ಶನಿವಾರ, ಮಾರ್ಚ್ 6, 2021
28 °C

ಗುಜರಾತ್‌ನ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮೃತ, 23 ಮಂದಿಗೆ ಗಾಯ

ಪಿಟಿಐ Updated:

ಅಕ್ಷರ ಗಾತ್ರ : | |

ಬರೂಚ್: ಗುಜರಾತ್‌ನ ಭರೂಚ್ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದ ಸ್ಫೋಟದ ನಂತರ ಕಾಣಿಸಿಕೊಂಡ ಭಾರಿ ಬೆಂಕಿ ಅವಘಡದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, 23 ಮಂದಿ ಗಾಯಗೊಂಡಿದ್ದಾರೆ ಮತ್ತು ಐವರು ಕಾಣೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಝಗಾಡಿಯಾ ಜಿಐಡಿಸಿ ಕೈಗಾರಿಕಾ ಪ್ರದೇಶದ ಯುನೈಟೆಡ್ ಫಾಸ್ಫರಸ್ ಲಿಮಿಟೆಡ್‌ನ ಘಟಕದಲ್ಲಿ ಈ ಘಟನೆ ನಡೆದಿದೆ. ಮುಂಜಾನೆ 2 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದ ನಂತರ ಬೆಂಕಿ ಕಾಣಿಸಿಕೊಂಡಿದೆ ಎಂದು ಸ್ಥಳೀಯ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಪಿ.ಎಚ್. ವಾಸವ ತಿಳಿಸಿದ್ದಾರೆ.

ಇದು ಬಾಯ್ಲರ್ ಸ್ಫೋಟದಿಂದ ಸಂಭವಿಸಿದೆ ಎಂದು ಸ್ಥಳೀಯ ಮೂಲಗಳು ತಿಳಿಸಿದ್ದು, ಇದನ್ನು ಖಚಿತ ಪಡಿಸಿದ ಪೊಲೀಸ್ ಅಧಿಕಾರಿ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ. ಕಾರ್ಖಾನೆಯಲ್ಲಿ ಔಷಧೀಯ ಉದ್ಯಮದಲ್ಲಿ ಬಳಸುವ ರಾಸಾಯನಿಕಗಳನ್ನು ತಯಾರಿಸಿದೆ ಎಂದು ಮೂಲಗಳು ತಿಳಿಸಿವೆ.

'ಕಾರ್ಖಾನೆಯೊಳಗಿನ ಅವಶೇಷಗಳಿಂದ ಇಲ್ಲಿಯವರೆಗೆ ಎರಡು ಶವಗಳು ಪತ್ತೆಯಾಗಿವೆ. ಇನ್ನೂ ಕಾಣೆಯಾದ ಐದು ಕಾರ್ಮಿಕರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಬೆಂಕಿಯಲ್ಲಿ ಇತರ 23 ಕಾರ್ಮಿಕರು ಗಾಯಗೊಂಡಿದ್ದಾರೆ ಮತ್ತು ಅವರಲ್ಲಿ 9 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ' ಎಂದು ಇನ್ಸ್‌ಪೆಕ್ಟರ್ ವಾಸವ ತಿಳಿಸಿದ್ದಾರೆ.

ಸ್ಫೋಟವು ಎಷ್ಟು ತೀವ್ರವಾಗಿತ್ತೆಂದರೆ ಅದು ಬಹಳ ದೂರದಲ್ಲಿ ಕೇಳಿಬಂದಿದೆ. ಸುಮಾರು 15 ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಗಿದ್ದು, ಬೆಳಿಗ್ಗೆ 6.30 ರ ವೇಳೆಗೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಇನ್ಸ್‌ಪೆಕ್ಟರ್ ಹೇಳಿದರು.

ಸದ್ಯ ಘಟಕವನ್ನು ಮುಚ್ಚಲು ಆದೇಶ ಹೊರಡಿಸಿದ್ದು, ಅದರ ಸುರಕ್ಷತಾ ಅಂಶಗಳನ್ನು ಪರಿಶೀಲಿಸುವುದಾಗಿ ರಾಜ್ಯದ ಕಾರ್ಮಿಕ ಮತ್ತು ಉದ್ಯೋಗ ಇಲಾಖೆ ಹೇಳಿದೆ. ಮೃತ ಕಾರ್ಮಿಕರ ಕುಟುಂಬಗಳಿಗೆ ಕಾರ್ಖಾನೆಯ ಮಾಲೀಕರು ಪರಿಹಾರವನ್ನು ನೀಡುವಂತೆ ಆದೇಶಿಸಿದೆ ಎಂದು ಅದು ಪ್ರಕಟಣೆಯಲ್ಲಿ ತಿಳಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು