ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಕಾಯ್ದೆ ಸಿಂಧುತ್ವ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರೈತ ಸಂಘಟನೆ

Last Updated 11 ಡಿಸೆಂಬರ್ 2020, 13:12 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳ ಸಿಂಧುತ್ವ ಪ್ರಶ್ನಿಸಿ ‘ಭಾರತೀಯ ಕಿಸಾನ್ ಯೂನಿಯನ್’ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ಕೃಷಿ ಕಾಯ್ದೆಗಳ ವಿರುದ್ಧ ಡಿಎಂಕೆ ಸಂಸದ ತಿರುಚಿ ಶಿವ ಅವರು ಈಗಾಗಲೇ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಈಗ ರೈತ ಸಂಘಟನೆಯ ಅಧ್ಯಕ್ಷ ಭಾನು ಪ್ರತಾಪ್ ಸಿಂಗ್ ಅವರು ಮಧ್ಯಪ್ರವೇಶಿಸುವಂತೆ ಮನವಿ ಸಲ್ಲಿಸಿದ್ದಾರೆ. ‘ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ ( ಉತ್ತೇಜನ ಮತ್ತು ಸೌಲಭ್ಯ) ಕಾಯ್ದೆ– 2020’, ‘ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕುರಿತಂತೆ ರೈತರ ಜತೆ (ಸಬಲೀಕರಣ ಮತ್ತು ರಕ್ಷಣೆ) ಒಪ್ಪಂದ ಕಾಯ್ದೆ–2020’ ಹಾಗೂ ‘ಅಗತ್ಯ ಸರಕುಗಳ (ತಿದ್ದುಪಡಿ) ಮಸೂದೆ–2020’ ವಿರುದ್ಧ ಅರ್ಜಿ ಸಲ್ಲಿಕೆಯಾಗಿದೆ.

‘ಹೊಸ ಕಾಯ್ದೆಗಳನ್ನು ಮುಂದುವರಿಯಲು ಬಿಟ್ಟಲ್ಲಿ ಕಾರ್ಪೊರೇಟ್‌ ಕಂಪನಿಗಳಿಗೆ ನಮ್ಮ ದೇಶವನ್ನು ಹಾಳು ಮಾಡಲು ಅನುವು ಮಾಡಿಕೊಟ್ಟಂತಾಗಬಹುದು. ಅವರು ನಮ್ಮ ಕೃಷಿ ಉತ್ಪನ್ನಗಳನ್ನು ನಿಯಂತ್ರಣವಿಲ್ಲದೆ ರಫ್ತು ಮಾಡಬಹುದು. ಇದರಿಂದ ದೇಶದಲ್ಲಿ ಬರ ಉಂಟಾಗಬಹುದು’ ಎಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಹೊಸ ಕಾಯ್ದೆಗಳು ಕಾನೂನುಬಾಹಿರವಾದವು ಮತ್ತು ಏಕಪಕ್ಷೀಯ ಎಂದಿರುವ ಸಂಘಟನೆಯು, ಕೃಷಿ ಉತ್ಪನ್ನಗಳ ವಾಣಿಜ್ಯೀಕರಣಕ್ಕೆ ಅವು ಆಸ್ಪದ ಮಾಡಿಕೊಡುತ್ತವೆ ಎಂದು ಹೇಳಿದೆ.

ಹೊಸ ಕೃಷಿ ಕಾಯ್ದೆಗಳು ಅಸಾಂವಿಧಾನಿಕ ಮತ್ತು ರೈತ ವಿರೋಧಿಯಾಗಿವೆ. ಈ ಕಾಯ್ದೆಗಳು ರೈತರನ್ನು ಕಾರ್ಪೊರೇಟ್‌ ಕಂಪನಿಗಳ ಮತ್ತು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳುಗಳನ್ನಾಗಿ ಮಾಡಲಿವೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

‘ಕೃಷಿ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಸ್ಥಾಪನೆಯಾಗಿರುವ ಎಪಿಎಂಸಿ ವ್ಯವಸ್ಥೆಯನ್ನು ಈ ಕಾಯ್ದೆಗಳು ಅಸ್ತಿತ್ವ ಕಳೆದುಕೊಳ್ಳುವಂತೆ ಮಾಡುತ್ತವೆ. ಈ ಕಾಯ್ದೆಗಳನ್ನು ತರಾತುರಿಯಲ್ಲಿ ಅಂಗೀಕರಿಸಲಾಗಿದೆ’ ಎಂದೂ ಉಲ್ಲೇಖಿಸಲಾಗಿದೆ.

ಕೃಷಿ ಕಾಯ್ದೆಗಳನ್ನು ಪ್ರಶ್ನಿಸಿ ತಿರುಚಿ ಶಿವ, ಆರ್‌ಜೆಡಿ ಸಂಸದ ಮನೋಜ್ ಝಾ ಹಾಗೂ ಇತರರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಈಗಾಗಲೇ ನೋಟಿಸ್ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT