ಮತ್ತೆ ಇ.ಡಿ.ವಿಚಾರಣೆಗೆ ಗೈರಾಗಲಿದ್ದಾರೆ ಕೇರಳ ಸಿಎಂ ಹೆಚ್ಚುವರಿ ಆಪ್ತ ಕಾರ್ಯದರ್ಶಿ

ತಿರುವನಂತಪುರ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಹೆಚ್ಚುವರಿ ಖಾಸಗಿ ಕಾರ್ಯದರ್ಶಿ ಸಿ.ಎಂ. ರವೀಂದ್ರನ್ ಅವರು ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳ ಎದುರು ವಿಚಾರಣೆಗೆ ಮತ್ತೆ ಗೈರಾಗುವ ಸಾಧ್ಯತೆ ಇದೆ. ಅನಾರೋಗ್ಯದ ಕಾರಣಗಳನ್ನು ನೀಡಿ ಅವರು ವಿಚಾರಣೆಗೆ ಗೈರಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಈ ಹಿಂದೆ, ಕೊಚ್ಚಿಯಲ್ಲಿರುವ ಕಚೇರಿಗೆ ವಿಚಾರಣೆಗೆ ಬರುವಂತೆ ರವೀಂದ್ರನ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿತ್ತು. ಆರೋಗ್ಯ ಸಮಸ್ಯೆ ಇರುವುದರಿಂದ ತಿರುವನಂತಪುರ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇರಬೇಕಾಗಿದೆ ಎಂದು ಅವರು ಅಧಿಕಾರಿಗಳಿಗೆ ತಿಳಿಸಿದ್ದರು ಎನ್ನಲಾಗಿದೆ.
ಇದನ್ನೂ ಓದಿ: ಚಿನ್ನ ಕಳ್ಳ ಸಾಗಣೆ: ಕೇರಳ ಸಿಎಂ ಹೆಚ್ಚುವರಿ ಆಪ್ತ ಕಾರ್ಯದರ್ಶಿಗೆ ಇ.ಡಿ. ಸಮನ್ಸ್
ರವೀಂದ್ರನ್ ಅವರು ವಿಚಾರಣೆಗೆ ಗೈರಾಗುತ್ತಿರುವುದು ಇದು ಮೂರನೇ ಬಾರಿ. ಈ ಹಿಂದೆ ಕೋವಿಡ್-19 ಸೋಂಕು ತಗುಲಿರುವುದಾಗಿ ಹೇಳಿದ್ದ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಎರಡನೇ ಬಾರಿಗೆ ಸಮನ್ಸ್ ನೀಡಿದಾಗ ಕೋವಿಡ್ ನಂತರದ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆಗಾಗಿ ತಿರುವನಂತಪುರ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿಸಿದ್ದರು.
ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿ ಕೇರಳ ಮುಖ್ಯಮಂತ್ರಿ ಕಚೇರಿಯ ಮಾಜಿ ಪ್ರಧಾನ ಕಾರ್ಯದರ್ಶಿಯವರು ನ್ಯಾಯಾಂಗ ಬಂಧನದಲ್ಲಿದ್ದಾರೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.