ಭಾನುವಾರ, ಮೇ 16, 2021
28 °C
ಚಿನ್ನ ಕಳ್ಳ ಸಾಗಣೆ ಪ್ರಕರಣ, ಸಿಎಂ ವಿರುದ್ಧ ಹೇಳಿಕೆ ನೀಡುವಂತೆ ಒತ್ತಾಯಿಸಿದ ಪ್ರಕರಣ

ಕೇರಳ: ಇ.ಡಿ ಅಧಿಕಾರಿಗಳ ವಿರುದ್ಧದ ಎಫ್‌ಐಆರ್ ವಜಾಗೊಳಿಸಿದ ನ್ಯಾಯಾಲಯ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ಕೊಚ್ಚಿ: ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರುದ್ಧ ಹೇಳಿಕೆ ನೀಡುವಂತೆ ಬಲವಂತಪಡಿಸಿದ ಆರೋಪದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ವಿರುದ್ಧ ರಾಜ್ಯ ಪೊಲೀಸರು ದಾಖಲಿಸಿದ್ದ ಎರಡು ಎಫ್‌ಐಆರ್‌ಗಳನ್ನು ಕೇರಳ ಹೈಕೋರ್ಟ್‌ ಶುಕ್ರವಾರ ರದ್ದುಪಡಿಸಿದೆ.

ಎಫ್‌ಐಆರ್ ರದ್ದುಗೊಳಿಸಿದ ನ್ಯಾಯಾಲಯ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅಕ್ರಮ ಹಣ ವರ್ಗಾವಣೆ ಪ್ರಕರಣಗಳ ವಿಚಾರಣೆ ನಡೆಸುವ ವಿಶೇಷ ನ್ಯಾಯಾಲಯದ ಮೊರೆ ಹೋಗುವಂತೆ ಸೂಚಿಸಿತು.

ಇದೇ ವೇಳೆ ನ್ಯಾಯಾಲಯ, ತನಿಖೆ ಅವಧಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಗ್ರಹಿಸಿದ ಎಲ್ಲ ಮಾಹಿತಿಗಳನ್ನು ಮುಚ್ಚಿದ ಲಕೋಟೆಯಲ್ಲಿಟ್ಟು ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸುವಂತೆ ತನಿಖಾಧಿಕಾರಿಗೆ ನಿರ್ದೇಶಿಸಿತು.

ಚಿನ್ನ ಕಳ್ಳ ಸಾಗಣೆ ಪ್ರಕರಣದ ಪ್ರಮುಖ ರೂವಾರಿ ಸ್ವಪ್ನಾ ಸುರೇಶ್‌ ಅವರ ಆಡಿಯೊ ಹೇಳಿಕೆಯೊಂದು ಇತ್ತೀಚೆಗೆ ವೈರಲ್‌ ಆಗಿತ್ತು. ಅದರಲ್ಲಿ ಪ್ರಕರಣದಲ್ಲಿ ಪಿಣರಾಯಿ ವಿಜಯನ್‌ ಅವರನ್ನು ಸಿಲುಕಿಸುವಂತೆ ಇ.ಡಿ ಅಧಿಕಾರಿಗಳು ತಮಗೆ ಬಲವಂತ ಮಾಡಿದ್ದರು ಎಂದು ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ಪೊಲೀಸರು ಇ.ಡಿ ವಿರುದ್ಧ ಕೇಸು ದಾಖಲಿಸಿಕೊಂಡಿದ್ದರು.

ಪೊಲೀಸರು ದಾಖಲಿಸಿದ್ದ ಎರಡು ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಇ.ಡಿ ಅಧಿಕಾರಿಗಳು ನ್ಯಾಯಾಲಯದ ಮೊರೆ ಹೋಗಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು