ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್-19 ವಿರುದ್ಧ ಭಾರತದ ಲಸಿಕೆ 'ಸಂಜೀವಿನಿ'ಯಾಗಿ ಕೆಲಸ ಮಾಡಲಿದೆ: ಹರ್ಷವರ್ಧನ್

Last Updated 16 ಜನವರಿ 2021, 10:21 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಭಾರತದ ಲಸಿಕೆಯು 'ಸಂಜೀವಿನಿ'ಯಾಗಿ ಕೆಲಸ ಮಾಡಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಶನಿವಾರ ತಿಳಿಸಿದ್ದಾರೆ.

ವಿಶ್ವದ ಅತಿ ದೊಡ್ಡ ಕೊರೊನಾ ವೈರಸ್ ಲಸಿಕೆ ಅಭಿಯಾನಕ್ಕೆ ಜನವರಿ 16 ಶನಿವಾರದಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು ಸೇರಿದಂತೆ ಮುಂಚೂಣಿಯ ಸೇನಾನಿಗಳಿಗೆ ಲಸಿಕೆ ನೀಡಲಾಗುತ್ತಿದೆ.

ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (ಏಮ್ಸ್) ನಡೆದ ಲಸಿಕೆ ಅಭಿಯಾನವನ್ನು ಆರೋಗ್ಯ ಸಚಿವರು ಉದ್ಘಾಟಿಸಿದರು.

'ಇಂದು ನನಗೆ ಅತ್ಯಂತ ಸಂತೋಷ ಹಾಗೂ ತೃಪ್ತಿದಾಯಕ ದಿನವಾಗಿದೆ. ಕಳೆದೊಂದು ವರ್ಷದಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಾವೆಲ್ಲರೂ ಕೋವಿಡ್-19 ವಿರುದ್ಧ ಹೋರಾಡುತ್ತಿದ್ದೇವೆ. ವೈದ್ಯರು ಹಾಗೂ ವಿಜ್ಞಾನಿಗಳ ಸಹಾಯದಿಂದ ಭಾರತ ತನ್ನದೇ ಆದ ಲಸಿಕೆಯನ್ನು ಪಡೆದಿದೆ. ಈ ಲಸಿಕೆಯು ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಸಂಜೀವಿನಿಯಾಗಿ ಕೆಲಸ ಮಾಡಲಿದೆ. ಕೋವಿಡ್-19 ವಿರುದ್ಧದ ಹೋರಾಟವು ಅಂತಿಮ ಹಂತವನ್ನು ತಲುಪಿದೆ' ಎಂದವರು ತಿಳಿಸಿದರು.

ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಹಾಗೂ ಆಸ್ಟ್ರಾಜೆನೆಕಾ ಸಂಸ್ಥೆಗಳು ಅಭಿವೃದ್ಧಿಪಡಿಸಿದ ಕೋವಿಶೀಲ್ಡ್ ಲಸಿಕೆಯನ್ನು ಪುಣೆಯ ಸೀರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ತಯಾರಿಸುತ್ತಿದೆ. ಅತ್ತ ಕೋವ್ಯಾಕ್ಸಿನ್ ಲಸಿಕೆಯನ್ನು ಭಾರತೀಯ ವೈದ್ಯಕೀಯ ಪರಿಷತ್ (ಐಸಿಎಂಆರ್) ಸಹಯೋಗದಲ್ಲಿ ಹೈದರಾಬಾದ್‌ನ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿದೆ.

1.65 ಕೋಟಿ ಡೋಸ್‌ಗಳನ್ನು ಕೇಂದ್ರ ಸರ್ಕಾರ ಖರೀದಿಸಿದೆ. ಮೊದಲ ಹಂತದಲ್ಲಿ ಮೂರು ಕೋಟಿ ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT