ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಪ್ರೀಂ ತೀರ್ಪು ಸ್ವಾಗತಾರ್ಹ, ಆದರೆ ಪ್ರತಿಭಟನೆ ಮುಂದುವರಿಯಲಿದೆ: ರೈತ ಮುಖಂಡರು

Last Updated 12 ಜನವರಿ 2021, 12:33 IST
ಅಕ್ಷರ ಗಾತ್ರ

ನವದೆಹಲಿ:ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳ ಅನುಷ್ಠಾನಕ್ಕೆ ತಡೆ ನೀಡಿರುವ ಸುಪ್ರೀಂ ಕೋರ್ಟ್‌ ಆದೇಶವನ್ನು ರೈತ ಮುಖಂಡರು ಸ್ವಾಗತಿಸಿದ್ದಾರೆ ಮತ್ತು ಕಾನೂನುಗಳನ್ನು ರದ್ದುಗೊಳಿಸುವವರೆಗೂ ತಮ್ಮ ಪ್ರತಿಭಟನೆಯನ್ನು ಮುಂದುವರಿಸುವುದಾಗಿ ತಿಳಿಸಿದ್ದಾರೆ.

ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಿರ್ಧರಿಸಲು ಸುಮಾರು 40 ಪ್ರತಿಭಟನಾ ನಿರತ ರೈತ ಸಂಘಗಳನ್ನು ಹೊಂದಿರುವ ಸಂಯುಕ್ತ್ ಕಿಸಾನ್ ಮೋರ್ಚಾ ಸಭೆ ಕರೆದಿದೆ.

ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿಯ ಮುಂದೆ ಯಾವುದೇ ವಿಚಾರಣೆಯಲ್ಲಿ ಭಾಗವಹಿಸಲು ನಾವು ಸಿದ್ಧರಿಲ್ಲ, ಆದರೆ ಈ ಕುರಿತು ಔಪಚಾರಿಕ ನಿರ್ಧಾರವನ್ನು ಮೋರ್ಚಾ ತೆಗೆದುಕೊಳ್ಳುತ್ತದೆ ಎಂದು ರೈತ ಮುಖಂಡರು ಹೇಳಿದರು.

'ಕೃಷಿ ಕಾನೂನುಗಳ ಅನುಷ್ಠಾನಕ್ಕೆ ತಡೆ ನೀಡಿರುವ ನ್ಯಾಯಾಲಯದ ಆದೇಶವನ್ನು ನಾವು ಸ್ವಾಗತಿಸುತ್ತೇವೆ, ಆದರೆ ಈ ಕಾನೂನುಗಳನ್ನು ಸಂಪೂರ್ಣವಾಗಿ ರದ್ದುಪಡಿಸಬೇಕೆಂದು ನಾವು ಬಯಸುತ್ತೇವೆ' ಎಂದು ಮೋರ್ಚಾದ ಹಿರಿಯ ಮುಖಂಡ ಅಭಿಮನ್ಯು ಕೊಹಾರ್ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸುವವರೆಗೂ ಪ್ರತಿಭಟನೆ ಮುಂದುವರಿಯಲಿದೆ ಎಂದು ಮತ್ತೊಬ್ಬ ರೈತ ಮುಖಂಡ ಹರಿಂದರ್ ಲೋಖ್ವಾಲ್ ಹೇಳಿದ್ದಾರೆ.

ಮುಂದಿನ ಆದೇಶದವರೆಗೆ ಕೃಷಿ ಕಾನೂನುಗಳ ಅನುಷ್ಠಾನವನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಡೆಹಿಡಿದಿದೆ ಮತ್ತು ದೆಹಲಿಯ ಗಡಿಯಲ್ಲಿ ಪ್ರತಿಭಟಿಸುತ್ತಿರುವ ರೈತ ಸಂಘಗಳು ಮತ್ತು ಸರ್ಕಾರದ ನಡುವಿನ ಬಿಕ್ಕಟ್ಟನ್ನು ಪರಿಹರಿಸಲು ಸಮಿತಿಯೊಂದನ್ನು ರಚಿಸಲು ನಿರ್ಧರಿಸಿದೆ.

ಮುಖ್ಯನ್ಯಾಯಮೂರ್ತಿ ಎಸ್.ಎ. ಬೊಬ್ಡೆ ನೇತೃತ್ವದ ಪೀಠವು ಕೃಷಿ ಕಾನೂನು ಜಾರಿಗೆ ತಡೆ ನೀಡಿ ಆದೇಶ ಹೊರಡಿಸಿದೆ.

ಹರಿಯಾಣ ಮತ್ತು ಪಂಜಾಬ್‌ನ ಸಾವಿರಾರು ರೈತರು ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯ ಹಲವು ಗಡಿಗಳಲ್ಲಿ ಕಳೆದ ವರ್ಷ ನವೆಂಬರ್ 28ರಿಂದಲೂ ಪ್ರತಿಭಟನೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT