ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಳ: ಮಮತಾ ಅರ್ಜಿ ವಿಚಾರಣೆಗೆ ಹೈಕೋರ್ಟ್‌ ಅಸ್ತು, ಸುವೇಂದುಗೆ ನೋಟಿಸ್

ದಾಖಲೆ ಸಂರಕ್ಷಿಸಿಟ್ಟುಕೊಳ್ಳುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ
Last Updated 14 ಜುಲೈ 2021, 12:10 IST
ಅಕ್ಷರ ಗಾತ್ರ

ಕೋಲ್ಕತ್ತ: ನಂದಿಗ್ರಾಮ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಒಪ್ಪಿಕೊಂಡಿರುವ ಕೋಲ್ಕತ್ತ ಹೈಕೋರ್ಟ್, ಈ ಸಂಬಂಧ ಶಾಸಕ ಸುವೇಂದು ಅಧಿಕಾರಿಗೆ ನೋಟಿಸ್ ನೀಡುವಂತೆ ಬುಧವಾರ ನಿರ್ದೇಶನ ನೀಡಿದೆ.

ನ್ಯಾಯಮೂರ್ತಿ ಶಂಪಾ ಸರ್ಕಾರ್‌ ಅವರು, ‘ಮಮತಾ ಅವರ ಅರ್ಜಿಯ ವಿಚಾರಣೆ ಆಗಸ್ಟ್ 12 ರಂದು ನಡೆಯಲಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಸುವೇಂದು ಅಧಿಕಾರಿ ಹಾಗೂ ಇತರರಿಗೆ ನೋಟಿಸ್ ಜಾರಿ ಮಾಡುವಂತೆ’ ನಿರ್ದೇಶನ ನೀಡಿದ್ದಾರೆ.

‘ಹೈಕೋರ್ಟ್‌ನ ನ್ಯಾಯಪೀಠವು ಜನಪ್ರತಿನಿಧಿ ಕಾಯ್ದೆಯ ಪ್ರಕಾರ ಚುನಾವಣೆಗೆ ಸಂಬಂಧಿಸಿದಂತೆ ಅರ್ಜಿಯನ್ನು ಸ್ವೀಕರಿಸಿದೆ’ ಎಂದೂ ನ್ಯಾಯಮೂರ್ತಿ ಸರ್ಕಾರ್ ಅವರು ತಿಳಿಸಿದ್ದಾರೆ.

‘ನಂದಿಗ್ರಾಮದ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲಾ ದಾಖಲೆ ಹಾಗೂ ಸಾಧನಗಳನ್ನು ಸಂರಕ್ಷಿಸಿಡಬೇಕು’ ಎಂದೂ ನ್ಯಾಯಾಲಯವು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ನಂದಿಗ್ರಾಮದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಸುವೇಂದು ಅಧಿಕಾರಿ ಅವರು ಮಮತಾ ಬ್ಯಾನರ್ಜಿ ವಿರುದ್ಧ 1,956 ಮತಗಳಿಂದ ಗೆಲುವು ಸಾಧಿಸಿದ್ದರು. ಗೆಲುವಿನ ಬೆನ್ನಲ್ಲೇ ಮಮತಾ, ಸುವೇಂದು ವಿರುದ್ಧ ಕೋಲ್ಕತ್ತ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈ ಮೊದಲು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ನ ನ್ಯಾಯಮೂರ್ತಿ ಕೌಸಿಕ್ ಚಂದಾ ಕೈಗೆತ್ತಿಕೊಂಡಿದ್ದರು. ಆದರೆ, ನಂತರ ಅವರು ಮಮತಾ ಅವರ ಅರ್ಜಿಯ ವಿಚಾರಣೆಯಿಂದ ಹಿಂದೆ ಸರಿದಿದ್ದರು. ನಂತರ ಮುಖ್ಯನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಅವರು ಅರ್ಜಿಯ ವಿಚಾರಣೆ ಕೈಗೊಳ್ಳುವಂತೆ ನ್ಯಾಯಮೂರ್ತಿ ಶಂಪಾ ಸರ್ಕಾರ್ ಅವರಿಗೆ ಸೂಚಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT