ನವದೆಹಲಿ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ನಿಧನದಿಂದ ಭಾರತೀಯ ರಾಜಕೀಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಕಾಂಗ್ರೆಸ್ ಹೇಳಿದೆ.
ಮುಲಾಯಂ ಸಿಂಗ್ ಯಾದವ್ ಅವರು ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಇಂದು ನಿಧನರಾದರು. ಅವರಿಗೆ 82 ವರ್ಷ ವಯಸ್ಸಾಗಿತ್ತು.
ಕಾಂಗ್ರೆಸ್ ಅಧಿಕೃತ ಟ್ವಿಟರ್ ಖಾತೆಯ ಮೂಲಕ ಟ್ವೀಟ್ ಮಾಡಲಾಗಿದ್ದು, ಮುಲಾಯಂ ಅವರಿಗೆ ಸದ್ಗತಿ ದೊರೆಯಲಿ. ಅವರ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಹೇಳಿದೆ.
ಮುಲಾಯಂ ನಿಧನಕ್ಕೆ ಸಂತಾಪ ಸೂಚಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂದಿ ವಾದ್ರಾ, ರಕ್ಷಣಾ ಸಚಿವರಾಗಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಮುಲಾಯಂ ಭಾರತೀಯ ರಾಜಕೀಯಕ್ಕೆ ನೀಡಿರುವ ಕೊಡುಗೆ ಎಂದಿಗೂ ಅವಿಸ್ಮರಣೀಯ ಎಂದು ಹೇಳಿದರು.
ಮುಲಾಯಂ ಅಗಲಿಕೆಗೆ ಸಂತಾಪ ಸೂಚಿಸಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಮುಲಾಯಂ ಅಧಿಕಾರವಧಿಯು ಪರಿಣಾಮಕಾರಿಯಾಗಿತ್ತು. ಎರಡು ಸಂದರ್ಭಗಳಲ್ಲಿ ರಾಷ್ಟ್ರೀಯ ನಾಯಕತ್ವ ವಹಿಸಿದ್ದರು. ಮಾಜಿ ಪ್ರಧಾನಿಗಳಾದ ದೇವೇಗೌಡ ಮತ್ತು ಗುಜ್ರಾಲ್ ಸರ್ಕಾರಗಳಲ್ಲಿ ರಕ್ಷಣಾ ಸಚಿವರಾಗಿ ಮತ್ತು 2002ರಲ್ಲಿ ರಾಷ್ಟ್ರಪತಿ ಹುದ್ದೆಗೆ ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಹೆಸರನ್ನು ಪ್ರಸ್ತಾಪಿಸಿದ್ದರು ಎಂದು ಉಲ್ಲೇಖಿಸಿದ್ದಾರೆ.
ನಾನು ಮಾಜಿ ರಕ್ಷಣಾ ಸಚಿವ ಮುಲಾಯಂ ಸಿಂಗ್ ಅವರನ್ನು ವಿಶ್ವಸಂಸ್ಥೆಯಲ್ಲಿ ಭೇಟಿಯಾಗಿದ್ದೆ. ನಂತರ ಲೋಕಸಭೆಯಲ್ಲಿ ಅವರೊಂದಿಗೆ ವಿಚಾರ ವಿನಿಮಯ ಮಾಡಿಕೊಂಡಿದ್ದೆ. ರಾಜಕೀಯ ದಿಗ್ಗಜರೊಬ್ಬರು ನಮ್ಮನ್ನು ಅಗಲಿದ್ದಾರೆ. ಇದು ಎಲ್ಲ ಭಾರತೀಯರಿಗೆ ತುಂಬಲಾರದ ನಷ್ಟವಾಗಿದೆ. ಓಂ ಶಾಂತಿ ಎಂದು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಅಭ್ಯರ್ಥಿ ಶಶಿ ತರೂರ್ ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.