ದಾವೂದ್ ಇಬ್ರಾಹಿಂ ಹೆಸರಲ್ಲಿ ಕರೆ: ಉದ್ಧವ್ ಠಾಕ್ರೆ ನಿವಾಸದ ಹೊರಗೆ ಬಿಗಿ ಭದ್ರತೆ

ಮುಂಬೈ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪರವಾಗಿ ದುಬೈನಿಂದ ಕರೆ ಮಾಡುತ್ತಿದ್ದೇನೆ ಎಂದು ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿದ ನಂತರ ಮುಂಬೈನ ಬಾಂದ್ರಾದಲ್ಲಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ನಿವಾಸ ‘ಮಾತೋಶ್ರೀ’ಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
'ಮಾತೋಶ್ರೀ ನಿವಾಸದಲ್ಲಿನ ಲ್ಯಾಂಡ್‌ಲೈನ್‌ಗೆ ಎರಡು ಕರೆಗಳು ಬಂದ ನಂತರ ಮುನ್ನೆಚ್ಚರಿಕೆ ಕ್ರಮವಾಗಿ ಮಹಾರಾಷ್ಟ್ರ ಸಿಎಂ ಅವರ ನಿವಾಸದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಕರೆ ಮಾಡಿದವರು ದಾವೂದ್ ಪರವಾಗಿ ಕರೆ ಮಾಡುತ್ತಿರುವುದಾಗಿ ಹೇಳಿದ್ದಾರೆ' ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
'ಸಿಎಂ ಠಾಕ್ರೆ ಅವರ ನಿವಾಸದಲ್ಲಿನ ಫೋನ್ ಶನಿವಾರ ರಾತ್ರಿ 10.30ರ ಸುಮಾರಿಗೆ ಎರಡು ಬಾರಿ ರಿಂಗಣಿಸಿತು. ಕರೆ ಮಾಡಿದವರು ಸಿಎಂ ಅವರೊಂದಿಗೆ ಮಾತನಾಡಲು ಬಯಸಿದ್ದರು. ನಾವು ಕರೆ ಮಾಡಿದವರನ್ನು ಪತ್ತೆ ಮಾಡಲು ಪ್ರಯತ್ನಿಸುತ್ತಿದ್ದೇವೆ' ಎಂದು ಹೇಳಿದ್ದಾರೆ.
ಕರೆಗಳ ಬಗ್ಗೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಬಳಿಕ ಬಂಗಲೆಯ ಹೊರಗೆ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.
'ನಾವು ಸ್ವೀಕರಿಸಿದ ಕರೆಗಳು ದುಬೈ ಅಥವಾ ಇನ್ನಾವುದೇ ಸ್ಥಳದಿಂದ ಬಂದಿದೆಯೇ ಎನ್ನುವ ಕುರಿತು ಪರಿಶೀಲಿಸಲು ಪ್ರಯತ್ನಿಸುತ್ತಿದ್ದೇವೆ. ತನಿಖೆ ಮುಂದುವರೆದಿದೆ' ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.