ಬುಧವಾರ, ಡಿಸೆಂಬರ್ 2, 2020
25 °C

ಆಂಧ್ರ, ತೆಲಂಗಾಣದಲ್ಲಿ ಭಾರಿ ಮಳೆ: ಪ್ರವಾಹ ಭೀತಿ, ಜನಜೀವನ ಅಸ್ತವ್ಯಸ್ತ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ಹೈದರಾಬಾದ್‌: ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಹಲವು ಪ್ರದೇಶಗಳಲ್ಲಿ ಭಾನುವಾರ ಭಾರಿ ಮಳೆಯಾಗಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗೋದಾವರಿ ಪ್ರದೇಶ ಹಾಗೂ ಕೃಷ್ಣಾ ನದಿಯ ಜಲಾನಯನ ಪ್ರದೇಶಗಳಲ್ಲಿ ಹೆಚ್ಚು ಮಳೆ ಸುರಿಯುವ ಸಾಧ್ಯತೆಗಳಿವೆ. ಉಳಿದಂತೆ ರಾಯಲುಸೀಮಾ ಹಾಗೂ ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತೆಲಂಗಾಣದ ಹಲವೆಡೆ ಧಾರಾಕಾರವಾಗಿ ಸುರಿಯುತ್ತಿದೆ. ಖಮ್ಮಂ, ವಾರಂಗಲ್, ಕರೀಂನಗರ, ನಿಜಾಮಾಬಾದ್, ಮೇಡಕ್, ಅದಿಲಾಬಾದ್, ಹೈದರಾಬಾದ್ ಮತ್ತು ರಂಗಾರೆಡ್ಡಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಕಳೆದ ಮೂರು ದಿನಗಳಿಂದ 27 ಸೆ. ಮೀ ಮಳೆಯಾಗಿದೆ. ಜೂನ್ 1ರಿಂದ ಇಲ್ಲಿಯವರೆಗೆ ಶೇ 38ರಷ್ಟು ಮಳೆ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಯಾತ್ರಾ ಸ್ಥಳವಾದ ಭದ್ರಾಚಲಂ ನಗರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ರಾಮಾಲಯ ಇರುವ ಸುತ್ತ ಮುತ್ತ ಗೋದಾವರಿ ನದಿಯ ಹಿನ್ನಿರು ನಿಂತಿದ್ದು ಸ್ಥಳೀಯರಿಗೆ ತೊಂದರೆಯಾಗಿದೆ ಎಂದು ವರದಿಯಾಗಿದೆ. ಪ್ರಸಿದ್ಧ ರಾಮ ದೇವಾಸ್ಥಾನ ಮುಳುಗಡೆಯಾಗಿಲ್ಲ ಎಂದು ದೇವಾಲಯದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಆಂಧ್ರ ಪ್ರದೇಶದ ಗೋದಾವಾರಿ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ. ಮುಖ್ಯಮಂತ್ರಿ ಜಗನ್‌ ಮೋಹನ್‌ ರೆಡ್ಡಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮುಳುಗಡೆ ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವಂತೆ ಸೂಚಿಸಿದ್ದಾರೆ. 

ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು ನಿರಾಶ್ರಿತರಿಗೆ ಆಹಾರ, ಬಟ್ಟೆ, ನೀರಿನ ಸೌಕರ್ಯ ಕಲ್ಪಿಸಲಾಗಿದೆ ಎಂದು ಜಗನ್‌ ಮೋಹನ್‌ ರೆಡ್ಡಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. 

ಭಾನುವಾರ ದಿನವಿಡೀ ನಿರಂತರವಾಗಿ ಮಳೆ ಸುರಿದ ಪರಿಣಾಮ ಹಳ್ಳಗಳು ತುಂಬಿ ಹರಿಯುತ್ತಿದ್ದು  ಕೆರೆ, ಕಟ್ಟೆಗಳು ಕೋಡಿ ಬಿದ್ದಿವೆ. ಅನೇಕ ಗ್ರಾಮಗಳು ಮುಳುಗಡೆ ಭೀತಿಯಲ್ಲಿದ್ದು ಅಧಿಕಾರಿಗಳು ಪರಿಹಾರ ಕಾರ್ಯಗಳನ್ನು ಕೈಗೊಂಡಿದ್ದಾರೆ. ಸಾವಿರಾರು ಜನರು ಮನೆಗಳು ಮಳೆಗೆ ಬಿದ್ದು ಹೋಗಿವೆ. ಹಲವು ಕಡೆ ಬೆಳೆ ಹಾನಿಯಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು