ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷ್ಣಾ ಮೇಲ್ದಂಡೆ, ಕಳಸಾ– ಬಂಡೂರಿ: ‘ರಾಷ್ಟ್ರೀಯ ಯೋಜನೆ’ ಘೋಷಣೆಗೆ ಮನವಿ

Last Updated 29 ಮಾರ್ಚ್ 2022, 16:30 IST
ಅಕ್ಷರ ಗಾತ್ರ

ನವದೆಹಲಿ: ಕೃಷ್ಣಾ ಮೇಲ್ದಂಡೆ ಹಾಗೂ ಕಳಸಾ– ಬಂಡೂರಿ ಯೋಜನೆಗಳನ್ನು ಶೀಘ್ರವೇ ರಾಷ್ಟ್ರೀಯ ಯೋಜನೆ ಎಂದು ಘೋಷಿಸುವ ಮೂಲಕ ಉತ್ತರ ಕರ್ನಾಟಕ ಭಾಗದ ಜನರ ನೆರವಿಗೆ ಬರಬೇಕು ಎಂದು ಕಾಂಗ್ರೆಸ್‌ ಸದಸ್ಯ ಜಿ.ಸಿ. ಚಂದ್ರಶೇಖರ್‌ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ರಾಜ್ಯಸಭೆಯಲ್ಲಿ ಮಂಗಳವಾರ ಶೂನ್ಯವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿರುವ ಅವರು, ಕೃಷ್ಣಾ ಮೇಲ್ದಂಡೆ ಯೋಜನೆಯು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಂಡಲ್ಲಿ, ಅಂದಾಜು 5.90 ಲಕ್ಷ ಹೆಕ್ಟೆರ್‌ ಭೂಮಿಗೆ ನೀರಾವರಿ ಸೌಲಭ್ಯ ದೊರೆಯಲಿದೆ. ಇದರಿಂದ ಉತ್ತರ ಕರ್ನಾಟಕ ಭಾಗದ 7 ಜಿಲ್ಲೆಗಳ ರೈತರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಮಲಪ್ರಭಾ ನದಿಯೊಂದಿಗೆ ಮಹದಾಯಿ ನದಿಯನ್ನು ಜೋಡಿಸುವ ಕಳಸಾ– ಬಂಡೂರಿ ಯೋಜನೆ ಜಾರಿಯಾದಲ್ಲಿ ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ ಜಿಲ್ಲೆಗಳ ಜನರಿಗೆ ಕುಡಿಯುವ ನೀರು ದೊರೆಯಲಿದೆ ಎಂದು ಅವರು ವಿವರಿಸಿದರು.

ಉತ್ತರ ಕರ್ನಾಟಕ ಭಾಗದ ಶೇ 80ಕ್ಕೂ ಅಧಿಕ ರೈತರು ತಲಾ 2ರಿಂದ 3 ಎಕರೆ ಕೃಷಿ ಜಮೀನನ್ನು ಮಾತ್ರ ಹೊಂದಿದ್ದು, ಅವರ ಬಡತನ ಪರಿಗಣಿಸಿಯೇ ಕೇಂದ್ರದಲ್ಲಿದ್ದ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಆ ಭಾಗವನ್ನು ಅತ್ಯಂತ ಹಿಂದುಳಿದ ಪ್ರದೇಶ ಎಂದು ಘೋಷಿಸಿತ್ತು. ಅಲ್ಲದೆ, ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ 371(ಜೆ) ವಿಧಿ ಅಡಿ ವಿಶೇಷ ಸ್ಥಾನಮಾನ ನೀಡಿತ್ತು. ಅತ್ಯಂತ ಹಿಂದುಳಿದಿರುವ ಈ ಪ್ರದೇಶಗಳಿಗೆ ಈ ಯೋಜನೆಗಳಿಂದ ಪ್ರಯೋಜನವಾಗಲಿದೆ ಎಂದು ಅವರು ತಿಳಿಸಿದರು.

ಕೇಂದ್ರ ಸರ್ಕಾರದ ಪ್ರಸ್ತಾವಿತ ಕೃಷ್ಣಾ– ಪಾಲಾರ್ ನದಿ ಜೋಡಣೆ ಯೋಜನೆ ಜಾರಿಗೆ ಕ್ರಮ ಕೈಗೊಂಡು, ಕರ್ನಾಟಕಕ್ಕೆ ಅಗತ್ಯ ಪ್ರಮಾಣದ ನೀರನ್ನು ಹಂಚಿಕೆ ಮಾಡಬೇಕು ಎಂದೂ ಅವರು ಇದೇ ವೇಳೆ ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT