ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಜತೆ ಅನೌಪಚಾರಿಕ ಮಾತುಕತೆ ಇಲ್ಲ: ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್

Last Updated 3 ಫೆಬ್ರುವರಿ 2021, 11:38 IST
ಅಕ್ಷರ ಗಾತ್ರ

ನವದೆಹಲಿ: ಪ್ರತಿಭಟನಾ ನಿರತ ರೈತರ ಜತೆ ಅನೌಪಚಾರಿಕ ಮಾತುಕತೆ ನಡೆಸುವುದಿಲ್ಲ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.

ಪ್ರತಿಭಟನಾ ಸ್ಥಳಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿರುವುದು ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಅಂತರ್ಜಾಲ ಸೇವೆ ಸ್ಥಗಿತಗೊಳಿಸಿರುವುದು ಕಾನೂನು ಸುವ್ಯವಸ್ಥೆ ಕಾಪಾಡುವುದು, ಸ್ಥಳೀಯಾಡಳಿತಕ್ಕೆ ಸಂಬಂಧಿಸಿದ ವಿಚಾರ ಎಂದು ಅವರು ಹೇಳಿದ್ದಾರೆ.

ಪ್ರತಿಭಟನಾ ನಿರತ 41 ರೈತ ಸಂಘಟನೆಗಳ ಜತೆ ಜನವರಿ 22ರಂದು ಕೇಂದ್ರವು ನಡೆಸಿದ 11ನೇ ಸುತ್ತಿನ ಮಾತುಕತೆ ವಿಫಲವಾಗಿತ್ತು. ಕೃಷಿ ಕಾಯ್ದೆಗಳನ್ನು 18 ತಿಂಗಳ ಕಾಲ ಅಮಾನತಿನಲ್ಲಿಡುವ ಸರ್ಕಾರದ ಪ್ರಸ್ತಾವವನ್ನು ಪರಿಗಣಿಸುವಂತೆ ರೈತ ಮುಖಂಡರಿಗೆ ಸರ್ಕಾರ ಸೂಚಿಸಿತ್ತು.

ಮುಂದಿನ ಸುತ್ತಿನ ಮಾತುಕತೆ ನಡೆಸಲಾಗುತ್ತದೆಯೇ, ಸರ್ಕಾರವು ಅನೌಪಚಾರಿಕವಾಗಿ ಮಾತುಕತೆ ನಡೆಸಲಿದೆಯೇ ಎಂದು ಕೇಳಲಾದ ಪ್ರಶ್ನೆಗೆ ಸಚಿವರು ‘ಇಲ್ಲ’ ಎಂದು ಉತ್ತರಿಸಿದ್ದಾರೆ.

‘ಔಪಚಾರಿಕ ಮಾತುಕತೆ ಯಾವಾಗ ನಡೆಯಲಿದೆ ಎಂಬ ಬಗ್ಗೆ ಮಾಹಿತಿ ನೀಡಲಿದ್ದೇವೆ’ ಎಂದೂ ಸಚಿವರು ತಿಳಿಸಿದ್ದಾರೆ.

ಪೊಲೀಸರು ಮತ್ತು ಆಡಳಿತವು ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲಿನ ದೌರ್ಜನ್ಯ ನಿಲ್ಲಿಸದೆ, ಬಂಧಿತ ರೈತ ನಾಯಕರ ಬಿಡುಗಡೆ ಮಾಡದೆ ಔಪಚಾರಿಕ ಮಾತುಕತೆ ನಡೆಸುವುದಿಲ್ಲ ಎಂಬ ರೈತ ಸಂಘಟನೆಗಳ ಹೇಳಿಕೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಈ ಕುರಿತು ಅವರು ಪೊಲೀಸ್ ಆಯುಕ್ತರ ಬಳಿ ಮಾತುಕತೆ ನಡೆಸಲಿ. ಕಾನೂನು ಸುವ್ಯವಸ್ಥೆ ಬಗ್ಗೆ ನಾನು ಪ್ರತಿಕ್ರಿಯಿಸಲಾರೆ. ಅದು ನನಗೆ ಸಂಬಂಧಿಸಿದ್ದಲ್ಲ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT