ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ-ಎಪಿಎಂಸಿ ಮಸೂದೆ ವಿರೋಧಿಸಿ ಬಂದ್

ಸರ್ಕಾರದ ವಿರುದ್ಧ ರೈತರ– ಕಾರ್ಮಿಕರ ರಣಕಹಳೆ l ಆಸ್ತಿ ಹಾನಿ ಮಾಡಿದರೆ ವಸೂಲಿ ಎಚ್ಚರಿಕೆ
Last Updated 27 ಸೆಪ್ಟೆಂಬರ್ 2020, 20:37 IST
ಅಕ್ಷರ ಗಾತ್ರ

ಬೆಂಗಳೂರು:ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೃಷಿ ಮತ್ತು ಎಪಿಎಂಸಿಗೆ ಸಂಬಂಧಿಸಿದಂತೆ ಹೊರಡಿಸಿರುವ ತಿದ್ದುಪಡಿ ಮಸೂದೆಗಳನ್ನು ಖಂಡಿಸಿ ರೈತ, ಕಾರ್ಮಿಕ ಮತ್ತು ದಲಿತ ಸಂಘಟನೆಗಳು ಸೋಮವಾರ ನಡೆಸಲಿರುವ ಕರ್ನಾಟಕ ಬಂದ್‌ಗೆ ಕಾಂಗ್ರೆಸ್, ಜೆಡಿಎಸ್, ಸಿಪಿಐ (ಎಂ) ಪಕ್ಷಗಳು ಬೆಂಬಲ ನೀಡಿವೆ.

ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡ ಬಣ, ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್, ಕನ್ನಡಪರ ಹೋರಾಟಗಾರ ಸಾ.ರಾ ಗೋವಿಂದು ಮತ್ತಿತರ ಕನ್ನಡ ಪರ ಸಂಘಟನೆಗಳ ನಾಯಕರು ರೈತರ ಹೋರಾಟಕ್ಕೆ ಕೈ ಜೋಡಿಸಲಿದ್ದಾರೆ.

ಸರ್ಕಾರದ ರೈತ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಹೋರಾಡುತ್ತಿರುವ ರೈತ, ದಲಿತ ಕಾರ್ಮಿಕರ ಐಕ್ಯ ಹೋರಾಟ ಸಮಿತಿಯ ಕರೆಗೆ108 ಕ್ಕೂ ಅಧಿಕ ಸಂಘಟನೆಗಳು ಈಗಾಗಲೇ ಬೆಂಬಲ ಸೂಚಿಸಿವೆ. ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಯಲಿದೆ ಎಂದು ರೈತ ಮುಖಂಡ ಬಡಗಲಪುರ ನಾಗೇಂದ್ರ ಅವರು ಹೇಳಿದ್ದಾರೆ.

ಬೆಳಿಗ್ಗೆ 6ರಿಂದ ಸಂಜೆ 6ಗಂಟೆಯವರೆಗೆ ಬಂದ್ ನಡೆಯಲಿದೆ ಎಂದು ತಿಳಿಸಿದ್ದಾರೆ.

‘ಬೆಂಗಳೂರಿನಲ್ಲಿ ರೈಲ್ವೆ ಮತ್ತು ವಿಮಾನ ನಿಲ್ದಾಣ ಹಾಗೂ ಸರ್ಕಾರಿ ಕಚೇರಿಗಳಿಗೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ. ಬಸ್ ಸಂಚಾರ ಆರಂಭಿಸಿದರೆ ಆಗುವ ಅನಾಹುತಗಳಿಗೆ ನಾವು ಜವಾಬ್ದಾರರಲ್ಲ’ ಎಂದು ಕರವೇ ರಾಜ್ಯಘಟಕದ ಅಧ್ಯಕ್ಷ ನಾರಾಯಣಗೌಡ ಎಚ್ಚರಿಸಿದ್ದಾರೆ.

‘ರೈತರು ಮತ್ತು ಕಾರ್ಮಿಕರ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಿದ್ದೇವೆ. ಸಾರಿಗೆ ನೌಕರರೆಲ್ಲರೂ ಬಂದ್‌ನಲ್ಲಿ ಪಾಲ್ಗೊಳ್ಳುತ್ತಾರೆ ಎಂದು ಸರ್ಕಾರಕ್ಕೆ ಮೌಖಿಕವಾಗಿ ತಿಳಿಸಿದ್ದೇವೆ’ ಎಂದು ಕೆಎಸ್‌ಆರ್‌ಟಿಸಿ ಸ್ಟಾಫ್‌ ಆ್ಯಂಡ್‌ ವರ್ಕರ್ಸ್‌ ಫೆಡರೇಷನ್‌ನ ಪ್ರಧಾನ ಕಾರ್ಯದರ್ಶಿ ವಿಜಯ್‌ ಭಾಸ್ಕರ್ ಹೇಳಿದ್ದಾರೆ.

ಮುಚ್ಚಳಿಕೆಗೆ ಸಹಿ ಹಾಕಬೇಡಿ: ಪ್ರತಿಭಟನೆ ವೇಳೆ ಸರ್ಕಾರದ ಆಸ್ತಿ ಪಾಸ್ತಿಗಳಿಗೆ ಹಾನಿ ಉಂಟಾದರೆ ಆ ಹಾನಿಗೆ ಪ್ರತಿಭಟನೆ ನಡೆಸುವ ಸಂಘಟನೆಗಳೇನೇರ ಹೊಣೆ ಎಂದು ಪೊಲೀಸರು ರೈತ ಮತ್ತು ಕನ್ನಡಪರ ಸಂಘಟನೆಗಳಿಂದ ಮುಚ್ಚಳಿಕೆ ಬರೆಯಿಸಿಕೊಳ್ಳಲು ಮುಂದಾಗಿದ್ದಾರೆ. ಇದನ್ನು ಪೊಲೀಸ್ ಇಲಾಖೆ ಕೈಬಿಡಬೇಕು. ಯಾವ ಸಂಘಟನೆಗಳೂ ಮುಚ್ಚಳಿಕೆಗೆ ಸಹಿ ಹಾಕಬಾರದು ಎಂದು ವಾಟಾಳ್ ನಾಗರಾಜ್ ಮನವಿ ಮಾಡಿದ್ದಾರೆ.

ಲಾರಿ ಮಾಲೀಕರ ಸಂಘ, ಹೋಟೆಲ್‌ ಮಾಲೀಕರ ಸಂಘ ಬಂದ್‌ಗೆ ನೈತಿಕ ಬೆಂಬಲ ಮಾತ್ರ ನೀಡಿದ್ದು, ಇವುಗಳ ಸೇವೆಯಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ.

ಬಸ್‌ಗಳಿಗೆ ಹಾನಿ ಮಾಡಿದರೆ ಕಠಿಣ ಕ್ರಮ: ಲಕ್ಷ್ಮಣ ಸವದಿ

‘ರಾಜ್ಯದಾದ್ಯಂತ ಸಾರಿಗೆ ಸಂಚಾರ ವ್ಯವಸ್ಥೆ ಸುಗಮವಾಗಿ ಸಾಗಲು ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ನಾಲ್ಕು ನಿಗಮಗಳ ವ್ಯಾಪ್ತಿಯಲ್ಲಿ ಎಂದಿನಂತೆ ಬಸ್‌ ಸಂಚಾರ ಮುಂದುವರಿಯಲಿದೆ’ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.

‘ಬಸ್‌ಗಳಿಗೆ, ಇತರೆ ಸಾರ್ವಜನಿಕ ಆಸ್ತಿಗೆ ಹಾನಿ ಉಂಟು ಮಾಡಲು ಯಾರೇ ಯತ್ನಿಸಿದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಹಿಂಜರಿಯುವುದಿಲ್ಲ’ ಎಂದೂ ಅವರು ಹೇಳಿದ್ದಾರೆ.

‘ಸೋಮವಾರ ಎಂದಿನಂತೆ ಎಲ್ಲ ಸರ್ಕಾರಿ ಕಚೇರಿಗಳು, ಆಸ್ಪತ್ರೆಗಳು, ಅಂಗಡಿ ಮುಂಗಟ್ಟುಗಳು ತೆರೆದಿರಲಿವೆ. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಯಾರಾದರೂ ಬಲವಂತದ ಬಂದ್‌ಗೆ ಯತ್ನಿಸಿದರೆ ಅಂಥವರ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸುತ್ತಾರೆ’ ಎಂದು ಕಂದಾಯ ಸಚಿವ ಆರ್. ಅಶೋಕ ಎಚ್ಚರಿಕೆ ನೀಡಿದ್ದಾರೆ.

ಏನಿರುತ್ತೆ

* ಹಾಲು, ತರಕಾರಿ ಹಾಗೂ ದಿನಸಿ ಅಂಗಡಿಗಳು

* ಆಸ್ಪತ್ರೆಗಳು, ಔಷಧ ಅಂಗಡಿಗಳು

* ಹೋಟೆಲ್‌ಗಳು, ಮೆಟ್ರೊ ರೈಲು, ವಿಮಾನ, ಲಾರಿ, ಸರಕು ಸಾಗಣೆ ವಾಹನಗಳ ಸೇವೆ

ಏನಿರಲ್ಲ

* ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ ಸೇವೆ ಇರಲಿದೆ ಎಂದು ಸರ್ಕಾರ ಹೇಳಿದೆ. ಆದರೆ, ಈ ನಿಗಮಗಳ ನೌಕರರ ಸಂಘ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿರುವುದರಿಂದ ವ್ಯತ್ಯಯವಾಗುವ ಸಾಧ್ಯತೆ ಇದೆ

* ಆಟೊ–ಟ್ಯಾಕ್ಸಿ ಸೇವೆ ಇರುವುದಿಲ್ಲ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT