ. ನಮ್ಮ ವ್ಯವಸ್ಥೆಯು ಅದನ್ನು ಅನುಮತಿಸುವುದಿಲ್ಲ ಮತ್ತು ನಾವು ಬಯಸಿದರೂ ಅದನ್ನು ಮಾಡಲು ಸಾಧ್ಯವಿಲ್ಲ ಎಂದರು.

ಇದನ್ನೂ ಓದಿ: 

ಈ ನಡುವೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್), ಮೂಲಭೂತಕ್ಕೆ ವಿಭಿನ್ನವಾಗಿ ದೇಶದ ಸಾಂವಿಧಾನಿಕ ವ್ಯವಸ್ಥೆಗೆ ತನ್ನ ಜನರನ್ನು ತುಂಬುವ ಪ್ರಯತ್ನ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದರು.

ಆದ್ದರಿಂದ, ನಾವು ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿದರೂ ಸಾಂವಿಧಾನಿಕ ಚೌಕಟ್ಟಿನಲ್ಲಿ ಆರ್‌ಎಸ್‌ಎಸ್ ಜನರಿಂದ ಮುಕ್ತಿ ಪಡೆಯಲು ಸಾಧ್ಯವಿಲ್ಲ ಎಂದು ಹೇಳಿದರು.

1975ರಿಂದ 1977ರ ವರೆಗೆ 21 ತಿಂಗಳುಗಳ ಕಾಲ ಅಂದಿನ ಪ್ರಧಾನಿ ಇಂದಿರಾ ಗಾಂಧಿ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದರು. ಅಲ್ಲದೆ ದೇಶದ ನಾಗರಿಕರ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳಲಾಗಿತ್ತು.

1991ರಲ್ಲಿ ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಯ ಬಗ್ಗೆ ಕೇಳಿದಾಗ, ಇದು ನನಗೆ ಹಿಂಸಾಚಾರವನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಯಿತು ಎಂದು ರಾಹುಲ್ ಗಾಂಧಿ ಹೇಳಿದರು.

ಅಂದು ಅಪ್ಪ ವಿರೋಧಿ ಶಕ್ತಿಗಳ ವಿರುದ್ಧ ಹೋರಾಡುತ್ತಿದ್ದರು. ಇದರಿಂದ ಹತ್ಯೆಗೈಯಲಾಗಿತ್ತು ಎಂದು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು