ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ

Last Updated 26 ಅಕ್ಟೋಬರ್ 2022, 6:28 IST
ಅಕ್ಷರ ಗಾತ್ರ

ನವದೆಹಲಿ: ಕಾಂಗ್ರೆಸ್‌ ಪಕ್ಷದ ನೂತನ ಅಧ್ಯಕ್ಷರಾಗಿ ಚುನಾಯಿತರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಇಂದು (ಬುಧವಾರ) ಅಧಿಕಾರ ವಹಿಸಿಕೊಂಡರು.

ನವದೆಹಲಿಯಲ್ಲಿರುವ ಪಕ್ಷದ ಮುಖ್ಯ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ನ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ ಮಿಸ್ತ್ರಿ ಅವರು ಚುನಾವಣೆಯಲ್ಲಿ ಆಯ್ಕೆಯಾಗಿರುವ ಪ್ರಮಾಣಪತ್ರವನ್ನು ಖರ್ಗೆ ಅವರಿಗೆ ಹಸ್ತಾಂತರಿಸಿದರು.

ಪಕ್ಷದ ನಿರ್ಗಮಿತ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಖರ್ಗೆ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಈ ಮೂಲಕ ನೆಹರೂ–ಗಾಂಧಿ ಕುಟುಂಬದ ಹೊರಗಿನವರೊಬ್ಬರು 24 ವರ್ಷಗಳ ಬಳಿಕ ಪಕ್ಷದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದರು.

ಪಕ್ಷದ ಅತ್ಯುನ್ನತ ಹುದ್ದೆಗೆ ನಡೆದ ಚುನಾವಣೆಯಲ್ಲಿ ಖರ್ಗೆ ಅವರು ಸಂಸದ ಶಶಿ ತರೂರ್ ಅವರನ್ನು ಮಣಿಸಿದ್ದರು.

ಸಮಾರಂಭದಲ್ಲಿ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಸಂಸದ ರಾಹುಲ್ ಗಾಂಧಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಿರಿಯ ನಾಯಕರು ಮತ್ತು ಸಂಸದರು ಉಪಸ್ಥಿತರಿದ್ದರು.

ಅಧಿಕಾರ ವಹಿಸಿಕೊಳ್ಳುವುದಕ್ಕೂ ಮುನ್ನ ಖರ್ಗೆ ಅವರು ಇಂದು ಬೆಳಗ್ಗೆ ರಾಜ್‌ಘಾಟ್‌ನಲ್ಲಿರುವ ಮಹಾತ್ಮ ಗಾಂಧಿ ಸ್ಮಾರಕಕ್ಕೆಭೇಟಿ ನೀಡಿ ನಮನ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು, ಲಾಲ್ ಬಹದ್ದೂರ್ ಶಾಸ್ತ್ರಿ, ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರ ಸ್ಮಾರಕಗಳಿಗೂ ನಮನ ಸಲ್ಲಿಸಿದರು.

ಖರ್ಗೆ ಎದುರಿನ ಸವಾಲು:ಕಾಂಗ್ರೆಸ್ ಪಕ್ಷವುಚುನಾವಣೆಗಳಲ್ಲಿ ಒಂದಾದ ನಂತರ ಒಂದರಂತೆ ಸೋಲು ಕಾಣುತ್ತ ತನ್ನ ರಾಜಕೀಯ ಇತಿಹಾಸದಲ್ಲಿಯೇ ಅತ್ಯಂತ ಸಂಕಷ್ಟದ ಸ್ಥಿತಿಯಲ್ಲಿರುವಾಗ 80 ವರ್ಷ ವಯಸ್ಸಿನ ಖರ್ಗೆ ಅವರು ಪಕ್ಷದ ಸಾರಥ್ಯ ವಹಿಸಿಕೊಳ್ಳುತ್ತಿದ್ದಾರೆ.

ಅತ್ಯಂತ ಹಳೆಯ ಪಕ್ಷವಾಗಿರುವ ಕಾಂಗ್ರೆಸ್‌ ಸದ್ಯ ರಾಜಸ್ಥಾನ ಮತ್ತು ಛತ್ತೀಸಗಡದಲ್ಲಿ ಮಾತ್ರ ಅಧಿಕಾರದಲ್ಲಿದೆ.ಈ ಮಧ್ಯೆ ಹಿಮಾಚಲ ಪ್ರದೇಶ ಮತ್ತು ಗುಜರಾತ್‌ನಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ಇಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವುದು ಖರ್ಗೆ ಎದುರಿಗಿರುವ ಮೊದಲ ಸವಾಲಾಗಿದೆ. ಆ ನಂತರ 2023ರಲ್ಲಿ ಕರ್ನಾಟಕ ಸೇರಿ 9 ರಾಜ್ಯಗಳ ವಿಧಾನಸಭೆಗಳಿಗೆ ಚುನಾವಣೆ ನಡೆಯಲಿದ್ದು, ಇದಕ್ಕಾಗಿ ಪಕ್ಷವನ್ನು ಸಜ್ಜುಗೊಳಿಸಬೇಕಿದೆ. ಜೊತೆಗೆ ಆಂತರಿಕ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿ ಪಕ್ಷಕ್ಕೆ ಶಕ್ತಿ ತುಂಬಬೇಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT