ಗುರುವಾರ , ಮೇ 26, 2022
31 °C
'ನಾಯಕತ್ವ ಬದಲಾವಣೆ ಗೊಂದಲ ನಿವಾರಿಸಲು ಮುಂದಿನ ವಾರ ಕರ್ನಾಟಕಕ್ಕೆ'

ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಬದಲಿಸುವ ಪ್ರಶ್ನೆಯೇ ಇಲ್ಲ: ಅರುಣ್ ಸಿಂಗ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬದಲಿಸುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ತಿಳಿಸಿದರು.

ಇಲ್ಲಿನ ತಮ್ಮ ನಿವಾಸದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್‌–19 ಸಂದಿಗ್ಧ ಪರಿಸ್ಥಿತಿಯನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಿರುವ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಹೈಕಮಾಂಡ್‌ ಎದುರು ಯಾವುದೇ ಪ್ರಸ್ತಾವನೆ ಇಲ್ಲ. ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದರು.

‘ಪಕ್ಷವು ಎಲ್ಲಾ ರಾಜ್ಯಗಳಲ್ಲಿರುವ ಕಾರ್ಯಕರ್ತರು, ಮುಖಂಡರು ಸೇರಿದಂತೆ ಪ್ರತಿಯೊಬ್ಬರಿಗೂ ಮಾರ್ಗದರ್ಶನ ನೀಡುತ್ತದೆ. ಅದೇ ರೀತಿ, ಪಕ್ಷದ ಹೈಕಮಾಂಡ್‌ ಮೇಲೂ ಪ್ರತಿಯೊಬ್ಬರಿಗೆ ವಿಶ್ವಾಸ ಇರುತ್ತದೆ. ಯಡಿಯೂರಪ್ಪ ಅವರೂ ಹೈಕಮಾಂಡ್‌ ಮಾರ್ಗದರ್ಶನದ ಮೇರೆಗೆ ಕಾರ್ಯ ನಿರ್ವಹಿಸುತ್ತೇನೆ ಎಂದು ಹೇಳಿರುವುದರಲ್ಲಿ ತಪ್ಪೇನೂ ಇಲ್ಲ’ ಎಂದು ಅವರು ಹೇಳಿದರು.

‘ಕೆಲವು ಶಾಸಕರು ಯಡಿಯೂರಪ್ಪ ವಿರುದ್ಧ ದನಿ ಎತ್ತಿದ್ದರೆ, ಇನ್ನು ಕೆಲವರು ಅವರ ಪರ ಸಹಿ ಸಂಗ್ರಹ ಕಾರ್ಯದಲ್ಲಿ ತೊಡಗಿದ್ದಾರೆ ಎಂಬ ಮಾಹಿತಿ ದೊರೆತಿದೆ. ಜೂನ್‌ 16 ಅಥವಾ 17ರಿಂದ ಮೂರು ದಿನಗಳ ಕಾಲ ನಾನು ಕರ್ನಾಟಕಕ್ಕೆ ಭೇಟಿ ನೀಡಲಿದ್ದೇನೆ. ಅವರೆಲ್ಲರ ಅಹವಾಲುಗಳನ್ನು ಆಲಿಸುತ್ತೇನೆ. ಮಾತುಕತೆ ಮೂಲಕ ಗೊಂದಲ ನಿವಾರಿಸುತ್ತೇನೆ’ ಎಂದು ಅವರು ಸ್ಪಷ್ಟಪಡಿಸಿದರು.

ಸಾರ್ವಜನಿಕ ಜೀವನದಲ್ಲಿ ಇರುವ ಶಾಸಕರು ಬಹಿರಂಗವಾಗಿ ಯಾವುದೇ ರೀತಿಯ ಹೇಳಿಕೆ ನೀಡುವುದು ಸರಿಯಲ್ಲ. ಈಗಾಗಲೇ ಬಹಿರಂಗ ಹೇಳಿಕೆ ನೀಡಿದವರೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಅವರು ವಿವರಿಸಿದರು.

ಶಾಸಕರು ತಮ್ಮ ಕ್ಷೇತ್ರದ ಜನರ ಸೇವೆ ಮಾಡಬೇಕು. ರಾಜ್ಯದ ಒಳಿತನ್ನೇ ಆಲೋಚಿಸಬೇಕು. ಈ ನಿಟ್ಟಿನಲ್ಲಿ ಅವರೊಂದಿಗೆ ಸಮಾಲೋಚನೆ ನಡೆಸಿ, ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು. ಶಾಸಕಾಂಗ ಪಕ್ಷದ ಸಭೆ ನಡೆಸಬೇಕೇ ಬೇಡವೇ ಎಂಬ ಕುರಿತೂ ಆಗಲೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

‘ರಾಜ್ಯ ಘಟಕದ ಅಧ್ಯಕ್ಷರನ್ನೂ ಬದಲಿಸುವ ಬಗ್ಗೆ ಚರ್ಚೆ ನಡೆದಿದೆಯೇ’ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಂಘಟನೆ ಕಾರ್ಯದಲ್ಲಿ ಅವರು ತಮ್ಮನ್ನು ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು.

ಮುಖ್ಯಮಂತ್ರಿ ಸ್ಥಾನ ಮತ್ತು ಅಧ್ಯಕ್ಷ ಸ್ಥಾನದಲ್ಲಿ ಬದಲಾವಣೆ ತರಲಾಗುತ್ತದೆ ಎಂಬುದು ಕೇವಲ ವದಂತಿ ಮತ್ತು ಊಹೆ ಎಂದು ಅವರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು