ಶುಕ್ರವಾರ, ಅಕ್ಟೋಬರ್ 22, 2021
21 °C

ಲಖಿಂಪುರ ಹಿಂಸಾಚಾರ: ಮೃತ ರೈತನಿಗೆ ಎರಡನೇ ಬಾರಿ ಮರಣೋತ್ತರ ಪರೀಕ್ಷೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಬಹ್ರೇಚ್‌ (ಉತ್ತರ ಪ್ರದೇಶ): ಲಖಿಂಪುರ್‌ ಖೇರಿ ಹಿಂಸಾಚಾರದಲ್ಲಿ ಮೃತಪಟ್ಟ ನಾಲ್ವರು ರೈತರಲ್ಲಿ ಒಬ್ಬರಾದ ಗುರ್ವಿಂದರ್‌ ಸಿಂಗ್‌ (22) ಅವರ ಮೃತದೇಹವನ್ನು ಎರಡನೇ ಬಾರಿಗೆ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಯಿತು. ಬಳಿಕ ಬುಧವಾರ ಬೆಳಿಗ್ಗೆ ಅವರ ಅಂತ್ಯಕ್ರಿಯೆ ನಡೆಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಯುವಕನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಆರೋಪಿಸಿದ ಅವರ ಕುಟುಂಬದವರು, ಅಂತ್ಯಕ್ರಿಯೆ ನಡೆಸಲು ನಿರಾಕರಿಸಿದ್ದರು. ಮರಣೋತ್ತರ ಪರೀಕ್ಷೆಯಲ್ಲಿ ಈ ಕುರಿತು ಯಾವುದೇ ಉಲ್ಲೇಖ ಇರಲಿಲ್ಲ. ಆದ್ದರಿಂದ ಗುರ್ವಿಂದರ್‌ ಸಿಂಗ್‌ ಕುಟುಂಬದವರು ರೈತ ನಾಯಕರಾದ ರಾಕೇಶ್‌ ಟಿಕಾಯತ್‌ ಮತ್ತು ಪಂಜಾಬಿ ಗಾಯಕ ಸೋನಿಯಾ ಮಾನ್‌ ಅವರ ನೆರವಿನೊಂದಿಗೆ ಆಕ್ಷೇಪಣೆ ಸಲ್ಲಿಸಿದ್ದರು.

ಇವರ ಬೇಡಿಕೆಯನ್ನು ಮಾನ್ಯ ಮಾಡಿದ ಸರ್ಕಾರ, ಮತ್ತೊಮ್ಮೆ ಮರಣೋತ್ತರ ಪರೀಕ್ಷೆಗೆ ವ್ಯವಸ್ಥೆ ಮಾಡಿತು.
ಲಖನೌದಿಂದ ಮಂಗಳವಾರ ರಾತ್ರಿ ಬಂದ ತಜ್ಞರ ತಂಡ ಎರಡನೇ ಬಾರಿ ಮರಣೋತ್ತರ ಪರೀಕ್ಷೆ ನಡೆಸಿತು ಎಂದು ಪೊಲೀಸ್ ವರಿಷ್ಠಾಧಿಕಾರಿ ಸುಜಾತಾ ಸಿಂಗ್ ತಿಳಿಸಿದ್ದಾರೆ.

ಇದಾದ ಕೆಲ ಗಂಟೆಗಳ ಬಳಿಕ ಗುರ್ವಿಂದರ್‌ ಸಿಂಗ್‌ ಅವರ ಅಂತ್ಯಕ್ರಿಯೆ ನೆರವೇರಿತು ಎಂದು ಹೆಚ್ಚುವರಿ ಪೊಲೀಸ್‌ ಅಧೀಕ್ಷಕ (ಗ್ರಾಮೀಣ) ಅಶೋಕ್‌ ಕುಮಾರ್‌ ಹೇಳಿದ್ದಾರೆ.

ಮರಣೋತ್ತರ ಪರೀಕ್ಷೆಯ ವರದಿಯನ್ನು ಪರೀಕ್ಷೆ ನಡೆಸಿದ ತಜ್ಞರ ಮೇಲ್ವಿಚಾರಣೆಯಲ್ಲಿ ಸಿದ್ಧಪಡಿಸಲಾಗುವುದು ಎಂದು ಎಸ್‌ಪಿ ಅವರು ತಿಳಿಸಿದ್ದಾರೆ.

ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ್‌ ಮಿಶ್ರಾ ಅವರ ಬೆಂಗಾವಲು ಪಡೆಯ ಎರಡು ಎಸ್‌ಯುವಿಗಳು ಲಖಿಂಪುರ್‌ ಖೇರಿ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಹರಿದಿದ್ದರಿಂದ ನಾಲ್ವರು ರೈತರು ಭಾನುವಾರ ಬಲಿಯಾಗಿದ್ದರು. ಈ ವೇಳೆ ಆಕ್ರೋಶಗೊಂಡಿದ್ದ ರೈತರು ಎರಡೂ ಎಸ್‌ಯುವಿಗಳಿಗೆ ಬೆಂಕಿ ಹಚ್ಚಿದರು. ಈ ಸಂದರ್ಭದಲ್ಲಿ ಎಸ್‌ಯುವಿಗಳಲ್ಲಿ ಇದ್ದವರ ಪೈಕಿ ನಾಲ್ವರು ಮೃತಪಟ್ಟಿದ್ದರು.

ಈ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ವಿರುದ್ಧ ಉತ್ತರ ಪ್ರದೇಶದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ, ಆದರೆ ಯಾರನ್ನೂ ಬಂಧಿಸಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು