ಬುಧವಾರ, ಜೂನ್ 29, 2022
24 °C

ಹರ್ಷ ಕೊಲೆ ಪ್ರಕರಣದ ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ರಾಜ್ಯ ಸರ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಫೆಬ್ರವರಿ 20ರಂದು ಶಿವಮೊಗ್ಗದಲ್ಲಿ ನಡೆದಿದ್ದ ಭಜರಂಗದಳ ಕಾರ್ಯಕರ್ತ ಹರ್ಷ ಅವರ ಕೊಲೆ ಪ್ರಕರಣದ ತನಿಖೆಯನ್ನು ಕರ್ನಾಟಕ ಸರ್ಕಾರವು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ಹಸ್ತಾಂತರಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ನವದೆಹಲಿಯ ನ್ಯಾಯಾಲಯದಲ್ಲಿ ಔಪಚಾರಿಕ ದೂರು ಸಲ್ಲಿಸಲಾಗಿದ್ದು, ಎಫ್ಐಆರ್‌ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ ಎಂದು ಎನ್‌ಐಎ ಅಧಿಕಾರಿಗಳು ತಿಳಿಸಿದ್ದಾರೆ.

ಹರ್ಷ ಕೊಲೆಗೆ ಸಂಬಂಧಿಸಿದಂತೆ ಅವರ ತಾಯಿ ನೀಡಿದ್ದ ದೂರಿನ ಮೇರೆಗೆ ತನಿಖೆ ಆರಂಭಿಸಿದ್ದ ರಾಜ್ಯ ಪೊಲೀಸರು, 1967ರ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ ಅಡಿ ಶಿವಮೊಗ್ಗದಲ್ಲಿ 10 ಜನರನ್ನು ಬಂಧಿಸಿದ್ದಾರೆ. ಎಲ್ಲ ಆರೋಪಿಗಳನ್ನು ಶೀಘ್ರವೇ ಎನ್‌ಐಎ ತನ್ನ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ.

ಕೇಂದ್ರದ ಗೃಹ ಸಚಿವ ಅಮಿತ್‌ ಶಾ ಅವರಿಗೆ ಫೆಬ್ರುವರಿ 22ರಂದು ಪತ್ರ ಬರೆದಿದ್ದ ಕೇಂದ್ರದ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಹರ್ಷ ಕೊಲೆ ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸುವಂತೆ ಮನವಿ ಮಾಡಿದ್ದರು.

ಈ ಮನವಿಯ ಮೇರೆಗೆ ಕೇಂದ್ರದ ಗೃಹ ಸಚಿವಾಲಯವು ಈ ಪ್ರಕರಣದ ತನಿಖೆ ನಡೆಸುವಂತೆ ಆದೇಶಿಸಿದ್ದರಿಂದ, ಎನ್‌ಐ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

ರಾಜ್ಯದಲ್ಲಿ ಹಿಜಾಬ್‌ ಮತ್ತು ಕೇಸರಿ ಶಾಲು ವಿವಾದ ಭುಗಿಲೆದ್ದ ನಂತರ ಶಿವಮೊಗ್ಗದಲ್ಲಿ ನಡೆದಿದ್ದ ಈ ಕೊಲೆ ಪ್ರಕರಣದಿಂದಾಗಿ ಶಿವಮೊಗ್ಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಕೊಲೆಗೀಡಾಗಿದ್ದ ಹರ್ಷ ಅವರ ಪಾರ್ಥಿವ ಶರೀರದ ಮೆರವಣಿಗೆ ಸಂದರ್ಭದಲ್ಲೂ ಹಿಂಸಾತ್ಮಕ ಘಟನೆಗಳು ನಡೆದಿದ್ದವು.

ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಉದ್ರಿಕ್ತ ಯುವಕರ ಗುಂಪು ಪ್ರಾರ್ಥನಾ ಮಂದಿರಗಳ ಮೇಲೆ ಕಲ್ಲು ತೋರಾಟ ನಡೆಸಿತ್ತಲ್ಲದೆ, ವಾಹನಗಳಿಗೆ ಬೆಂಕಿ ಹಚ್ಚಿದ ಘಟನೆ ನಡೆದಿತ್ತು. ನಂತರ ಅಹಿತಕರ ಘಟನೆ ತಡೆಯಲು ಬಿಗಿ ಬಂದೋಬಸ್ತ್‌ಗೆ ಪೊಲೀಸರನ್ನು ನಿಯೋಜಿಸಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು