ದೆಹಲಿ ಅಬಕಾರಿ ನೀತಿ ಪ್ರಕರಣ: ಸಾಕ್ಷಿಯಾಗಿ ದಿನೇಶ್ ಅರೋರಾ– ಕೋರ್ಟ್ ಒಪ್ಪಿಗೆ

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಆರೋಪಿಯಾಗಿರುವ ಉದ್ಯಮಿ ದಿನೇಶ್ ಅರೋರಾ ಅವರನ್ನು ಸಾಕ್ಷಿಯನ್ನಾಗಿ ಪರಿಗಣಿಸುವಂತೆ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಬುಧವಾರ ಅಂಗೀಕರಿಸಿದೆ ಎಂದು ಕೋರ್ಟಿನ ಮೂಲಗಳು ತಿಳಿಸಿವೆ.
ವಿಶೇಷ ನ್ಯಾಯಮೂರ್ತಿ ಎಂ.ಕೆ. ನಾಗಪಾಲ್ ಅವರು ಅರೋರಾ ಅವರಿಗೆ ಕ್ಷಮಾದಾನದ ಆದೇಶವನ್ನೂ ನೀಡಿದ್ದಾರೆ.
ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ಅರೋರಾ ಅವರು, ತಾವು ಸ್ವಯಂಪ್ರೇರಣೆಯಿಂದ ನಿಜ ಹೇಳಲು ಸಿದ್ಧವಿರುವುದಾಗಿ ಹಾಗೂ ಪ್ರಕರಣದಲ್ಲಿ ಸಾಕ್ಷಿಯಾಗಲು ಸಿದ್ಧವಿರುವುದಾಗಿ ನ್ಯಾಯಾಲಯದ ಮುಂದೆ ಹೇಳಿದ್ದಾರೆ.
ಈ ಹಿಂದೆ ನ್ಯಾಯಾಲಯವು ಅರೋರಾ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಇದಕ್ಕೆ ಸಂಬಂಧಿಸಿದಂತೆ ಸಿಬಿಐ, ‘ಅರೋರಾ ಅವರು ತನಿಖೆಯಲ್ಲಿ ಪ್ರಮುಖ ಸಂಗತಿಗಳನ್ನು ಬಹಿರಂಗಪಡಿಸಿದ್ದಾರೆ. ಹಾಗಾಗಿ, ಅವರಿಗೆ ನಿರೀಕ್ಷಣಾ ಜಾಮೀನು ನೀಡಿದರೆ ತಮಗೆ ಯಾವುದೇ ಅಭ್ಯಂತರವಿಲ್ಲ’ ಎಂದು ನ್ಯಾಯಾಲಯದ ಮುಂದೆ ಹೇಳಿತ್ತು.
ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಅರೋರಾ ಆಪ್ತರಾಗಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.